ರಾಯಚೂರು, ಅ.14: ನಗರದ ಉಪ್ಪಾರವಾಡಿ ಬೃಹಸ್ಪತಿವಾರಪೇಟೆಯ ಶ್ರೀ ಲಕ್ಷ್ಮೀವೆಂಕಟೇಶ್ವರ ದೇವಸ್ಥಾನದಲ್ಲಿ 55ನೇ ವರ್ಷದ ನವರಾತ್ರಿ ಉತ್ಸವದ ಅಂಗವಾಗಿ ಬುಧವಾರ ಚಂದ್ರ ವಾಹನೋತ್ಸವವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ನವರಾತ್ರಿ ಮಹೋತ್ಸವದ ಪ್ರಯುಕ್ತ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ದೇವರಿಗೆ ವಿಶೇಷ ಪೂಜೆ ಹಾಗೂ ಮಂಗಳಾರತಿ ನೆರವೇರಿಸಲಾಯಿತು. ಬೆಳಗ್ಗೆಯಿಂದಲೇ ದೇವಸ್ಥಾನಕ್ಕೆ ಆಗಮಿಸಿದ ಭಕ್ತರು ಶ್ರೀ ಲಕ್ಷ್ಮೀವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ಸಂಜೆ ದೇವಸ್ಥಾನದಿಂದ ಚಂದ್ರ ವಾಹನೋತ್ಸವದ ಮೆರವಣಿಗೆ ಭಜನೆ ಹಾಗೂ ಕಳಸ ಹೊತ್ತ ಮಹಿಳೆಯರೊಂದಿಗೆ ಸಡಗರ ಸಂಭ್ರಮದಿಂದ ಆರಂಭವಾಯಿತು. ಭಕ್ತರ ಭಜನೆ ಹಾಗೂ ದೇವರ ನಾಮಸ್ಮರಣೆಯೊಂದಿಗೆ ಮೆರವಣಿಗೆಯು ಗೀತಾಮಂದಿರ ರಸ್ತೆಯವರೆಗೆ ಸಾಗಿತು. ಬಳಿಕ ಪ್ರಮುಖ ಮಾರ್ಗಗಳ ಮೂಲಕ ಮರಳಿ ದೇವಸ್ಥಾನಕ್ಕೆ ಆಗಮಿಸಿತು.
ಮೆರವಣಿಗೆಯ ನಂತರ ದೇವಸ್ಥಾನದ ಅರ್ಚಕರು ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿ ವಿಶೇಷ ಪೂಜೆ ಹಾಗೂ ಮಹಾಮಂಗಳಾರತಿ ಸಲ್ಲಿಸಿದರು. ಬಳಿಕ ಭಕ್ತಾದಿಗಳಿಗೆ ಪ್ರಸಾದ ವಿತರಿಸಲಾಯಿತು.
ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಭಕ್ತಿಭಾವದ ವಾತಾವರಣ ನಿರ್ಮಾಣವಾಗಿದ್ದು, ಬಡಾವಣೆಯ ನಿವಾಸಿಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಭಕ್ತರು ಉತ್ಸವದಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ದೇವಸ್ಥಾನದ ಪದಾಧಿಕಾರಿಗಳು, ಬಡಾವಣೆಯ ಹಿರಿಯರು, ಮಹಿಳೆಯರು, ಯುವಕರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.



