ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆಯ ಕಾಲುವೆಗಳಲ್ಲಿ ಜಾರಿಯಲ್ಲಿರುವ ವಾರಾಬಂದಿ ಪದ್ಧತಿಯನ್ನು ಕೈಬಿಟ್ಟು, ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ನಿರಂತರವಾಗಿ ನೀರು ಹರಿಸಲು ಕ್ರಮ ಕೈಗೊಳ್ಳಬೇಕು ಎಂದು ರಾಯಚೂರು–ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದ ಜಿ. ಕುಮಾರ ನಾಯಕ ಒತ್ತಾಯಿಸಿದರು.
ನಗರದ ವಿಧಾನಸೌಧದಲ್ಲಿ ಗುರುವಾರ ಕೃಷ್ಣಾ ಮೇಲ್ದಂಡೆ ಯೋಜನೆಯ 2026–27ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಹಂಗಾಮಿನ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ರೈತರು ನೀರಾವರಿ ನೀರಿನ ಕೊರತೆಯಿಂದ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕಾಲುವೆಗಳಲ್ಲಿ ವಾರಾಬಂದಿ ಪದ್ಧತಿಯಡಿ ನೀರು ಹರಿಸುತ್ತಿರುವುದರಿಂದ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಸಂದರ್ಭದಲ್ಲಿ ಸಮರ್ಪಕ ನೀರು ದೊರೆಯುತ್ತಿಲ್ಲ. ಇದರಿಂದ ಬೆಳೆಗಳ ಬೆಳವಣಿಗೆಗೆ ತೊಂದರೆಯಾಗುವುದರ ಜೊತೆಗೆ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಸಭೆಯ ಗಮನ ಸೆಳೆದರು.
ರೈತರು ಬಿತ್ತನೆ ಮಾಡಿರುವ ಬೆಳೆಗಳಿಗೆ ಸಕಾಲದಲ್ಲಿ ನೀರು ಒದಗಿಸುವುದು ಅತ್ಯಂತ ಅಗತ್ಯವಾಗಿದೆ. ನೀರಾವರಿ ನೀರಿನ ನಿರ್ವಹಣೆಯಲ್ಲಿ ರೈತರ ಹಿತಾಸಕ್ತಿಗೆ ಮೊದಲ ಆದ್ಯತೆ ನೀಡಬೇಕು. ವಿಶೇಷವಾಗಿ ಕಾಲುವೆಗಳ ಕೊನೆಯ ಭಾಗದ ರೈತರಿಗೂ ಸಮರ್ಪಕವಾಗಿ ನೀರು ತಲುಪುವಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಆಗ್ರಹಿಸಿದರು.
ಪ್ರಸ್ತುತ ಅನುಸರಿಸುತ್ತಿರುವ ವಾರಾಬಂದಿ ಪದ್ಧತಿಯಿಂದ ರೈತರಿಗೆ ಉಂಟಾಗುತ್ತಿರುವ ತೊಂದರೆಗಳನ್ನು ಪರಿಗಣಿಸಿ, ನಿರಂತರ ನೀರು ಪೂರೈಕೆಗೆ ಅನುಕೂಲವಾಗುವ ಪರ್ಯಾಯ ವ್ಯವಸ್ಥೆಯನ್ನು ರೂಪಿಸಬೇಕು. ಲಭ್ಯವಿರುವ ನೀರನ್ನು ಸಮರ್ಪಕವಾಗಿ ನಿರ್ವಹಿಸುವ ಮೂಲಕ ಕೃಷಿ ಚಟುವಟಿಕೆಗಳಿಗೆ ಯಾವುದೇ ಅಡಚಣೆಯಾಗದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ನೀರಿನ ಕೊರತೆಯಿಂದ ಬೆಳೆಗಳು ಹಾನಿಗೊಳಗಾದರೆ ರೈತರು ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಬೇಕಾಗುತ್ತದೆ. ಆದ್ದರಿಂದ ನೀರಾವರಿ ಇಲಾಖೆಯ ಅಧಿಕಾರಿಗಳು ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಅಗತ್ಯವಿರುವ ಪ್ರದೇಶಗಳಿಗೆ ಸಕಾಲದಲ್ಲಿ ನೀರು ತಲುಪಿಸಲು ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.
ಸಭೆಯಲ್ಲಿ ವಾರಾಬಂದಿ ಪದ್ಧತಿಯನ್ನು ಕೈಬಿಟ್ಟು ನಿರಂತರ ನೀರು ಹರಿಸುವ ಕುರಿತು ಸಮಿತಿ ಅಧ್ಯಕ್ಷರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದ ಸಂಸದರು, ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಚಿವರಾದ ಡಾ. ಎಂ.ಬಿ. ಪಾಟೀಲ, ಡಾ. ಶರಣಪ್ರಕಾಶ ಪಾಟೀಲ, ಡಾ. ಅಜಯ್ ಸಿಂಗ್, ಮಾಜಿ ಸಚಿವ ಶರಣಬಸಪ್ಪ ದರ್ಶನಾಪುರ ಸೇರಿದಂತೆ ವಿವಿಧ ಕ್ಷೇತ್ರಗಳ ಶಾಸಕರು ಹಾಗೂ ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.



