ದೇವದುರ್ಗ: ನವೆಂಬರ್ 1ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವವನ್ನು ತಾಲೂಕು ಆಡಳಿತದ ವತಿಯಿಂದ ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ತಹಸೀಲ್ದಾರ್ ನಾಗಮ್ಮ ಕಟ್ಟಿಮನಿ ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ತಾಲೂಕು ಆಡಳಿತದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಪ್ರತಿಬಿಂಬಿಸುವ ರೀತಿಯಲ್ಲಿ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಬೇಕು. ಕಾರ್ಯಕ್ರಮದ ಯಶಸ್ಸಿಗೆ ವಿವಿಧ ಇಲಾಖೆಗಳ ಅಧಿಕಾರಿಗಳು, ಕನ್ನಡಪರ ಸಂಘಟನೆಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಹಾಗೂ ಸಾಹಿತಿಗಳು ರಾಜ್ಯೋತ್ಸವ ಆಚರಣೆ ಕುರಿತು ತಮ್ಮ ಅಭಿಪ್ರಾಯ ಮತ್ತು ಸಲಹೆಗಳನ್ನು ವ್ಯಕ್ತಪಡಿಸಿದರು. ಅವುಗಳ ಆಧಾರದ ಮೇಲೆ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸಲು ನಿರ್ಧರಿಸಲಾಯಿತು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಚ್. ಶಿವರಾಜ ಮಾತನಾಡಿ, ರಾಜ್ಯೋತ್ಸವದ ವೇದಿಕೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆ, ನಾಡು, ನುಡಿ ಮತ್ತು ಸಂಸ್ಕೃತಿಗೆ ಸಂಬಂಧಿಸಿದ ಗೀತೆಗಳಿಗೆ ಮಾತ್ರ ಅವಕಾಶ ನೀಡಬೇಕು. ನವೆಂಬರ್ ತಿಂಗಳಲ್ಲಿ ಚಿತ್ರಮಂದಿರಗಳಲ್ಲಿ ಕನ್ನಡ ಚಲನಚಿತ್ರಗಳ ಪ್ರದರ್ಶನಕ್ಕೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.
ತಾಲೂಕಿನಲ್ಲಿ ಕಲೆ, ಸಾಹಿತ್ಯ, ಸಂಗೀತ, ಕ್ರೀಡೆ, ಜಾನಪದ, ರಂಗಭೂಮಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರನ್ನು ಗುರುತಿಸಿ ರಾಜ್ಯೋತ್ಸವದ ಸಂದರ್ಭದಲ್ಲಿ ಸನ್ಮಾನಿಸಬೇಕು. ಇದರಿಂದ ಸ್ಥಳೀಯ ಪ್ರತಿಭೆಗಳಿಗೆ ಪ್ರೋತ್ಸಾಹ ದೊರೆಯುವುದರ ಜೊತೆಗೆ ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸಲು ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ರಾಜ್ಯೋತ್ಸವ ಕಾರ್ಯಕ್ರಮ ನಡೆಯುವ ವೇದಿಕೆಗೆ ಪುರಸಭೆ ಆಡಳಿತದ ವತಿಯಿಂದ ಸುಣ್ಣಬಣ್ಣ ಬಳಿದು ಅಚ್ಚುಕಟ್ಟಾಗಿ ಸಿದ್ಧಪಡಿಸಬೇಕು. ಕಾರ್ಯಕ್ರಮಕ್ಕೆ ಆಗಮಿಸುವ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಗೆ ಸುರಕ್ಷಿತ ಸಂಚಾರ ವ್ಯವಸ್ಥೆ ಕಲ್ಪಿಸಬೇಕು. ಪೊಲೀಸ್ ಇಲಾಖೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಕಾರ್ಯಕ್ರಮ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ರಾಯಚೂರು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಬಸವರಾಜ ಬ್ಯಾಗವಾಟ್ ಮಾತನಾಡಿ, ಕನ್ನಡ ರಾಜ್ಯೋತ್ಸವವನ್ನು ಕೇವಲ ವೇದಿಕೆ ಕಾರ್ಯಕ್ರಮಕ್ಕೆ ಸೀಮಿತಗೊಳಿಸದೆ ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ಅಭಿಮಾನ ಮೂಡಿಸುವ ರೀತಿಯಲ್ಲಿ ಆಚರಿಸಬೇಕು. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕನ್ನಡ ನಾಡು, ನುಡಿಗೆ ಸಂಬಂಧಿಸಿದ ಪ್ರಬಂಧ, ಭಾಷಣ, ಗಾಯನ ಹಾಗೂ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಿಸಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ಭೀಮರಾಯ ನಾಯಕ, ಹನುಮಂತರಾಯ ಶಾಖೆ, ರಾಜಕುಮಾರ ಧೋನಿ, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹಸೀನಾ ಬೇಗಂ, ಕೆ. ಹಂಪಯ್ಯ, ಪುರಸಭೆ ಮುಖ್ಯಾಧಿಕಾರಿ ಪ್ರವೀಣಕುಮಾರ ಯಡ್ರಾಮಿ, ರವಿಕುಮಾರ ಬಲ್ಲಿದವ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಕನ್ನಡಪರ ಸಂಘಟನೆಗಳ ಮುಖಂಡರಾದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಡಿ. ಶ್ರೀನಿವಾಸ್, ಬಸವರಾಜ ಗೋಪಾಲಪುರ, ನಂದಪ್ಪ, ಪತ್ರಕರ್ತ ರಂಗನಾಥ ಕೊಂಬಿನ, ಪ್ರಾಚಾರ್ಯ ಶ್ರೀಕಾಂತ ಬಿಲ್ಲವ, ಅಲ್ಲಾವುದ್ದೀನ್, ಟಿ. ಜಯರಾಜ, ಶಿವಕುಮಾರ ಚಲವಾದಿ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.



