ರಾಯಚೂರು: ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮೂವರು ಆರೋಪಿಗಳಿಗೆ ತಲಾ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿ ರಾಯಚೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ರಾಯಚೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಮನ್ಸಲಾಪುರ–ರಾಯಚೂರು ರಸ್ತೆಯ ಮನ್ಸಲಾಪುರ ರೈಲ್ವೆ ಗೇಟ್ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಉಮೇಶ ಹಾಗೂ ಇತರ ಇಬ್ಬರು ಆರೋಪಿಗಳು ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿರುವ ಕುರಿತು ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದರು.
ದಾಳಿ ಸಂದರ್ಭದಲ್ಲಿ ಆರೋಪಿಗಳಿಂದ 1.08 ಕೆ.ಜಿ. ಒಣ ಗಾಂಜಾ, 514 ಗ್ರಾಂ ಹಸಿ ಗಾಂಜಾ, ಮೂರು ಮೊಬೈಲ್ ಫೋನ್ಗಳು ಹಾಗೂ ₹300 ನಗದು ವಶಪಡಿಸಿಕೊಳ್ಳಲಾಗಿತ್ತು. ಈ ಸಂಬಂಧ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ 2024ರಲ್ಲಿ ಗುನ್ನೆ ಸಂಖ್ಯೆ 76/2024ರ ಅಡಿಯಲ್ಲಿ ಎನ್ಡಿಪಿಎಸ್ ಕಾಯ್ದೆಯ ಕಲಂ 20(ಬಿ) ಪ್ರಕಾರ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದ ತನಿಖೆಯನ್ನು ಅಂದಿನ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯ ಉಪನಿರೀಕ್ಷಕರಾಗಿದ್ದ, ಪ್ರಸ್ತುತ ಯರಗೇರಾ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಕಾಶ ರೆಡ್ಡಿ ಡಂಬಲ್ ಅವರು ಕೈಗೊಂಡಿದ್ದರು. ಸಮಗ್ರ ತನಿಖೆ ನಡೆಸಿ ಆರೋಪಿಗಳ ವಿರುದ್ಧ ಎನ್ಡಿಪಿಎಸ್ ಕಾಯ್ದೆ 1985ರ ಕಲಂ 20(b)(ii)(b) ಹಾಗೂ 20(a) ಅಡಿಯಲ್ಲಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ.ಬಿ. ಜಕಾತಿ ಅವರು ಸಾಕ್ಷ್ಯಾಧಾರಗಳು ಹಾಗೂ ವಾದ-ಪ್ರತಿವಾದಗಳನ್ನು ಪರಿಶೀಲಿಸಿ ಮೂವರು ಆರೋಪಿಗಳ ವಿರುದ್ಧ ಆರೋಪ ಸಾಬೀತಾಗಿರುವುದನ್ನು ಪರಿಗಣಿಸಿ ತಲಾ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ.
ಪ್ರಕರಣದಲ್ಲಿ ದೂರುದಾರರಾದ ಪೊಲೀಸ್ ಸಿಬ್ಬಂದಿ ರವಿರಾಜ (ಸಿಎಚ್ಸಿ-320) ಹಾಗೂ ದಾಳಿಯಲ್ಲಿ ಭಾಗವಹಿಸಿದ್ದ ಜಿ. ಶ್ರೀನಿವಾಸ (ಎಎಸ್ಐ) ಅವರು ನ್ಯಾಯಾಲಯದಲ್ಲಿ ಪೂರಕ ಸಾಕ್ಷ್ಯ ನುಡಿದಿದ್ದರು. ಪೊಲೀಸ್ ಸಿಬ್ಬಂದಿಗಳಾದ ಸುಗಯ್ಯ (ಸಿಪಿಸಿ-157), ಮಲ್ಲಿಕಾರ್ಜುನ (ಸಿಪಿಸಿ-360) ಹಾಗೂ ಮುಸ್ತಫಾ (ಸಿಪಿಸಿ-632) ಅವರು ಸಾಕ್ಷಿದಾರರನ್ನು ನಿಗದಿತ ಸಮಯಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಕಾರ್ಯನಿರ್ವಹಿಸಿದ್ದರು.
ವಿಚಾರಣೆಯ ಹಂತದಲ್ಲಿ ರಾಯಚೂರು ಗ್ರಾಮೀಣ ವೃತ್ತದ ಪೊಲೀಸ್ ವೃತ್ತ ನಿರೀಕ್ಷಕ ನಿಂಗಪ್ಪ ಎನ್.ಆರ್. ಅವರು ಮೇಲ್ವಿಚಾರಣೆ ವಹಿಸಿದ್ದರು. ಸರ್ಕಾರದ ಪರವಾಗಿ ಪ್ರಧಾನ ಸಾರ್ವಜನಿಕ ಅಭಿಯೋಜಕ ಕೆ. ಗೋಪಾಲರಾವ್ ಅವರು ವಾದ ಮಂಡಿಸಿದ್ದರು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯ ಪ್ರಕಟಣೆ ತಿಳಿಸಿದೆ.



