ದೇವದುರ್ಗ: ನಾರಾಯಣಪುರ ಬಲದಂಡೆ ಕಾಲುವೆ ವ್ಯಾಪ್ತಿಯಲ್ಲಿ ಜಾರಿಯಲ್ಲಿರುವ ಅವೈಜ್ಞಾನಿಕ ವಾರಬಂದಿ ಪದ್ಧತಿಯಿಂದ ರೈತರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಬೆಳೆಗಳ ಸ್ಥಿತಿಗತಿ ಹಾಗೂ ನೀರಿನ ಲಭ್ಯತೆಗೆ ಅನುಗುಣವಾಗಿ ಕಾಲುವೆಗಳಿಗೆ ನೀರು ಹರಿಸಬೇಕು. ಅಕ್ಟೋಬರ್ 15ರಂದು ಆಲಮಟ್ಟಿಯಲ್ಲಿ ನಡೆಯಲಿರುವ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ಕುರಿತು ಪ್ರಸ್ತಾಪಿಸಿ ರೈತರ ಹಿತದೃಷ್ಟಿಯಿಂದ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಒತ್ತಾಯಿಸಲಾಗುವುದು ಎಂದು ಶಾಸಕಿ ಕರೆಮ್ಮ ಗೋಪಾಲಕೃಷ್ಣ ತಿಳಿಸಿದರು.

ಪಟ್ಟಣದ ತಮ್ಮ ನಿವಾಸದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಅವರು, ತಾಲೂಕಿನ ವಿವಿಧ ಗ್ರಾಮಗಳಲ್ಲಿ ನೀರಾವರಿ ಸಮಸ್ಯೆ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿದೆ. ಈಗಾಗಲೇ ಭತ್ತ, ಹತ್ತಿ, ಮೆಣಸಿನಕಾಯಿ ಸೇರಿದಂತೆ ಹಲವು ಬೆಳೆಗಳನ್ನು ಬಿತ್ತನೆ ಮಾಡಿರುವ ರೈತರು ನೀರಿಗಾಗಿ ಪರದಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ನೀರಾವರಿ ಇಲಾಖೆಯ ಅಧಿಕಾರಿಗಳು ಪರಸ್ಪರ ಹೊಂದಾಣಿಕೆಯಿಂದ ಕಾರ್ಯನಿರ್ವಹಿಸದೆ ವಿಭಿನ್ನ ಮಾಹಿತಿ ನೀಡುತ್ತಿರುವುದು ರೈತರಲ್ಲಿ ಗೊಂದಲ ಸೃಷ್ಟಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾಲುವೆಗಳಲ್ಲಿ ನೀರು ಹರಿಯುತ್ತಿದ್ದರೂ ಕೊನೆಯ ಭಾಗದ ಜಮೀನುಗಳಿಗೆ ಅಗತ್ಯ ಪ್ರಮಾಣದಲ್ಲಿ ತಲುಪುತ್ತಿಲ್ಲ. ವಿಶೇಷವಾಗಿ ಜಾಡಲದಿನ್ನಿ, ಮಲ್ಲೇದೇವರಗುಡ್ಡ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರು ನೀರಿನ ಅಭಾವ ಎದುರಿಸುತ್ತಿದ್ದಾರೆ. ಬೆಳೆಗಳನ್ನು ಉಳಿಸಿಕೊಳ್ಳಲು ರೈತರು ಹರಸಾಹಸ ಪಡುತ್ತಿದ್ದು, ಅವರ ಸಂಕಷ್ಟಕ್ಕೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕಾಗಿದೆ. ಕಳೆದ ಎರಡು ಮೂರು ದಿನಗಳಿಂದ ರೈತರಿಂದ ನಿರಂತರ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ವೇಳೆಯಲ್ಲಿಯೂ ಕಾಲುವೆ ಪ್ರದೇಶಗಳಿಗೆ ತೆರಳಿ ನೀರಿನ ಹರಿವನ್ನು ಪರಿಶೀಲಿಸಲಾಗಿದೆ ಎಂದು ಹೇಳಿದರು.

ಕಾಲುವೆಗಳ ನವೀಕರಣ ಕಾಮಗಾರಿಗಳು ಪೂರ್ಣಗೊಳ್ಳದೆ ಮಧ್ಯದಲ್ಲಿಯೇ ಸ್ಥಗಿತಗೊಂಡಿರುವುದರಿಂದ ನೀರಿನ ಸುಗಮ ಹರಿವಿಗೆ ಅಡ್ಡಿಯಾಗುತ್ತಿದೆ ಎಂಬ ದೂರುಗಳೂ ಕೇಳಿಬಂದಿವೆ. ಕಾಮಗಾರಿಗಳ ವಿಳಂಬ ಹಾಗೂ ನೀರು ವಿತರಣೆಯಲ್ಲಿನ ಲೋಪಗಳ ಕುರಿತು ಸಂಬಂಧಪಟ್ಟ ಸಚಿವರ ಗಮನ ಸೆಳೆದು ಪರಿಹಾರಕ್ಕೆ ಪ್ರಯತ್ನಿಸಲಾಗುವುದು ಎಂದರು.

ರೈತರ ನೀರಾವರಿ ಸಮಸ್ಯೆ ಕುರಿತು ಮೇಲಧಿಕಾರಿಗಳೊಂದಿಗೆ ನಿರಂತರ ಸಂಪರ್ಕ ಸಾಧಿಸಿ ಮನವರಿಕೆ ಮಾಡಿಕೊಟ್ಟ ಪರಿಣಾಮ ಕಾಲುವೆಗೆ ಹೆಚ್ಚುವರಿಯಾಗಿ 200 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಆದರೆ ಕೇವಲ ಹೆಚ್ಚುವರಿ ನೀರು ಹರಿಸುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಆ ನೀರು ಕೊನೆಯ ಭಾಗದ ರೈತರ ಜಮೀನುಗಳಿಗೂ ತಲುಪುವಂತೆ ನೋಡಿಕೊಳ್ಳುವುದು ಅಧಿಕಾರಿಗಳ ಕರ್ತವ್ಯವಾಗಿದೆ ಎಂದು ತಿಳಿಸಿದರು.

ನೀರಿನ ಪ್ರಮಾಣ ಹಾಗೂ ವಿತರಣೆಯ ಕುರಿತು ರೈತರಿಗೆ ಸ್ಪಷ್ಟ ಮಾಹಿತಿ ನೀಡಬೇಕು. ಒಂದೊಂದು ಹಂತದ ಅಧಿಕಾರಿಗಳು ಒಂದೊಂದು ರೀತಿಯ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು. ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವ ಅಥವಾ ರೈತರಿಗೆ ತಪ್ಪು ಮಾಹಿತಿ ನೀಡಿ ದಿಕ್ಕುತಪ್ಪಿಸುವ ಅಧಿಕಾರಿಗಳ ವಿರುದ್ಧ ಸರ್ಕಾರಕ್ಕೆ ಪತ್ರ ಬರೆದು ಕ್ರಮಕ್ಕೆ ಆಗ್ರಹಿಸಲಾಗುವುದು ಎಂದು ಎಚ್ಚರಿಸಿದರು.

ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ಬೆಳೆಯುವ ಬೆಳೆಗಳ ಸ್ವರೂಪವನ್ನು ಗಮನದಲ್ಲಿಟ್ಟುಕೊಂಡು ನೀರು ವಿತರಣೆಗೆ ಯೋಜನೆ ರೂಪಿಸುವ ಅಗತ್ಯವಿದೆ. ವಿಶೇಷವಾಗಿ ಮೆಣಸಿನಕಾಯಿ ಬೆಳೆ ಜನವರಿ ಅಥವಾ ಫೆಬ್ರವರಿಯಲ್ಲಿ ಕಟಾವಿಗೆ ಬರುವುದರಿಂದ ಅಲ್ಲಿಯವರೆಗೆ ಅಗತ್ಯ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಬೆಳೆಗಳಿಗೆ ಅತ್ಯಂತ ಅವಶ್ಯಕವಾಗಿರುವ ಸಮಯದಲ್ಲಿಯೇ ನೀರು ಸ್ಥಗಿತಗೊಂಡರೆ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕುವ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿದರು.

ರೈತರು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕೆಲವರು ಸಾಲ ಮಾಡಿಕೊಂಡು ಬೆಳೆ ಬೆಳೆದಿದ್ದಾರೆ. ಇಂತಹ ಸಂದರ್ಭದಲ್ಲಿ ನೀರಾವರಿ ವ್ಯವಸ್ಥೆಯಲ್ಲಿನ ಅವ್ಯವಸ್ಥೆಯಿಂದ ಬೆಳೆ ಹಾನಿಯಾದರೆ ರೈತರ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಆದ್ದರಿಂದ ಅಧಿಕಾರಿಗಳು ತಾಂತ್ರಿಕ ಕಾರಣಗಳನ್ನು ಮುಂದಿಟ್ಟುಕೊಂಡು ಜವಾಬ್ದಾರಿಯಿಂದ ನುಣುಚಿಕೊಳ್ಳದೆ, ರೈತರ ಜಮೀನುಗಳಿಗೆ ಸಮರ್ಪಕವಾಗಿ ನೀರು ತಲುಪಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.

ಆಲಮಟ್ಟಿಯಲ್ಲಿ ನಡೆಯಲಿರುವ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತಾಲೂಕಿನ ಕೊನೆಯ ಭಾಗದ ರೈತರು ಎದುರಿಸುತ್ತಿರುವ ಸಮಸ್ಯೆಗಳು, ಕಾಲುವೆಗಳ ನಿರ್ವಹಣೆ, ಅಪೂರ್ಣ ಕಾಮಗಾರಿಗಳು ಹಾಗೂ ವಾರಬಂದಿ ಪದ್ಧತಿಯಿಂದ ಉಂಟಾಗುತ್ತಿರುವ ತೊಂದರೆಗಳ ಕುರಿತು ಸಮಗ್ರವಾಗಿ ಚರ್ಚಿಸಲಾಗುವುದು. ಲಭ್ಯವಿರುವ ನೀರನ್ನು ವೈಜ್ಞಾನಿಕವಾಗಿ ಹಂಚಿಕೆ ಮಾಡುವ ಮೂಲಕ ರೈತರ ಬೆಳೆಗಳನ್ನು ರಕ್ಷಿಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗುವುದು ಎಂದು ವಿವರಿಸಿದರು.

ರೈತರ ಹಿತಾಸಕ್ತಿ ಕಾಪಾಡುವ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಸಮಸ್ಯೆಗಳಿಗೆ ಅಧಿಕಾರಿಗಳು ಹಾಗೂ ಸರ್ಕಾರ ಸೂಕ್ತವಾಗಿ ಸ್ಪಂದಿಸದಿದ್ದರೆ ರೈತರೊಂದಿಗೆ ಬೀದಿಗಿಳಿದು ಹೋರಾಟ ನಡೆಸುವುದಕ್ಕೂ ಸಿದ್ಧವಿದ್ದೇವೆ. ತಾಲೂಕಿನ ನೀರಾವರಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಪ್ರಯತ್ನ ಮುಂದುವರಿಸಲಾಗುವುದು ಎಂದು ಶಾಸಕಿ ಕರೆಮ್ಮ ಗೋಪಾಲಕೃಷ್ಣ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಅಧ್ಯಕ್ಷ ಬಸನಗೌಡ ದೇಸಾಯಿ, ಶರಬಣ್ಣ ಸಾಹು ಗಬ್ಬೂರು, ಸಿದ್ದಣ್ಣ ಗಣೇಕಲ್, ಇಸಾಕ್ ಮೇಸ್ತ್ರೀ, ರಂಗಮ್ಮ ಇರಬಗೇರಾ, ರಮೇಶ ರಾಮನಾಳ, ಶರಣಗೌಡ ಸುಂಕೇಶ್ವರಹಾಳ ಸೇರಿದಂತೆ ನೀರಾವರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.