ಹಟ್ಟಿ ಚಿನ್ನದ ಗಣಿ: ಸಮೀಪದ ಯಲಗಟ್ಟಾ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ಹಾವಳಿ ಹೆಚ್ಚಾಗಿದ್ದು, ಇದರಿಂದ ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತಿವೆ. ಕೂಡಲೇ ಅಕ್ರಮ ಮದ್ಯ ಮಾರಾಟ ಮಾಡುವ ಅಂಗಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಗ್ರಾಮದ ಮಹಿಳೆಯರು ಬುಧವಾರ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಗ್ರಾಮದ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ ಇತ್ತೀಚೆಗೆ ನಡೆದ ದೌರ್ಜನ್ಯ ಪ್ರಕರಣಗಳ ನಿಯಂತ್ರಣ ಕುರಿತು ಹಮ್ಮಿಕೊಂಡಿದ್ದ ಸಭೆಯಲ್ಲಿ ಮಹಿಳೆಯರು ಅಕ್ರಮ ಮದ್ಯ ಮಾರಾಟದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದ್ದು, ಇದರಿಂದ ಅನೇಕ ಕುಟುಂಬಗಳ ನೆಮ್ಮದಿ ಹಾಳಾಗಿದೆ. ದಿನವಿಡೀ ಕೂಲಿ ಕೆಲಸ ಮಾಡಿ ದುಡಿದ ಹಣವನ್ನು ಕೆಲವರು ಮದ್ಯದ ಅಂಗಡಿಗಳಲ್ಲಿ ಖರ್ಚು ಮಾಡುತ್ತಿದ್ದಾರೆ. ಇದರಿಂದ ಕುಟುಂಬ ನಿರ್ವಹಣೆ, ಮಕ್ಕಳ ಶಿಕ್ಷಣ ಹಾಗೂ ದಿನನಿತ್ಯದ ಜೀವನಕ್ಕೆ ತೀವ್ರ ತೊಂದರೆಯಾಗುತ್ತಿದೆ. ಇದೇ ಪರಿಸ್ಥಿತಿ ಮುಂದುವರಿದರೆ ನಮ್ಮ ಕುಟುಂಬಗಳ ಭವಿಷ್ಯವೇನು ಎಂದು ಮಹಿಳೆಯರು ಅಧಿಕಾರಿಗಳ ಮುಂದೆ ಅಳಲು ತೋಡಿಕೊಂಡರು.
ವಿಶೇಷವಾಗಿ ಗ್ರಾಮದ 16ರಿಂದ 17 ವರ್ಷದ ವಿದ್ಯಾರ್ಥಿಗಳು ಹಾಗೂ ಯುವಕರು ಮದ್ಯದ ಚಟಕ್ಕೆ ಬಲಿಯಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಓದಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕಾದ ವಯಸ್ಸಿನಲ್ಲಿ ಯುವಕರು ಮದ್ಯದ ವ್ಯಸನಕ್ಕೆ ಒಳಗಾಗಿ ತಮ್ಮ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದನ್ನು ತಡೆಯಲು ಅಧಿಕಾರಿಗಳು ಮುಂದಾಗದಿದ್ದರೆ ಮುಂದಿನ ಪೀಳಿಗೆಯ ಭವಿಷ್ಯವೇ ಅಪಾಯಕ್ಕೆ ಸಿಲುಕಲಿದೆ ಎಂದು ತಾಯಂದಿರು ಕಣ್ಣೀರಿಟ್ಟರು.
ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಅಂಗಡಿಗಳ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಇದ್ದರೂ ಪರಿಣಾಮಕಾರಿ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಮಹಿಳೆಯರು ಅಸಮಾಧಾನ ವ್ಯಕ್ತಪಡಿಸಿದರು. ಅಕ್ರಮ ಮದ್ಯ ಮಾರಾಟ ನಡೆಯುತ್ತಿರುವ ಅಂಗಡಿಗಳನ್ನು ನಾವೇ ತೋರಿಸುತ್ತೇವೆ. ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಸಂಬಂಧಪಟ್ಟವರ ವಿರುದ್ಧ ಎಫ್ಐಆರ್ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಗ್ರಾಮದಲ್ಲಿ ಯಾವುದೇ ಕಾರಣಕ್ಕೂ ಮತ್ತೆ ಅಕ್ರಮ ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದು. ಮದ್ಯ ಮಾರಾಟದ ಹಾವಳಿಗೆ ಶಾಶ್ವತ ಕಡಿವಾಣ ಹಾಕುವ ಮೂಲಕ ಮಹಿಳೆಯರು, ಮಕ್ಕಳು ಹಾಗೂ ಯುವಕರ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.
ಮಹಿಳೆಯರ ಆಕ್ರೋಶ ಹಾಗೂ ಅಹವಾಲುಗಳನ್ನು ಗಂಭೀರವಾಗಿ ಪರಿಗಣಿಸಿದ ತಹಸೀಲ್ದಾರ್ ಸತ್ಯಮ್ಮ ಅವರು, ಸ್ಥಳದಲ್ಲಿದ್ದ ಅಬಕಾರಿ ಇಲಾಖೆ ಅಧಿಕಾರಿ ಲಕ್ಷ್ಮೀದೇವಿ ಹಾಗೂ ಸಿಪಿಐ ಶಿವಾನಂದ ಗಾಣಿಗೇರ ಅವರಿಗೆ ಅಕ್ರಮ ಮದ್ಯ ಮಾರಾಟದ ಕುರಿತು ಪರಿಶೀಲನೆ ನಡೆಸಿ, ಕಾನೂನು ಪ್ರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರವಿಕುಮಾರ್ ಉಪ್ಪಾರ್, ಪಿಡಿಒ ಸುರೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ನಾಗರತ್ನ, ಅಲ್ಪಸಂಖ್ಯಾತರ ಇಲಾಖೆ ಅಧಿಕಾರಿ ಜಡಕ್ಷರಿ ನಟರಾಜ್, ಗುರುಗುಂಟಾ ನಾಡ ತಹಸೀಲ್ದಾರ್ ರಾಘವೇಂದ್ರ, ಮಹಿಬೂಬ್ ಸಾಬ್, ನಾಗಮ್ಮ, ಗುರುಸ್ವಾಮಿ, ಮಂಜುಳ, ಅಣ್ಣಯ್ಯ, ಕೃಷ್ಣ ನಾಯಕ, ರಾಜು ನಾಯಕ, ಕನಕಪ್ಪ ಗಂಗಾವತಿ, ನರಸಮ್ಮ, ಪವಾಡೆಮ್ಮ ಸೇರಿದಂತೆ ಗ್ರಾಮದ ಮಹಿಳೆಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.



