ರಾಯಚೂರು: ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರ ಪರವಾಗಿ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಎ. ವಸಂತಕುಮಾರ ಅವರು ನಗರದ ಎಲ್.ವಿ.ಡಿ. ಮಹಾವಿದ್ಯಾಲಯದಲ್ಲಿ ಉಪನ್ಯಾಸಕರನ್ನು ಭೇಟಿಯಾಗಿ ಮತಯಾಚಿಸಿದರು.

ಮಹಾವಿದ್ಯಾಲಯದ ಬೋಧಕ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದ ಅವರು, ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವುದು ಹಾಗೂ ಶಿಕ್ಷಣ ಕ್ಷೇತ್ರವನ್ನು ಬಲಪಡಿಸುವುದು ಕಾಂಗ್ರೆಸ್ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಶಿಕ್ಷಕರ ವೃತ್ತಿಪರ ಹಿತಾಸಕ್ತಿಗಳ ರಕ್ಷಣೆ, ಸೇವಾ ಭದ್ರತೆ ಮತ್ತು ಶೈಕ್ಷಣಿಕ ಸಂಸ್ಥೆಗಳ ಅಭಿವೃದ್ಧಿಗೆ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ತಿಳಿಸಿದರು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಮೂಲಕ ಜಾರಿಗೊಳಿಸಲಾಗುತ್ತಿರುವ ಅಕ್ಷರ ಆವಿಷ್ಕಾರ ಯೋಜನೆಯಿಂದ ಈ ಭಾಗದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರಲು ಪ್ರಯತ್ನಿಸಲಾಗುತ್ತಿದೆ. ಶಾಲಾ ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿ, ಶೈಕ್ಷಣಿಕ ಗುಣಮಟ್ಟ ಸುಧಾರಣೆ ಹಾಗೂ ಶಿಕ್ಷಕರ ಕೊರತೆ ನೀಗಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯಪ್ರವೃತ್ತವಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಸುಮಾರು 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಪದವಿ ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ಭರ್ತಿಗೂ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಶಿಕ್ಷಣ ಕ್ಷೇತ್ರದ ಪ್ರಗತಿಯೊಂದಿಗೆ ಶಿಕ್ಷಕರ ಗೌರವ ಮತ್ತು ಹಕ್ಕುಗಳನ್ನು ಕಾಪಾಡಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ ಎಂದು ಪ್ರತಿಪಾದಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರು ಈ ಹಿಂದೆ ಒಂದು ಅವಧಿಗೆ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದು, ಶಿಕ್ಷಕರ ಸಮಸ್ಯೆಗಳನ್ನು ಸದನದಲ್ಲಿ ಪ್ರಸ್ತಾಪಿಸುವ ಮೂಲಕ ಅವರ ಪರವಾಗಿ ಕಾರ್ಯನಿರ್ವಹಿಸಿದ್ದಾರೆ. ಶಿಕ್ಷಕರ ಬೇಡಿಕೆಗಳಿಗೆ ಮತ್ತಷ್ಟು ಪರಿಣಾಮಕಾರಿಯಾಗಿ ಧ್ವನಿಯಾಗಲು ಅವರಿಗೆ ಮತ್ತೊಂದು ಅವಕಾಶ ನೀಡಬೇಕು. ಈ ಹಿನ್ನೆಲೆಯಲ್ಲಿ ಮತದಾರರು ಶರಣಪ್ಪ ಮಟ್ಟೂರು ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲುವಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅಬ್ದುಲ್ ಕರೀಂ, ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಬಸವರಾಜ ದರೂರು, ಕೆಪಿಸಿಸಿ ವಕ್ತಾರ ಡಾ. ರಝಾಕ್ ಉಸ್ತಾದ್, ಭೀಮನಗೌಡ ಇಟಗಿ, ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಶರಣಗೌಡ ಬಿ.ಎಚ್. ಸೇರಿದಂತೆ ಉಪನ್ಯಾಸಕರು ಹಾಗೂ ಇತರರು ಉಪಸ್ಥಿತರಿದ್ದರು.