ರಾಯಚೂರು, ಅ.13: ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಸಮಾಜದ ಸಹಕಾರ ಅತ್ಯಂತ ಅಗತ್ಯವಾಗಿದ್ದು, ತಾವು ಗಳಿಸಿದ ಸಂಪಾದನೆಯ ಒಂದು ಭಾಗವನ್ನು ಸಮಾಜದ ಒಳಿತಿಗಾಗಿ ಬಳಸಿದಾಗ ಬದುಕಿಗೆ ನಿಜವಾದ ಸಾರ್ಥಕತೆ ದೊರೆಯುತ್ತದೆ ಎಂದು ಶಿಲ್ಪಾ ಮೆಡಿಕೇರ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ ವಿಷ್ಣುಕಾಂತ್ ಭೂತಾಡ್ ಹೇಳಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಗ್ರಂಥಾಲಯದ ಅಭಿವೃದ್ಧಿಗಾಗಿ ಶಿಲ್ಪಾ ಫೌಂಡೇಶನ್ ವತಿಯಿಂದ ₹3.93 ಲಕ್ಷ ಮೌಲ್ಯದ ಪುಸ್ತಕಗಳು ಹಾಗೂ ಪೀಠೋಪಕರಣಗಳನ್ನು ದೇಣಿಗೆಯಾಗಿ ನೀಡಿದ ಹಿನ್ನೆಲೆಯಲ್ಲಿ ಮಂಗಳವಾರ ಕಾಲೇಜಿನಲ್ಲಿ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಪುಸ್ತಕಗಳು ಜ್ಞಾನದ ಮೂಲವಾಗಿದ್ದು, ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ, ಚಿಂತನಾ ಸಾಮರ್ಥ್ಯ ಹಾಗೂ ವ್ಯಕ್ತಿತ್ವ ವಿಕಸನವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಪಠ್ಯಪುಸ್ತಕಗಳ ಅಧ್ಯಯನದ ಜೊತೆಗೆ ವಿವಿಧ ವಿಷಯಗಳಿಗೆ ಸಂಬಂಧಿಸಿದ ಪುಸ್ತಕಗಳನ್ನು ಓದುವ ಮೂಲಕ ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು. ಗ್ರಂಥಾಲಯದಲ್ಲಿರುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಸಮಾಜದ ಪ್ರಗತಿಗೆ ಶಿಕ್ಷಣ ಪ್ರಮುಖ ಆಧಾರವಾಗಿದ್ದು, ಶಿಕ್ಷಣ ಸಂಸ್ಥೆಗಳ ಮೂಲಸೌಕರ್ಯ ಅಭಿವೃದ್ಧಿಗೆ ದಾನಿಗಳು ಹಾಗೂ ಸಂಘಸಂಸ್ಥೆಗಳು ಕೈಜೋಡಿಸುವುದು ಅಗತ್ಯವಾಗಿದೆ. ಇಂತಹ ಸೇವಾ ಕಾರ್ಯಗಳು ಇತರರಿಗೂ ಪ್ರೇರಣೆಯಾಗಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಡಾ. ಸುಗುಣ ಬಸವರಾಜ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಗ್ರಂಥಾಲಯಗಳ ಪಾತ್ರ ಮಹತ್ವದ್ದಾಗಿದೆ. ಉತ್ತಮ ಪುಸ್ತಕಗಳು, ಓದಲು ಅನುಕೂಲಕರವಾದ ವಾತಾವರಣ ಹಾಗೂ ಅಗತ್ಯ ಪೀಠೋಪಕರಣಗಳು ಲಭ್ಯವಿದ್ದಾಗ ವಿದ್ಯಾರ್ಥಿಗಳಲ್ಲಿ ಅಧ್ಯಯನದ ಆಸಕ್ತಿ ಹೆಚ್ಚಾಗುತ್ತದೆ ಎಂದು ಹೇಳಿದರು.
ಶಿಲ್ಪಾ ಫೌಂಡೇಶನ್ ವತಿಯಿಂದ ನೀಡಿರುವ ₹3.93 ಲಕ್ಷ ಮೌಲ್ಯದ ಪುಸ್ತಕಗಳು ಹಾಗೂ ಪೀಠೋಪಕರಣಗಳ ಕೊಡುಗೆಯು ಕಾಲೇಜಿನ ಗ್ರಂಥಾಲಯದ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ವಿಶೇಷವಾಗಿ ವಿದ್ಯಾರ್ಥಿನಿಯರ ಕಲಿಕಾ ಗುಣಮಟ್ಟವನ್ನು ಹೆಚ್ಚಿಸಲು ಈ ನೆರವು ಉಪಯುಕ್ತವಾಗಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾಲೇಜಿನ ಶೈಕ್ಷಣಿಕ ಅಭಿವೃದ್ಧಿಗೆ ಉದಾರ ಕೊಡುಗೆ ನೀಡಿದ ವಿಷ್ಣುಕಾಂತ್ ಭೂತಾಡ್ ಅವರನ್ನು ಇದೇ ಸಂದರ್ಭದಲ್ಲಿ ಕಾಲೇಜಿನ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಐಕ್ಯೂಎಸಿ ಸಂಚಾಲಕಿ ಡಾ. ಜ್ಯೋತಿ ಸಿ.ಕೆ. ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮದ ಉದ್ದೇಶ ವಿವರಿಸಿದರು. ಕಾರ್ಯಕ್ರಮದ ಸಂಯೋಜಕ ಹಾಗೂ ಗ್ರಂಥಪಾಲಕ ಡಾ. ಸುರೇಶ್ ಎಸ್. ಅವರು ಸನ್ಮಾನಿತರ ಪರಿಚಯ ಮಾಡಿಕೊಟ್ಟರು. ಐಕ್ಯೂಎಸಿ ಸಹ ಸಂಚಾಲಕ ಶರಣಗೌಡ ಕೆ. ಹಾಗೂ ಸಿಬ್ಬಂದಿ ಕಾರ್ಯದರ್ಶಿ ಡಾ. ಸೈಯಿದಾ ರಷೀದಾ ಪರವಿನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಹ ಪ್ರಾಧ್ಯಾಪಕರಾದ ಡಾ. ಸ್ವರೂಪರಾಣಿ, ಡಾ. ಉಮಾದೇವಿ, ಸುಮಿತ್ರಾ ಪ್ಯಾಟಿ, ಸಹಾಯಕ ಪ್ರಾಧ್ಯಾಪಕ ಡಾ. ಚನ್ನಬಸವ ಹಾಗೂ ಅತಿಥಿ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಸಂತೋಷ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಡಾ. ಪ್ರಸನ್ನ ಕುಮಾರ್ ಅತಿಥಿಗಳನ್ನು ಸ್ವಾಗತಿಸಿದರು. ಬಿಎಸ್ಸಿ ಐದನೇ ಸೆಮಿಸ್ಟರ್ ವಿದ್ಯಾರ್ಥಿನಿ ಸೌಜನ್ಯ ಪ್ರಾರ್ಥನಾಗೀತೆ ಹಾಡಿದರು. ಆಂಗ್ಲ ವಿಭಾಗದ ಸಹ ಪ್ರಾಧ್ಯಾಪಕ ರಂಗನಾಥ ಬಿಲ್ಲಾರ್ ವಂದಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.



