ದೇವದುರ್ಗ, ಅ.15: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳದ ನಿರ್ಧಾರವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಅರ್ಹ ಸಮುದಾಯಗಳಿಗೆ ಅದರ ಸಂಪೂರ್ಣ ಪ್ರಯೋಜನ ದೊರೆಯುವಂತೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಕೋರ್ ಕಮಿಟಿ ಹಾಗೂ ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್) ಪದಾಧಿಕಾರಿಗಳು ಗುರುವಾರ ತಹಶೀಲ್ದಾರ್ ನಾಗಮ್ಮ ಕಟ್ಟಿಮನಿ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಮುಖಂಡ ಹನುಮಂತಪ್ಪ ಕಾಕರಗಲ್ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಸಂಖ್ಯೆ ಹಾಗೂ ಸಾಮಾಜಿಕ, ಆರ್ಥಿಕ ಪರಿಸ್ಥಿತಿಯನ್ನು ಪರಿಗಣಿಸಿ ಮೀಸಲಾತಿ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಸಾಮಾಜಿಕ ನ್ಯಾಯದ ಉದ್ದೇಶದಿಂದ ಕೈಗೊಂಡ ಮೀಸಲಾತಿ ಹೆಚ್ಚಳದ ನಿರ್ಧಾರ ಕೇವಲ ಆದೇಶಗಳಿಗೆ ಸೀಮಿತವಾಗದೆ ಅರ್ಹ ಸಮುದಾಯಗಳಿಗೆ ನೈಜವಾಗಿ ಪ್ರಯೋಜನವಾಗಬೇಕು ಎಂದು ಆಗ್ರಹಿಸಿದರು.

ಹಿಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಲಾಗಿತ್ತು. ಆದರೆ, ಈ ನಿರ್ಧಾರದ ಅನುಷ್ಠಾನ ಮತ್ತು ಕಾನೂನುಬದ್ಧತೆಗೆ ಸಂಬಂಧಿಸಿದ ಸಮಸ್ಯೆಗಳಿಂದಾಗಿ ಸಮುದಾಯಗಳಲ್ಲಿ ಗೊಂದಲ ಉಂಟಾಗಿದೆ. ಸರ್ಕಾರ ಈ ವಿಚಾರದಲ್ಲಿ ಸ್ಪಷ್ಟ ನಿಲುವು ತಳೆದು ಮೀಸಲಾತಿ ಹೆಚ್ಚಳದ ಪ್ರಯೋಜನಗಳು ಅರ್ಹರಿಗೆ ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮೀಸಲಾತಿ ಯಾರೂ ದಯೆಯಿಂದ ನೀಡುವ ಸೌಲಭ್ಯವಲ್ಲ. ಸಾಮಾಜಿಕವಾಗಿ ಶೋಷಣೆ ಹಾಗೂ ಅಸಮಾನತೆಗೆ ಒಳಗಾದ ಸಮುದಾಯಗಳಿಗೆ ಶಿಕ್ಷಣ, ಉದ್ಯೋಗ ಮತ್ತು ಇತರ ಕ್ಷೇತ್ರಗಳಲ್ಲಿ ಸಮಾನ ಅವಕಾಶ ಕಲ್ಪಿಸುವ ಸಂವಿಧಾನಾತ್ಮಕ ವ್ಯವಸ್ಥೆಯಾಗಿದೆ. ಇಂತಹ ಮಹತ್ವದ ವಿಷಯದಲ್ಲಿ ಸರ್ಕಾರ ವಿಳಂಬ ಧೋರಣೆ ಅನುಸರಿಸದೆ ಸಮುದಾಯಗಳ ಹಿತಾಸಕ್ತಿ ಕಾಪಾಡಲು ಮುಂದಾಗಬೇಕು ಎಂದು ಹೇಳಿದರು.

ಸಾಮಾಜಿಕ ನ್ಯಾಯದ ಬಗ್ಗೆ ಕೇವಲ ಭರವಸೆ ನೀಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಪ್ರಗತಿಗೆ ಪೂರಕವಾದ ಕ್ರಮಗಳನ್ನು ಕೈಗೊಳ್ಳಬೇಕು. ಮೀಸಲಾತಿ ಹೆಚ್ಚಳದ ವಿಚಾರದಲ್ಲಿ ಎದುರಾಗಿರುವ ಕಾನೂನು ಮತ್ತು ಆಡಳಿತಾತ್ಮಕ ಸಮಸ್ಯೆಗಳನ್ನು ಪರಿಹರಿಸಿ, ಸಮುದಾಯಗಳಿಗೆ ಅನ್ಯಾಯವಾಗದಂತೆ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ದೇವದುರ್ಗ ತಾಲೂಕು ಸಂಚಾಲಕ ಶಿವಪ್ಪ ಕೋರಿ ಗಣಜಿಲಿ, ರಂಗಪ್ಪ ಅಲ್ಕೋಡ್, ನಿಂಗಪ್ಪ ಪಲಕನಮರಡಿ, ಹೈದರ ಅಲಿ, ಬೂದೇಪ್ಪ ಮ್ಯಾತ್ರಿ, ಯೇಸು ಅಯ್ಯಳ್, ನಾಗರಾಜ್ ಅರಿಕೆರ, ಬಸವರಾಜ್ ಹುಲಿಗುಡ್ಡ, ಎಂ.ಆರ್. ಬಸವ ಸೇರಿದಂತೆ ದಲಿತ ಸಂಘರ್ಷ ಸಮಿತಿಯ ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.