ರಾಯಚೂರು: ವಾಜಪೇಯಿ ನಗರ ನಿವೇಶನ ಯೋಜನೆಯಡಿ ನಿವೇಶನ ರಹಿತರಿಗೆ ಮಂಜೂರಾಗಿರುವ ಸರ್ವೆ ನಂ. 581ರ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಿಸಿರುವ ಶೆಡ್‌ಗಳನ್ನು ತೆರವುಗೊಳಿಸಿ, ನಿವೇಶನ ಅಭಿವೃದ್ಧಿ ಕಾಮಗಾರಿಯನ್ನು ಕೂಡಲೇ ಪ್ರಾರಂಭಿಸಬೇಕು ಎಂದು ಜನಾರ್ಧನ ಹಳ್ಳಿಬೆಂಚಿ ಆಗ್ರಹಿಸಿದರು.

ನಗರದ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವ ಬಡ ಕುಟುಂಬಗಳು ಹಾಗೂ ಬೀದಿಬದಿಯಲ್ಲಿ ಜೀವನ ನಡೆಸುತ್ತಿರುವ ನಿವೇಶನ ರಹಿತರು ಸುಮಾರು ಹತ್ತು ವರ್ಷಗಳಿಂದ ನಿರಂತರ ಹೋರಾಟ ನಡೆಸಿದ ಪರಿಣಾಮ ವಾಜಪೇಯಿ ನಗರ ನಿವೇಶನ ಯೋಜನೆಯಡಿ ಸರ್ವೆ ನಂ. 581ರಲ್ಲಿ ನಿವೇಶನಗಳನ್ನು ಮಂಜೂರು ಮಾಡಲಾಗಿದೆ. ಆದರೆ ಮಂಜೂರಾದ ಭೂಮಿಯಲ್ಲಿ ಕೆಲ ಸ್ಥಳೀಯ ಜನಪ್ರತಿನಿಧಿಗಳು ಹಣ ಪಡೆದು ಅನರ್ಹ ವ್ಯಕ್ತಿಗಳಿಗೆ ಅಕ್ರಮವಾಗಿ ಶೆಡ್‌ಗಳನ್ನು ನಿರ್ಮಿಸಿಕೊಟ್ಟಿದ್ದಾರೆ ಎಂದು ಆರೋಪಿಸಿದರು.

ಬಡವರು ಸ್ವಂತ ಸೂರಿನ ಕನಸಿನೊಂದಿಗೆ ಹಲವು ವರ್ಷಗಳಿಂದ ನಿವೇಶನಕ್ಕಾಗಿ ಕಾಯುತ್ತಿದ್ದಾರೆ. ಆದರೆ ಮಂಜೂರಾದ ಭೂಮಿಯಲ್ಲಿ ಅಕ್ರಮ ಶೆಡ್‌ಗಳ ನಿರ್ಮಾಣದಿಂದ ನಿಜವಾದ ಫಲಾನುಭವಿಗಳಿಗೆ ನಿವೇಶನ ದೊರೆಯುವ ಪ್ರಕ್ರಿಯೆಗೆ ಅಡ್ಡಿಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ ಅಕ್ರಮ ನಿರ್ಮಾಣಗಳನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು.

ಸರ್ವೆ ನಂ. 581, 929/2, 726 ಹಾಗೂ 727ರ ಭೂಮಿಗಳಲ್ಲಿ ನಿವೇಶನ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳ ಮೂಲಸೌಕರ್ಯ ಯೋಜನೆಯಡಿ ₹10 ಕೋಟಿ ಅನುದಾನ ಮಂಜೂರಾಗಿದೆ. ಕಾಮಗಾರಿಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆಯೂ ಪೂರ್ಣಗೊಂಡಿದೆ. ಆದರೂ ಟೆಂಡರ್ ಪಡೆದ ಗುತ್ತಿಗೆದಾರರು ಇದುವರೆಗೂ ಕಾಮಗಾರಿ ಆರಂಭಿಸದಿರುವುದು ಫಲಾನುಭವಿಗಳಲ್ಲಿ ಅಸಮಾಧಾನ ಮೂಡಿಸಿದೆ ಎಂದು ತಿಳಿಸಿದರು.

ಸರ್ಕಾರದಿಂದ ಅನುದಾನ ಬಿಡುಗಡೆಯಾಗಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದರೂ ಅಭಿವೃದ್ಧಿ ಕಾಮಗಾರಿ ವಿಳಂಬವಾಗುತ್ತಿರುವುದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಸ್ಪಷ್ಟನೆ ನೀಡಬೇಕು. ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿ ತಕ್ಷಣ ಕಾಮಗಾರಿ ಆರಂಭಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಅಕ್ರಮವಾಗಿ ಶೆಡ್‌ಗಳನ್ನು ನಿರ್ಮಿಸಲು ಕಾರಣರಾದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ನಿವೇಶನ ರಹಿತರಿಗೆ ಮಂಜೂರಾದ ಭೂಮಿಯನ್ನು ರಕ್ಷಿಸಿ, ಅರ್ಹ ಫಲಾನುಭವಿಗಳಿಗೆ ನಿವೇಶನಗಳನ್ನು ಹಂಚಿಕೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷ ಜನಾರ್ಧನ ಹಳ್ಳಿಬೆಂಚಿ, ಪ್ರಧಾನ ಕಾರ್ಯದರ್ಶಿ ಬಸವದ ಹೊಸೂರು, ಶಂಕ್ರಮ್ಮ, ಹುಲಿಗೆಮ್ಮ ಸೇರಿದಂತೆ ಇತರರು ಉಪಸ್ಥಿತರಿದ್ದರು.