ರಾಯಚೂರು: ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರ ಪರವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಎ. ವಸಂತಕುಮಾರ ಅವರು ನಗರದಲ್ಲಿ ಮತಯಾಚನೆ ನಡೆಸಿದರು.
ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯೂ ಆಗಿರುವ ಅವರು, ನಗರದ ವಿವಿಧ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡುವ ಮೂಲಕ ಬೆಂಬಲಿಸುವಂತೆ ಮನವಿ ಮಾಡಿದರು.
ಜಿಲ್ಲೆಯ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಪ್ರತಿನಿಧಿಗಳನ್ನು ಭೇಟಿಯಾಗಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಪ್ರಗತಿಗೆ ಅಗತ್ಯ ಸಹಕಾರ ನೀಡುತ್ತಿದೆ. ವಿಶೇಷವಾಗಿ ಅಲ್ಪಸಂಖ್ಯಾತ ಸಮುದಾಯದ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ವಿವಿಧ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಗುರುತಿಸಿ ಅವುಗಳ ಪರಿಹಾರಕ್ಕೆ ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.
ಶಿಕ್ಷಕರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಶಿಕ್ಷಕರ ಬೇಡಿಕೆಗಳು ಹಾಗೂ ಸೇವಾ ಸಂಬಂಧಿತ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಪರಿಹರಿಸಲು ಸರ್ಕಾರ ಬದ್ಧವಾಗಿದೆ. ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಮರುಜಾರಿಗೆ ಸಂಬಂಧಿಸಿದಂತೆ ಈಗಾಗಲೇ ವರದಿ ಪಡೆಯಲಾಗಿದ್ದು, ಯೋಜನೆಯನ್ನು ಅನುಷ್ಠಾನಗೊಳಿಸುವ ಬದ್ಧತೆಯನ್ನು ಸರ್ಕಾರ ಹೊಂದಿದೆ ಎಂದು ತಿಳಿಸಿದರು.
ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಅರಿವು ಹೊಂದಿರುವ ಶರಣಪ್ಪ ಮಟ್ಟೂರು ಅವರು ಈ ಹಿಂದೆ ಒಂದು ಅವಧಿಗೆ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ತಮ್ಮ ಅಧಿಕಾರಾವಧಿಯಲ್ಲಿ ಶಿಕ್ಷಕರ ಹಕ್ಕುಗಳು, ಶೈಕ್ಷಣಿಕ ಸೌಲಭ್ಯಗಳ ವಿಸ್ತರಣೆ ಹಾಗೂ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ಅವರ ಅನುಭವ ಮತ್ತು ಕಾರ್ಯವೈಖರಿಯನ್ನು ಪರಿಗಣಿಸಿ ಶಿಕ್ಷಕ ಮತದಾರರು ಮತ್ತೊಮ್ಮೆ ಅವರನ್ನು ವಿಧಾನ ಪರಿಷತ್ತಿಗೆ ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.
ಶಿಕ್ಷಕರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವುದರ ಜೊತೆಗೆ ಅವುಗಳಿಗೆ ಸೂಕ್ತ ಪರಿಹಾರ ದೊರಕಿಸಿಕೊಡುವ ಸಾಮರ್ಥ್ಯ ಶರಣಪ್ಪ ಮಟ್ಟೂರು ಅವರಿಗಿದೆ. ಶಿಕ್ಷಣ ಕ್ಷೇತ್ರದ ಹಿತದೃಷ್ಟಿಯಿಂದ ಶಿಕ್ಷಕರು ತಮ್ಮ ಪ್ರಥಮ ಪ್ರಾಶಸ್ತ್ಯದ ಮತವನ್ನು ಕಾಂಗ್ರೆಸ್ ಅಭ್ಯರ್ಥಿಗೆ ನೀಡಬೇಕು ಎಂದು ವಸಂತಕುಮಾರ ಕೋರಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ವಕ್ತಾರ ಡಾ. ರಝಾಕ್ ಉಸ್ತಾದ್, ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ಬಸವರಾಜ ದರೂರು, ರಾಮಕೃಷ್ಣ ನಾಯಕ, ಶಿಕ್ಷಣ ಸಂಸ್ಥೆಗಳ ಪದಾಧಿಕಾರಿಗಳಾದ ಮೊಹಮ್ಮದ್ ಇಕ್ಬಾಲ್, ಅಬ್ದುಲ್ ಹೈ ಫೆರೋಜ್, ಮೊಹಮ್ಮದ್ ಇಕ್ಬಾಲ್ ಕೋಸಗಿ, ಅಬ್ದುಲ್ ಸಮದ್, ಮೊಹಮ್ಮದ್ ಇಬ್ರಾಹಿಂ, ಸೈಯದ್ ಜುಬೇರ್, ಶೇಖ್ ಮಹಿಬೂಬ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.



