ಮಾನ್ವಿ: ತಾಲೂಕಿನಲ್ಲಿ ಸಮರ್ಪಕ ಮಳೆಯಾಗದೆ ಬರಗಾಲದ ಪರಿಸ್ಥಿತಿ ಎದುರಾಗಿದ್ದು, ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಹಾಗೂ ಕೃಷಿ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಕಿಸಾನ್ ಸಂಘಟನೆಯ ತಾಲೂಕು ಸಮಿತಿ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ಬಸವ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಸಂಘಟನೆಯ ಪದಾಧಿಕಾರಿಗಳು ಹಾಗೂ ರೈತರು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಹಶೀಲ್ದಾರ್ ಭೀಮರಾಯ ಬಿ. ರಾಮಸಮುದ್ರ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಖಿಲ ಭಾರತ ಕಿಸಾನ್ ಸಂಘಟನೆಯ ರಾಜ್ಯ ಸಂಚಾಲಕ ಬಸಲಿಂಗಪ್ಪ, ಮಾನ್ವಿ ಹಾಗೂ ಸಿರವಾರ ತಾಲೂಕುಗಳಲ್ಲಿ ಸಮರ್ಪಕ ಮಳೆಯಾಗದೆ ರೈತರ ಬೆಳೆಗಳು ಹಾನಿಗೊಳಗಾಗಿವೆ. ಕೃಷಿಗಾಗಿ ಸಾಲ ಮಾಡಿ ಬಿತ್ತನೆ ಮಾಡಿರುವ ರೈತರು ಬೆಳೆ ನಷ್ಟದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ತಕ್ಷಣವೇ ಬೆಳೆ ನಷ್ಟದ ಸಮೀಕ್ಷೆ ನಡೆಸಿ ಪರಿಹಾರ ವಿತರಿಸಬೇಕು. ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡುವ ಮೂಲಕ ಸಂಕಷ್ಟದಲ್ಲಿರುವ ಅನ್ನದಾತರಿಗೆ ನೆರವಾಗಬೇಕು ಎಂದು ಒತ್ತಾಯಿಸಿದರು.
ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಕಂತು ಪಾವತಿಸಿರುವ ರೈತರಿಗೆ ವಿಳಂಬವಿಲ್ಲದೆ ವಿಮೆ ಪರಿಹಾರವನ್ನು ನೇರವಾಗಿ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಬೇಕು. ಮಾನ್ವಿ ಮತ್ತು ಸಿರವಾರ ಭಾಗದ ರೈತರ ಜಮೀನುಗಳಿಗೆ ಕಾಲುವೆಗಳ ಮೂಲಕ ಸಮರ್ಪಕವಾಗಿ ನೀರು ಹರಿಸಿ ಬೆಳೆಗಳ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಬರಗಾಲದಿಂದ ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ಕೂಲಿಕಾರರಿಗೆ ಕೆಲಸವಿಲ್ಲದೆ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಇದನ್ನು ತಡೆಗಟ್ಟಲು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಿರಂತರವಾಗಿ ಉದ್ಯೋಗ ಒದಗಿಸಬೇಕು. ಗ್ರಾಮೀಣ ಕುಟುಂಬಗಳಿಗೆ ಜೀವನೋಪಾಯದ ಭದ್ರತೆ ಕಲ್ಪಿಸಬೇಕು ಎಂದು ಹೇಳಿದರು.
ಕಂಬಳತ್ತಿ, ಕುರ್ಡಿ, ಚಿಕಲಪರ್ವಿ, ಅಲದಾಳ, ಮುರಾನಪುರ, ಕೆ. ಗುಡದಿನ್ನಿ, ಗಣದಿನ್ನಿ, ಹಳ್ಳಿ ಸೇರಿದಂತೆ ಮಾನ್ವಿ ಹಾಗೂ ಸಿರವಾರ ತಾಲೂಕುಗಳ ವಿವಿಧ ಗ್ರಾಮಗಳಲ್ಲಿ ಸರ್ಕಾರಿ ಭೂಮಿಯನ್ನು ಸಾಗುವಳಿ ಮಾಡುತ್ತಿರುವ ಅರ್ಹ ರೈತರ ಬಗರ್ ಹುಕುಂ ಅರ್ಜಿಗಳನ್ನು ತಿರಸ್ಕರಿಸದೆ, ನಿಯಮಾನುಸಾರ ಭೂಮಿ ಸಕ್ರಮಗೊಳಿಸಬೇಕು ಎಂದು ಒತ್ತಾಯಿಸಿದರು.
ಅಲ್ಲದೆ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮಗಳ ಭೂ ಒಡೆತನ ಯೋಜನೆಯಡಿ ಒಪ್ಪಿಗೆ ಪತ್ರ ಪಡೆದ ರೈತರ ಜಮೀನುಗಳ ಖರೀದಿ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು. ಭೂಹೀನ ಬಡ ಕುಟುಂಬಗಳಿಗೆ ಭೂಮಿ ಹಂಚಿಕೆ ಮಾಡುವ ಮೂಲಕ ಆರ್ಥಿಕ ಸ್ವಾವಲಂಬನೆಗೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ತಾಲೂಕಿನ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಅಗತ್ಯವಿರುವ ಗ್ರಾಮಗಳಲ್ಲಿ ಹೊಸ ಕೊಳವೆಬಾವಿಗಳನ್ನು ಕೊರೆಸಬೇಕು. ನೀರಿನ ಮೂಲಗಳು ಲಭ್ಯವಿಲ್ಲದ ಕಡೆ ಟ್ಯಾಂಕರ್ಗಳ ಮೂಲಕ ಶುದ್ಧ ಕುಡಿಯುವ ನೀರು ಪೂರೈಸಬೇಕು. ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವಿನ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದರು.
ಬುರಾನಪುರ ಗ್ರಾಮದ ಸರ್ವೆ ನಂಬರ್ 54ರ ಸರ್ಕಾರಿ ಭೂಮಿಯಲ್ಲಿ ನಿವೇಶನರಹಿತ ಬಡ ಕುಟುಂಬಗಳಿಗೆ ನಿವೇಶನಗಳನ್ನು ಗುರುತಿಸಿ ಹಂಚಿಕೆ ಮಾಡಬೇಕು. ರೈತರು, ಕೃಷಿ ಕೂಲಿಕಾರರು ಹಾಗೂ ಬಡವರ ಸಮಸ್ಯೆಗಳಿಗೆ ಸರ್ಕಾರ ಆದ್ಯತೆ ನೀಡಿ ತಕ್ಷಣ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಅಖಿಲ ಭಾರತ ಕಿಸಾನ್ ಸಂಘಟನೆಯ ಜಿಲ್ಲಾಧ್ಯಕ್ಷ ವಿ. ಮುದುಕಪ್ಪ ನಾಯಕ, ದೇವಪ್ಪ ಗುಡದಿನ್ನಿ, ರವಿಕುಮಾರ, ಭೀಮರಾಯ, ದಿಲೀಪ್ ಟೈಲರ್, ಯಲ್ಲಪ್ಪ ನಾಯಕ, ನರಸಪ್ಪ, ಮಲ್ಲಪ್ಪಗೌಡ, ಆನಂದ ಭೋವಿ, ಪ್ರಸಾದ ಕುರ್ಡಿ, ಆಂಜನೇಯ್ಯ ಬಲ್ಲಟ್ಟಗಿ, ಅಂಬ್ರೇಶಪ್ಪ ಚಿಕಲಪರ್ವಿ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ ರೈತರು ಉಪಸ್ಥಿತರಿದ್ದರು.



