ರಾಯಚೂರು: ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಎ. ವಸಂತಕುಮಾರ ಅವರು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ, ಉಪನ್ಯಾಸಕರೊಂದಿಗೆ ಸಮಾಲೋಚನೆ ನಡೆಸಿದರು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಬೆಂಬಲಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಉಪನ್ಯಾಸಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವನ್ನು ಮಂಜೂರು ಮಾಡಿ ಸ್ಥಾಪಿಸುವಲ್ಲಿ ಕಾಂಗ್ರೆಸ್ ಸರ್ಕಾರ ಪ್ರಮುಖ ಪಾತ್ರ ವಹಿಸಿದೆ. ಮುಂದಿನ ದಿನಗಳಲ್ಲಿ ವಿಶ್ವವಿದ್ಯಾಲಯದ ಶೈಕ್ಷಣಿಕ ಪ್ರಗತಿ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಅಗತ್ಯ ಸೌಲಭ್ಯಗಳ ಒದಗಿಸುವಿಕೆಗೆ ಸರ್ಕಾರದ ಮಟ್ಟದಲ್ಲಿ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಭರವಸೆ ನೀಡಿದರು.
ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಗಮನ ಸೆಳೆಯಲಾಗುವುದು. ಅದೇ ರೀತಿ ರಾಜ್ಯದ ಪದವಿ ಮಹಾವಿದ್ಯಾಲಯಗಳು ಮತ್ತು ವಿವಿಧ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಪಾರದರ್ಶಕ ನೇಮಕಾತಿ ಪ್ರಕ್ರಿಯೆಯ ಮೂಲಕ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಶಿಕ್ಷಕರ ಹಕ್ಕುಗಳ ರಕ್ಷಣೆ, ಉದ್ಯೋಗ ಭದ್ರತೆ, ವೃತ್ತಿಪರ ಗೌರವ ಹಾಗೂ ಶೈಕ್ಷಣಿಕ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಹೇಳಿದರು.
ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರು ಈ ಹಿಂದೆ ಒಂದು ಅವಧಿಗೆ ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದು, ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಅವರ ಹಿತಾಸಕ್ತಿಗಳ ಪರವಾಗಿ ಪರಿಣಾಮಕಾರಿಯಾಗಿ ಕೆಲಸ ಮಾಡಿದ್ದಾರೆ. ಶಿಕ್ಷಕರ ಬೇಡಿಕೆಗಳನ್ನು ಸರ್ಕಾರದ ಮಟ್ಟದಲ್ಲಿ ಪ್ರಸ್ತಾಪಿಸಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಿದ್ದಾರೆ. ಮುಂದಿನ ದಿನಗಳಲ್ಲಿ ಶಿಕ್ಷಕರ ಪರವಾಗಿ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಅವರಿಗೆ ಮತ್ತೊಂದು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.
ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರು ಶರಣಪ್ಪ ಮಟ್ಟೂರು ಅವರ ಹಿಂದಿನ ಸೇವೆ ಹಾಗೂ ಶಿಕ್ಷಕರ ಪರವಾದ ಬದ್ಧತೆಯನ್ನು ಪರಿಗಣಿಸಿ, ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಬೇಕೆಂದು ಎ. ವಸಂತಕುಮಾರ ಕೋರಿದರು.
ಈ ಸಂದರ್ಭದಲ್ಲಿ ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅಬ್ದುಲ್ ಕರೀಂ, ಮಹಾನಗರ ಪಾಲಿಕೆ ಮಾಜಿ ಸದಸ್ಯ ಬಸವರಾಜ ದರೂರು, ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ನಾಯಕ, ಕೆಪಿಸಿಸಿ ವಕ್ತಾರ ಡಾ. ರಝಾಕ್ ಉಸ್ತಾದ್, ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ ಸದಸ್ಯ ರಮೇಶ ರೋಸ್ಲಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಇತರರು ಉಪಸ್ಥಿತರಿದ್ದರು.



