ಕಲಬುರಗಿ, ಅ.13: ಆಡಳಿತದಲ್ಲಿ ಪಾರದರ್ಶಕತೆ, ಉತ್ತರದಾಯಿತ್ವ ಹಾಗೂ ಸಾರ್ವಜನಿಕರ ಸಹಭಾಗಿತ್ವವನ್ನು ಹೆಚ್ಚಿಸುವ ಉದ್ದೇಶದಿಂದ ಜಾರಿಗೆ ಬಂದಿರುವ ಮಾಹಿತಿ ಹಕ್ಕು ಕಾಯ್ದೆಯ ಆಶಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕರ್ನಾಟಕ ಮಾಹಿತಿ ಆಯೋಗವು ತಂಡವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತ ಬಿ. ವೆಂಕಟ ಸಿಂಗ್ ತಿಳಿಸಿದರು.

ನಗರದ ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದಲ್ಲಿ ಸೋಮವಾರ ಸಂಜೆ ಆಯೋಜಿಸಿದ್ದ ಮಾಹಿತಿ ಹಕ್ಕು ಕಾಯ್ದೆ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾಹಿತಿ ಹಕ್ಕು ಕಾಯ್ದೆಯು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಸಾಮಾನ್ಯರಿಗೆ ಆಡಳಿತದ ಕುರಿತು ಮಾಹಿತಿ ಪಡೆಯುವ ಅಧಿಕಾರ ನೀಡಿದೆ. ಸರ್ಕಾರಿ ಇಲಾಖೆಗಳ ಕಾರ್ಯವೈಖರಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು, ಭ್ರಷ್ಟಾಚಾರ ನಿಯಂತ್ರಿಸಲು ಹಾಗೂ ಆಡಳಿತದ ಮೇಲೆ ನಾಗರಿಕರು ನಿಗಾ ವಹಿಸಲು ಈ ಕಾಯ್ದೆ ಪ್ರಮುಖ ಸಾಧನವಾಗಿದೆ ಎಂದು ಹೇಳಿದರು.

2005ರ ಅಕ್ಟೋಬರ್ 12ರಂದು ದೇಶದಲ್ಲಿ ಜಾರಿಗೆ ಬಂದ ಮಾಹಿತಿ ಹಕ್ಕು ಕಾಯ್ದೆಯು ಆಡಳಿತ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಿದೆ. ಸರ್ಕಾರಿ ಅಧಿಕಾರಿಗಳನ್ನು ಸಾರ್ವಜನಿಕರಿಗೆ ಉತ್ತರದಾಯಿಗಳನ್ನಾಗಿ ಮಾಡುವಲ್ಲಿ ಕಾಯ್ದೆ ಪರಿಣಾಮಕಾರಿ ಪಾತ್ರ ವಹಿಸಿದೆ. ಆದಾಗ್ಯೂ, ಕಾಯ್ದೆಯ ಉದ್ದೇಶಗಳು ಸಂಪೂರ್ಣವಾಗಿ ಈಡೇರಬೇಕಾದರೆ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಿರ್ವಹಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಸಾರ್ವಜನಿಕರು ಸರ್ಕಾರಿ ಇಲಾಖೆಗಳ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ಪಡೆಯುವುದು ಅವರ ಕಾನೂನುಬದ್ಧ ಹಕ್ಕಾಗಿದೆ. ಮಾಹಿತಿ ಒದಗಿಸುವ ಪ್ರಕ್ರಿಯೆಯಲ್ಲಿ ಅನಗತ್ಯ ವಿಳಂಬವಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಕಾಯ್ದೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದರ ಜೊತೆಗೆ ಅರ್ಜಿದಾರರಿಗೆ ಸೂಕ್ತ ಸಮಯದಲ್ಲಿ ಮಾಹಿತಿ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಕಲಬುರಗಿ ಪೀಠದಲ್ಲಿ ಮಾಹಿತಿ ಹಕ್ಕು ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆ ಹಾಗೂ ವಿಲೇವಾರಿ ತ್ವರಿತಗತಿಯಲ್ಲಿ ನಡೆಯುತ್ತಿದೆ. ಆಯೋಗದ ಅಧಿಕಾರಿಗಳು ಮತ್ತು ಸಿಬ್ಬಂದಿ ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರಿಗೆ ಕಾಯ್ದೆಯ ಪ್ರಯೋಜನಗಳು ಇನ್ನಷ್ಟು ಪರಿಣಾಮಕಾರಿಯಾಗಿ ತಲುಪುವಂತೆ ಶ್ರಮಿಸಬೇಕು ಎಂದು ಸೂಚಿಸಿದರು.

ಕಾರ್ಯಕ್ರಮದ ಆರಂಭದಲ್ಲಿ ಪೀಠದ ಕಾನೂನು ಸಹಾಯಕಿ ಪೂಜಾ ಆರ್. ಪ್ರಾಸ್ತಾವಿಕವಾಗಿ ಮಾತನಾಡಿ, ಮಾಹಿತಿ ಹಕ್ಕು ಕಾಯ್ದೆಯ ಮಹತ್ವ ಹಾಗೂ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು. ಶಾಖಾಧಿಕಾರಿ ಶಿವಕುಮಾರ ವಂದಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.