ರಾಯಚೂರು: ಯುವಜನರು ಮಾದಕ ವಸ್ತುಗಳ ವ್ಯಸನ ಸೇರಿದಂತೆ ವಿವಿಧ ದುಶ್ಚಟಗಳಿಂದ ದೂರವಿದ್ದು, ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು. ದೈಹಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯಕ್ಕೂ ಮಹತ್ವ ನೀಡುವ ಮೂಲಕ ಸದೃಢ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಮಾನ್ವಿಯ ಲಯೋಲ ಕಾಲೇಜಿನ ಮಾನಸಿಕ ಆಪ್ತ ಸಮಾಲೋಚಕ ರಾಹುಲ್ ಬೊಮ್ಮನ್ ಸಲಹೆ ನೀಡಿದರು.

ತಾಲೂಕಿನ ಮನ್ಸಲಾಪುರ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ದೇವಸ್ಥಾನದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಹಾಗೂ ರಾಯಚೂರಿನ ಜಿಲ್ಲಾ ವೀರಶೈವ ಲಿಂಗಾಯತ ಸಮಾಜದ ಹೇರೂರು ಚಂದ್ರಾಯಗೌಡ ಮಲ್ಹಾರ ಸಿದ್ದಪ್ಪಗೌಡ ಪದವಿ ಮಹಾವಿದ್ಯಾಲಯದ ಸಹಯೋಗದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಐದನೇ ದಿನವಾದ ಶುಕ್ರವಾರ ಆಯೋಜಿಸಿದ್ದ 'ವಿಕಸಿತ ಭಾರತಕ್ಕಾಗಿ ನಶಾಮುಕ್ತ ಯುವಕರು' ವಿಷಯದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಯುವಕರು ತಮ್ಮ ಜೀವನದ ಗುರಿಗಳನ್ನು ಸಾಧಿಸಲು ಮಾನಸಿಕವಾಗಿ ಸದೃಢರಾಗಿರುವುದು ಅಗತ್ಯವಾಗಿದೆ. ದುಶ್ಚಟಗಳಿಗೆ ಒಳಗಾಗುವುದರಿಂದ ವೈಯಕ್ತಿಕ ಬದುಕಿನ ಜೊತೆಗೆ ಕುಟುಂಬ ಹಾಗೂ ಸಮಾಜದ ಮೇಲೆಯೂ ದುಷ್ಪರಿಣಾಮ ಉಂಟಾಗುತ್ತದೆ. ವಿದ್ಯಾರ್ಥಿಗಳು ಸಕಾರಾತ್ಮಕ ಚಿಂತನೆ, ಉತ್ತಮ ಸ್ನೇಹ ಹಾಗೂ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ವಿವಿಧ ನಿದರ್ಶನಗಳು ಹಾಗೂ ನೃತ್ಯ ಪ್ರದರ್ಶನಗಳ ಮೂಲಕ ಮಾದಕ ವಸ್ತುಗಳ ದುಷ್ಪರಿಣಾಮಗಳು ಮತ್ತು ಮಾನಸಿಕ ಆರೋಗ್ಯದ ಮಹತ್ವವನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು.

ಬಳಿಕ ನಡೆದ 'ವಿಪತ್ತು ನಿರ್ವಹಣೆ ಮತ್ತು ರಕ್ತದಾನದ ಮಹತ್ವ' ಕುರಿತ ಉಪನ್ಯಾಸದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಹಾಗೂ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಯುವ ರೆಡ್‌ಕ್ರಾಸ್ ನೋಡಲ್ ಅಧಿಕಾರಿ ಡಾ. ರವಿಕುಮಾರ್ ಮಾತನಾಡಿದರು.

ಪ್ರಕೃತಿ ವಿಕೋಪಗಳಾದ ಅತಿವೃಷ್ಟಿ, ಅನಾವೃಷ್ಟಿ ಸೇರಿದಂತೆ ವಿವಿಧ ತುರ್ತು ಪರಿಸ್ಥಿತಿಗಳು ಎದುರಾದಾಗ ಸಾರ್ವಜನಿಕರು ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕುರಿತು ವಿವರಿಸಿದರು. ಅಪಘಾತ ಹಾಗೂ ಅವಘಡಗಳ ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆ ನೀಡುವ ವಿಧಾನಗಳು, ಅಪಾಯದಿಂದ ರಕ್ಷಿಸಿಕೊಳ್ಳುವ ಮಾರ್ಗಗಳು ಮತ್ತು ವಿಪತ್ತು ನಿರ್ವಹಣೆಯಲ್ಲಿ ಯುವಜನರ ಪಾತ್ರದ ಬಗ್ಗೆ ಮಾಹಿತಿ ನೀಡಿದರು.

ರಕ್ತದಾನವು ಅಮೂಲ್ಯ ಜೀವಗಳನ್ನು ಉಳಿಸುವ ಮಾನವೀಯ ಕಾರ್ಯವಾಗಿದೆ. ತುರ್ತು ಸಂದರ್ಭಗಳಲ್ಲಿ ರಕ್ತದ ಕೊರತೆಯಿಂದ ರೋಗಿಗಳು ಸಂಕಷ್ಟಕ್ಕೆ ಒಳಗಾಗುವುದನ್ನು ತಪ್ಪಿಸಲು ಅರ್ಹ ಆರೋಗ್ಯವಂತ ವ್ಯಕ್ತಿಗಳು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಲು ಮುಂದಾಗಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯ ಹಾಗೂ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ ಸದಸ್ಯ ಪರ್ವತರೆಡ್ಡಿ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಶಿಸ್ತು, ನಾಯಕತ್ವ ಹಾಗೂ ಸಮಾಜಸೇವೆಯ ಮನೋಭಾವ ಬೆಳೆಸಲು ಸಹಕಾರಿಯಾಗಿವೆ. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಾಮಾಜಿಕ ಜವಾಬ್ದಾರಿಯನ್ನು ಅರಿತುಕೊಂಡು ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಸುರೇಶ ಸ್ವಾಮಿ, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿಗಳಾದ ಶರಣಬಸಪ್ಪ, ಪದ್ಮಾವತಿ, ಉಪನ್ಯಾಸಕರಾದ ಗಂಗಾಧರ, ಅಜೇಯ ಕುಮಾರ, ಶಿಬಿರಾರ್ಥಿಗಳು ಹಾಗೂ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.