ರಾಯಚೂರು: ನೀರಾವರಿ ಸೌಲಭ್ಯದ ಕೊರತೆಯಿಂದ ಬೆಳೆ ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಬ್ಯಾಂಕ್ಗಳು ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳು ಸಾಲ ಮರುಪಾವತಿಗೆ ಒತ್ತಡ ಹೇರುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ರೈತರ ನೆರವಿಗೆ ಬರಬೇಕಾದ ಸರ್ಕಾರ ಮತ್ತು ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸದೆ, ಸಾಲ ವಸೂಲಾತಿ ಕಿರುಕುಳದಿಂದ ರೈತರನ್ನು ರಕ್ಷಿಸಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡ ಅಮೀನ್ ಪಾಷ ದಿದ್ದಗಿ ಆಗ್ರಹಿಸಿದರು.
ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಂಧನೂರು ಭಾಗದ ಉಪಕಾಲುವೆಗಳ ಕೊನೆಯಂಚಿನ ಕೃಷಿ ಜಮೀನುಗಳಿಗೆ ನಿಗದಿತ ಪ್ರಮಾಣದಲ್ಲಿ ನೀರು ಹರಿಯುತ್ತಿಲ್ಲ. ಕಾಲುವೆಯ ಮೇಲ್ಭಾಗದಲ್ಲಿ ಅನಧಿಕೃತವಾಗಿ ನೀರು ಬಳಸುತ್ತಿರುವುದರಿಂದ ಕೊನೆಯಂಚಿನ ರೈತರಿಗೆ ನೀರು ಲಭ್ಯವಾಗದೆ ಬೆಳೆಗಳು ಒಣಗುತ್ತಿವೆ. ನೀರಿನ ಅಕ್ರಮ ಬಳಕೆಗೆ ಕಡಿವಾಣ ಹಾಕುವಲ್ಲಿ ನೀರಾವರಿ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
ಮುಖ್ಯ ಕಾಲುವೆಗಳ ನಿರ್ವಹಣೆಗೆ ಎಂಜಿನಿಯರ್ಗಳನ್ನು ನಿಯೋಜಿಸಲಾಗಿದ್ದರೂ ಉಪಕಾಲುವೆಗಳ ಮೇಲ್ವಿಚಾರಣೆಗೆ ಅಗತ್ಯ ಸಿಬ್ಬಂದಿ ಹಾಗೂ ಪರಿಣಾಮಕಾರಿ ವ್ಯವಸ್ಥೆ ಇಲ್ಲ. ಇದರಿಂದ ನೀರಿನ ಹಂಚಿಕೆಯಲ್ಲಿ ತಾರತಮ್ಯ ಉಂಟಾಗುತ್ತಿದೆ. ಜಿಲ್ಲೆಯ ಸುಮಾರು ಎರಡು ಲಕ್ಷ ಎಕರೆ ಕೃಷಿ ಪ್ರದೇಶದ ರೈತರು ನೀರಿನ ಅಭಾವದಿಂದ ತೊಂದರೆ ಅನುಭವಿಸುತ್ತಿದ್ದಾರೆ. ಅಧಿಕಾರಿಗಳು ಕಾಲುವೆಗಳಿಗೆ ಭೇಟಿ ನೀಡಿ ನೀರಿನ ಹರಿವು ಪರಿಶೀಲಿಸುವುದರ ಜೊತೆಗೆ ಕೊನೆಯಂಚಿನ ಜಮೀನುಗಳಿಗೂ ನೀರು ತಲುಪುವಂತೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.
ಪೋತ್ನಾಳ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮಗಳಲ್ಲಿ ಕೃಷಿಗೆ ಮಾತ್ರವಲ್ಲದೆ ಕುಡಿಯುವ ನೀರಿಗೂ ಸಮಸ್ಯೆ ಎದುರಾಗಿದೆ. ಬೆಳೆಗಳನ್ನು ಉಳಿಸಿಕೊಳ್ಳಲು ಅಗತ್ಯ ಪ್ರಮಾಣದ ನೀರು ಒದಗಿಸಲು ಸಾಧ್ಯವಾಗದಿದ್ದರೂ ಜನರು ಹಾಗೂ ಜಾನುವಾರುಗಳ ಕುಡಿಯುವ ನೀರಿನ ಅಗತ್ಯವನ್ನು ಪೂರೈಸಲು ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ತಕ್ಷಣ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ನೀರಿನ ಕೊರತೆಯಿಂದ ಬೆಳೆ ಹಾನಿಗೊಳಗಾಗಿರುವ ರೈತರು ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಬ್ಯಾಂಕ್ಗಳು ಸಾಲ ಮರುಪಾವತಿಗೆ ನೋಟಿಸ್ ನೀಡುತ್ತಿರುವುದಲ್ಲದೆ, ಕೆಲವು ಪ್ರಕರಣಗಳಲ್ಲಿ ನ್ಯಾಯಾಲಯದ ಮೂಲಕ ವಸೂಲಾತಿಗೆ ಮುಂದಾಗಿವೆ. ಸಾಲ ವಸೂಲಾತಿ ಮುಂದೂಡುವ ಕುರಿತು ಸರ್ಕಾರದಿಂದ ಯಾವುದೇ ಸ್ಪಷ್ಟ ಸೂಚನೆ ಬಂದಿಲ್ಲ ಎಂಬ ಕಾರಣವನ್ನು ಬ್ಯಾಂಕ್ ಅಧಿಕಾರಿಗಳು ನೀಡುತ್ತಿದ್ದಾರೆ. ಇದರಿಂದ ರೈತರು ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ ಎಂದು ತಿಳಿಸಿದರು.
ತುಮಕೂರು ಜಿಲ್ಲೆಯಲ್ಲಿ ರೈತರಿಗೆ ಬ್ಯಾಂಕ್ಗಳು ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳಿಂದ ಕಿರುಕುಳ ಉಂಟಾಗದಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ. ಅದೇ ರೀತಿಯಲ್ಲಿ ರಾಯಚೂರು ಜಿಲ್ಲೆಯಲ್ಲಿಯೂ ಸಾಲ ವಸೂಲಾತಿ ಹೆಸರಿನಲ್ಲಿ ರೈತರಿಗೆ ಅನಗತ್ಯ ಒತ್ತಡ ನೀಡದಂತೆ ಸಂಬಂಧಪಟ್ಟ ಸಂಸ್ಥೆಗಳಿಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು.
ಫಿಲ್ಡಿ, ಪೋತ್ನಾಳ, ಕೊಟ್ನೆಕಲ್ ಸೇರಿದಂತೆ ವಿವಿಧ ಗ್ರಾಮಗಳ ರೈತರು ಸಾಲದ ಬಾಧೆಯಿಂದ ಕಂಗಾಲಾಗಿದ್ದಾರೆ. ಹುಸೇನ್ ಬಾಷ ಎಂಬ ರೈತರು ಸುಮಾರು ಎರಡು ಲಕ್ಷ ರೂಪಾಯಿ ಸಾಲಕ್ಕೆ ಸಂಬಂಧಿಸಿದಂತೆ ಅವಮಾನಕರ ಪರಿಸ್ಥಿತಿ ಎದುರಿಸಬೇಕಾಯಿತು. ರೈತರೊಂದಿಗೆ ಚರ್ಚಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಬದಲು ನ್ಯಾಯಾಲಯದ ಮೊರೆ ಹೋಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಒಂದು ಹಂಗಾಮಿನಲ್ಲಿ ಬೆಳೆ ಕೈಕೊಟ್ಟರೂ ರೈತರು ಆರ್ಥಿಕವಾಗಿ ಚೇತರಿಸಿಕೊಳ್ಳಲು ಹಲವು ವರ್ಷಗಳೇ ಬೇಕಾಗುತ್ತವೆ. ಸತತ ನೀರಿನ ಕೊರತೆ ಹಾಗೂ ಬೆಳೆ ನಷ್ಟದಿಂದ ರೈತ ಕುಟುಂಬಗಳ ಜೀವನ ನಿರ್ವಹಣೆಯೇ ಕಷ್ಟಕರವಾಗಿದೆ. ಇಂತಹ ಸಂದರ್ಭದಲ್ಲಿ ಸಾಲ ವಸೂಲಾತಿಗೆ ಒತ್ತಡ ಹೇರುವುದು ರೈತರ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸುತ್ತದೆ. ಆದ್ದರಿಂದ ರಾಜ್ಯ ಸರ್ಕಾರ ರೈತರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ ಸಾಲ ಮರುಪಾವತಿಗೆ ಕಾಲಾವಕಾಶ ಕಲ್ಪಿಸುವುದು ಸೇರಿದಂತೆ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಜಿಲ್ಲೆಯ ಜನಪ್ರತಿನಿಧಿಗಳು ಕೂಡ ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಶಾಸಕರು ತಮ್ಮ ಶಾಸನಬದ್ಧ ಅಧಿಕಾರವನ್ನು ಬಳಸಿಕೊಂಡು ನೀರಾವರಿ ಹಾಗೂ ಬ್ಯಾಂಕಿಂಗ್ ಕ್ಷೇತ್ರದ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ರೈತರಿಗೆ ನ್ಯಾಯ ಒದಗಿಸಬೇಕು. ಜಿಲ್ಲಾಧಿಕಾರಿಗಳು ಕೂಡಲೇ ಮಧ್ಯಪ್ರವೇಶಿಸಿ ಕಾಲುವೆ ನೀರಿನ ಸಮರ್ಪಕ ಹಂಚಿಕೆ, ಕುಡಿಯುವ ನೀರಿನ ಪೂರೈಕೆ ಹಾಗೂ ಸಾಲ ವಸೂಲಾತಿ ಕಿರುಕುಳ ತಡೆಗೆ ಕ್ರಮ ಕೈಗೊಳ್ಳಬೇಕು ಎಂದು ಅಮೀನ್ ಪಾಷ ದಿದ್ದಗಿ ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ದುರುಗಪ್ಪ, ಪಾಶುನಾಥ, ಬಸವಲಿಂಗ, ಸಂತೋಷ್ ಸೇರಿದಂತೆ ಇತರರು ಉಪಸ್ಥಿತರಿದ್ದರು.



