ಲಿಂಗಸುಗೂರು: ಪಟ್ಟಣದ ರಾಯಚೂರು ರಸ್ತೆಯ ಭಗೀರಥ ಕಾಲೋನಿಯ ಶ್ರೀ ಲಕ್ಷ್ಮೀವೆಂಕಟೇಶ್ವರ ದೇವಸ್ಥಾನದಲ್ಲಿ ದಸರಾ ನವರಾತ್ರಿ ಮಹೋತ್ಸವದ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ಜರುಗಿದವು.

ದೇವಸ್ಥಾನದ ಪ್ರಧಾನ ಅರ್ಚಕ ವೆಂಕಟೇಶ ಹಾವಿನಾಳ ಅವರ ನೇತೃತ್ವದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಪ್ರತಿದಿನ ಶ್ರೀ ವೆಂಕಟೇಶ್ವರ ಸ್ವಾಮಿಯ ಮೂರ್ತಿಗೆ ಪಂಚಾಮೃತ ಅಭಿಷೇಕ ನೆರವೇರಿಸಿ, ವಿವಿಧ ಬಗೆಯ ಹೂವುಗಳಿಂದ ವಿಶೇಷ ಅಲಂಕಾರ ಮಾಡಲಾಗಿತ್ತು. ಭಕ್ತರು ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ಅಕ್ಟೋಬರ್ 15ರಂದು ದೇವಪುರದ ಮಾಧವ ಜೋಶಿ ಅವರ ನೇತೃತ್ವದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಹೋಮ, ಹವನ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ಈ ಸಂದರ್ಭದಲ್ಲಿ ಮಹಿಳಾ ಭಜನಾ ಮಂಡಳಿಯ ಸದಸ್ಯರು ಭಕ್ತಿಗೀತೆಗಳನ್ನು ಹಾಡುವ ಮೂಲಕ ದೇವರ ನಾಮಸ್ಮರಣೆ ಮಾಡಿದರು.

ನವರಾತ್ರಿ ಮಹೋತ್ಸವದ ಅಂಗವಾಗಿ ಮಹಿಳೆಯರಿಂದ ಭಜನೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ದೇವಸ್ಥಾನದಲ್ಲಿ ನಡೆದ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಆಶೀರ್ವಾದ ಪಡೆದರು.

ಕಾರ್ಯಕ್ರಮದಲ್ಲಿ ಮಹಿಳಾ ಭಜನಾ ಮಂಡಳಿ ಅಧ್ಯಕ್ಷೆ ಜಯಶ್ರೀ ವಿ. ಹಾವಿನಾಳ, ಅಶ್ವಿನಿ ವಿ. ಪಾಟೀಲ್, ಚಂದ್ರಕಲಾ ಜೋಶಿ ಹೊಸಪೇಟೆ, ಗೋಪಾಲ್ ಕುಲಕರ್ಣಿ ಆನೆಹೊಸೂರು, ವೆಂಕನಗೌಡ ಪಾಟೀಲ್, ರಾಘವೇಂದ್ರ ಕುಲಕರ್ಣಿ ಸೇರಿದಂತೆ ಶ್ರೀ ವೆಂಕಟೇಶ್ವರ ದೇವಸ್ಥಾನ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಭಗೀರಥ ಕಾಲೋನಿಯ ಭಕ್ತಾದಿಗಳು ಉಪಸ್ಥಿತರಿದ್ದರು.