ರಾಯಚೂರು, ಅ.13: ದೇಶದ ಅಭಿವೃದ್ಧಿ ಹಾಗೂ ಭವಿಷ್ಯ ರೂಪಿಸುವಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಣದ ಜೊತೆಗೆ ಶಿಸ್ತು, ಸೇವಾ ಮನೋಭಾವ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಂಡಾಗ ಮಾತ್ರ ಸದೃಢ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ಎಲ್‌ವಿಡಿ ಪದವಿ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ಕೃಷ್ಣ ರಾಥೋಡ್ ಅಭಿಪ್ರಾಯಪಟ್ಟರು.

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ, ರಾಯಚೂರು ಹಾಗೂ ಜಿಲ್ಲಾ ವೀರಶೈವ ಲಿಂಗಾಯತ ಸಮಾಜದ ಹೇರೂರು ಚಂದ್ರಾಯಗೌಡ ಮಲ್ಹಾರ ಸಿದ್ದಪ್ಪಗೌಡ ಕರೆಡ್ಡಿ ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ತಾಲೂಕಿನ ಮನ್ಸಲಾಪುರ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಿರುವ ವಾರ್ಷಿಕ ವಿಶೇಷ ಶಿಬಿರದ ಎರಡನೇ ದಿನವಾದ ಮಂಗಳವಾರ ನಡೆದ ‘ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ’ ವಿಷಯದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಯುವಜನರು ದೇಶದ ಭವಿಷ್ಯದ ಶಕ್ತಿಯಾಗಿದ್ದು, ಅವರಲ್ಲಿ ಜ್ಞಾನ, ಕೌಶಲ್ಯ, ನಾಯಕತ್ವ ಹಾಗೂ ಸಮಾಜದ ಬಗ್ಗೆ ಕಾಳಜಿ ಬೆಳೆದಾಗ ರಾಷ್ಟ್ರದ ಪ್ರಗತಿಗೆ ಹೆಚ್ಚಿನ ಕೊಡುಗೆ ನೀಡಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ತಮ್ಮ ವೈಯಕ್ತಿಕ ಸಾಧನೆಗಳ ಜೊತೆಗೆ ಸಮಾಜದ ಅಭಿವೃದ್ಧಿಗೂ ಆದ್ಯತೆ ನೀಡಬೇಕು. ಶಿಕ್ಷಣದಿಂದ ಪಡೆದ ಜ್ಞಾನವನ್ನು ಜನರ ಸಮಸ್ಯೆಗಳಿಗೆ ಸ್ಪಂದಿಸಲು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ರಾಷ್ಟ್ರೀಯ ಸೇವಾ ಯೋಜನೆಯಂತಹ ಚಟುವಟಿಕೆಗಳು ವಿದ್ಯಾರ್ಥಿಗಳಿಗೆ ಗ್ರಾಮೀಣ ಜನಜೀವನವನ್ನು ಹತ್ತಿರದಿಂದ ಅರಿಯಲು ಅವಕಾಶ ಕಲ್ಪಿಸುತ್ತವೆ. ಸಮಾಜದ ವಿವಿಧ ಸಮಸ್ಯೆಗಳನ್ನು ಗುರುತಿಸುವುದರ ಜೊತೆಗೆ ಅವುಗಳ ಪರಿಹಾರಕ್ಕೆ ತಮ್ಮಿಂದ ಸಾಧ್ಯವಾದ ಕೊಡುಗೆ ನೀಡುವ ಮನೋಭಾವವನ್ನು ಯುವಜನರು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಹಾವಿದ್ಯಾಲಯದ ಪ್ರಾಂಶುಪಾಲ ಪರ್ವತರೆಡ್ಡಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಶಿಸ್ತು, ಸಮಯಪ್ರಜ್ಞೆ, ಸೇವಾಭಾವ ಹಾಗೂ ಜವಾಬ್ದಾರಿಯುತ ನಡೆ ಅತ್ಯಂತ ಮುಖ್ಯವಾಗಿದೆ. ಯುವಕರು ಶಿಕ್ಷಣದ ಜೊತೆಗೆ ಸಾಮಾಜಿಕ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ವೀರಶೈವ ಲಿಂಗಾಯತ ಸಮಾಜದ ಸದಸ್ಯ ಹರವಿ ವೀರೇಂದ್ರ ಪಾಟೀಲ ಮಾತನಾಡಿ, ಯುವಜನರು ತಮ್ಮ ಸಾಮರ್ಥ್ಯವನ್ನು ಸದುಪಯೋಗಪಡಿಸಿಕೊಂಡು ದೇಶದ ಪ್ರಗತಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ರಾಷ್ಟ್ರದ ಅಭಿವೃದ್ಧಿಗೆ ಪ್ರತಿಯೊಬ್ಬ ಯುವಕನ ಕೊಡುಗೆಯೂ ಮುಖ್ಯವಾಗಿದೆ ಎಂದು ಹೇಳಿದರು.

ಮಹಾವಿದ್ಯಾಲಯದ ಇತಿಹಾಸ ಉಪನ್ಯಾಸಕಿ ರೇಣುಕಾ, ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಶರಣಪ್ಪ, ಗ್ರಾಮದ ಮುಖಂಡರಾದ ಬನಶಂಕರಯ್ಯ, ಫಾಲಾಕ್ಷ ರೆಡ್ಡಿ ಹಾಗೂ ಪೊಲೀಸ್ ಪಾಟೀಲ ಶರಣಪ್ಪಗೌಡ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಶಿಬಿರದ ಮಹತ್ವ ಮತ್ತು ಸಮಾಜಸೇವೆಯ ಅಗತ್ಯವನ್ನು ವಿವರಿಸಿದರು.

ಈ ಸಂದರ್ಭದಲ್ಲಿ ಸಹ ಶಿಬಿರಾಧಿಕಾರಿಗಳಾದ ಗಂಗಾಧರ, ಈರಪ್ಪ ಸರ್ಜಾಪುರ, ಉಪನ್ಯಾಸಕರಾದ ಪದ್ಮ, ಟಿಕಪ್ಪ ಚವ್ಹಾಣ, ಅಜೇಯಕುಮಾರ ಸೇರಿದಂತೆ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.