ನವದೆಹಲಿ: ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಘನತೆ ಕಾಪಾಡುವುದು, ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವುದು ಹಾಗೂ ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕನ್ನು ಸಂರಕ್ಷಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಹೇಳಿದರು.

ನವದೆಹಲಿಯಲ್ಲಿ INDIA ಮೈತ್ರಿಕೂಟದ ವತಿಯಿಂದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಹಮ್ಮಿಕೊಂಡಿದ್ದ ‘ದೆಹಲಿ ಚಲೋ’ ಪ್ರತಿಭಟನಾ ಅಭಿಯಾನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪ್ರಜಾಪ್ರಭುತ್ವವೆಂದರೆ ಕೇವಲ ಆಡಳಿತ ನಡೆಸುವ ವ್ಯವಸ್ಥೆಯಲ್ಲ. ಅದು ದೇಶದ ಪ್ರತಿಯೊಬ್ಬ ನಾಗರಿಕನ ಧ್ವನಿ, ಹಕ್ಕು, ಸ್ವಾತಂತ್ರ್ಯ ಹಾಗೂ ಸ್ವಾಭಿಮಾನದ ಪ್ರತೀಕವಾಗಿದೆ. ಸಂವಿಧಾನವು ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಮತದಾನದ ಹಕ್ಕನ್ನು ನೀಡಿದ್ದು, ಆ ಹಕ್ಕಿನ ರಕ್ಷಣೆಗಾಗಿ ನಿರಂತರವಾಗಿ ಜಾಗೃತರಾಗಿರುವುದು ಅಗತ್ಯವಾಗಿದೆ ಎಂದು ತಿಳಿಸಿದರು.

ದೇಶದ ಚುನಾವಣಾ ವ್ಯವಸ್ಥೆಯು ಪಾರದರ್ಶಕ, ನಿಷ್ಪಕ್ಷಪಾತ ಹಾಗೂ ವಿಶ್ವಾಸಾರ್ಹವಾಗಿರಬೇಕು. ಚುನಾವಣಾ ಪ್ರಕ್ರಿಯೆಯ ಬಗ್ಗೆ ಸಾರ್ವಜನಿಕರಲ್ಲಿ ಅನುಮಾನಗಳು ಮೂಡದಂತೆ ನೋಡಿಕೊಳ್ಳುವುದು ಚುನಾವಣಾ ಆಯೋಗದ ಪ್ರಮುಖ ಕರ್ತವ್ಯವಾಗಿದೆ. ಪ್ರಜಾಪ್ರಭುತ್ವದ ಮೂಲಾಧಾರವಾಗಿರುವ ಚುನಾವಣಾ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸಕ್ಕೆ ಧಕ್ಕೆಯಾಗಬಾರದು ಎಂದು ಅಭಿಪ್ರಾಯಪಟ್ಟರು.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಕಾರ್ಯವೈಖರಿ ಕುರಿತು INDIA ಮೈತ್ರಿಕೂಟದ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದು, ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಕಾಪಾಡುವ ದೃಷ್ಟಿಯಿಂದ ಅವರು ತಮ್ಮ ಸ್ಥಾನಕ್ಕೆ ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಪ್ರಜಾಸತ್ತಾತ್ಮಕ ಶಕ್ತಿಯಾಗಿದೆ. ಯಾವುದೇ ಕಾರಣಕ್ಕೂ ಈ ಹಕ್ಕಿಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಸಂವಿಧಾನದ ಮೌಲ್ಯಗಳು ಮತ್ತು ಪ್ರಜಾಪ್ರಭುತ್ವದ ತತ್ವಗಳನ್ನು ಉಳಿಸುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕಾಗಿದೆ ಎಂದು ಹೇಳಿದರು.

ಪ್ರಜಾಪ್ರಭುತ್ವದ ರಕ್ಷಣೆಗಾಗಿ ನಡೆಯುವ ಹೋರಾಟವು ಯಾವುದೇ ಒಬ್ಬ ವ್ಯಕ್ತಿ ಅಥವಾ ಪಕ್ಷಕ್ಕೆ ಸೀಮಿತವಾಗಿಲ್ಲ. ದೇಶದ ಪ್ರತಿಯೊಬ್ಬ ನಾಗರಿಕನ ಹಕ್ಕು ಮತ್ತು ಭವಿಷ್ಯಕ್ಕೆ ಸಂಬಂಧಿಸಿದ ವಿಷಯವಾಗಿದೆ. ಹೀಗಾಗಿ ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ನಿಷ್ಪಕ್ಷಪಾತತೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಕರ್ನಾಟಕದ ಸಚಿವರು, ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ INDIA ಮೈತ್ರಿಕೂಟದ ವಿವಿಧ ಪಕ್ಷಗಳ ಪ್ರತಿನಿಧಿಗಳು ಭಾಗವಹಿಸಿದ್ದರು.