ರಾಯಚೂರು: ರಾಜ್ಯ ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಹಿಂದುಳಿದ ವರ್ಗಗಳಿಗೆ ನಿಗದಿಪಡಿಸಿರುವ ಶೇ.32ರಷ್ಟು ಮೀಸಲಾತಿಯಡಿ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸದೆ ಮುಂದುವರಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಡಾ. ಅಂಬೇಡ್ಕರ್ ಪರಿಶಿಷ್ಟ ಜಾತಿಗಳ ಒಕ್ಕೂಟದ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಮಿತ್ರ ಆಗ್ರಹಿಸಿದರು.

ನಗರದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಕ್ಟೋಬರ್ 12, 2026ರಂದು ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ. ಆದರೆ ಈ ಮೇಲ್ಮನವಿಯು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ಪ್ರವರ್ಗಗಳಿಗೆ ಸಂಬಂಧಿಸಿದ್ದಾಗಿದ್ದು, ಹಿಂದುಳಿದ ವರ್ಗಗಳಿಗೆ ಕಲ್ಪಿಸಿರುವ ಶೇ.32ರಷ್ಟು ಮೀಸಲಾತಿಯೊಂದಿಗೆ ನೇರ ಸಂಬಂಧ ಹೊಂದಿಲ್ಲ ಎಂಬುದು ತಮ್ಮ ಅಭಿಪ್ರಾಯವಾಗಿದೆ. ಆದ್ದರಿಂದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳ ನೇಮಕಾತಿಗೆ ಯಾವುದೇ ಅಡಚಣೆ ಉಂಟಾಗದಂತೆ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಜನಸಂಖ್ಯೆ ಹೆಚ್ಚಳವಾಗಿದೆ ಎಂಬ ಸರ್ಕಾರದ ವಾದವನ್ನು ಪ್ರಶ್ನಿಸಿದ ಅವರು, ಪರಿಶಿಷ್ಟ ಜಾತಿಗಳ ಪಟ್ಟಿಗೆ ಸಂವಿಧಾನಬಾಹಿರವಾಗಿ ಸೇರ್ಪಡೆ ಮಾಡಲಾಗಿದೆ ಎಂದು ತಮ್ಮ ಸಂಘಟನೆ ಆರೋಪಿಸುತ್ತಿರುವ 13 ಜಾತಿಗಳ ಕುರಿತು ಸಮಗ್ರ ಪರಿಶೀಲನೆ ನಡೆಸಬೇಕು. ಸಂವಿಧಾನದ ಅನುಚ್ಛೇದ 341ರ ಅಡಿಯಲ್ಲಿ ಪರಿಶಿಷ್ಟ ಜಾತಿಗಳ ಪಟ್ಟಿಯ ಪರಿಷ್ಕರಣೆಗೆ ಅಗತ್ಯವಿರುವ ಕಾನೂನು ಪ್ರಕ್ರಿಯೆ ಅನುಸರಿಸಿ, ಸಂಬಂಧಪಟ್ಟ ಜಾತಿಗಳನ್ನು ಪಟ್ಟಿಯಿಂದ ಕೈಬಿಡುವ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಆಗ್ರಹಿಸಿದರು.

ಪರಿಶಿಷ್ಟ ಪಂಗಡಗಳ ಪಟ್ಟಿಯಲ್ಲಿಯೂ ನಿಯಮಬಾಹಿರವಾಗಿ ಕೆಲವು ಜಾತಿಗಳನ್ನು ಸೇರಿಸಲಾಗಿದೆ ಎಂಬ ಆರೋಪಗಳಿವೆ. ಇಂತಹ ವಿಷಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಸಂವಿಧಾನಾತ್ಮಕ ಹಾಗೂ ಕಾನೂನಾತ್ಮಕ ನೆಲೆಯಲ್ಲಿ ಪರಿಶೀಲಿಸಬೇಕು. ಪಟ್ಟಿಗೆ ಸೇರ್ಪಡೆಯಾಗಿರುವ ಜಾತಿಗಳ ಅರ್ಹತೆಯನ್ನು ಪರಿಶೀಲಿಸಿ, ಅಗತ್ಯವಿದ್ದಲ್ಲಿ ಕೇಂದ್ರ ಸರ್ಕಾರಕ್ಕೆ ಸೂಕ್ತ ಶಿಫಾರಸುಗಳನ್ನು ಕಳುಹಿಸಬೇಕು ಎಂದು ಹೇಳಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಪಟ್ಟಿಗಳಲ್ಲಿನ ಸೇರ್ಪಡೆ ಪ್ರಕ್ರಿಯೆಯು ಸಂವಿಧಾನದ ನಿಯಮಗಳಿಗೆ ಅನುಗುಣವಾಗಿರುವುದು ಅತ್ಯಂತ ಮುಖ್ಯವಾಗಿದೆ. ಅನರ್ಹವಾಗಿ ಸೇರ್ಪಡೆಯಾಗಿವೆ ಎಂದು ಆರೋಪಿಸಲಾಗುತ್ತಿರುವ ಜಾತಿಗಳ ಕುರಿತು ನಿಷ್ಪಕ್ಷಪಾತ ಪರಿಶೀಲನೆ ನಡೆಸಿ ಕ್ರಮ ಕೈಗೊಂಡರೆ ಸಾಮಾಜಿಕ ನ್ಯಾಯದ ಆಶಯಗಳಿಗೆ ಪೂರಕವಾಗಲಿದೆ. ಇಂತಹ ಕ್ರಮಗಳಿಂದ ದೌರ್ಜನ್ಯ ಪ್ರಕರಣಗಳ ಸಂಖ್ಯೆಯೂ ಕಡಿಮೆಯಾಗಬಹುದು ಎಂಬುದು ತಮ್ಮ ಅಭಿಪ್ರಾಯವಾಗಿದೆ ಎಂದು ತಿಳಿಸಿದರು.

ಸುಪ್ರೀಂ ಕೋರ್ಟ್‌ನ ದಾವೇಂದರ್ ಸಿಂಗ್ ಪ್ರಕರಣದ ತೀರ್ಪಿನ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳೊಳಗೆ ಒಳಮೀಸಲಾತಿ ನೀತಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಅಗತ್ಯವಿದೆ. ಇದರಿಂದ ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹೆಚ್ಚು ಹಿಂದುಳಿದಿರುವ ಸಮುದಾಯಗಳಿಗೆ ಮೀಸಲಾತಿಯ ಪ್ರಯೋಜನಗಳು ಮತ್ತು ಸರ್ಕಾರಿ ಸೌಲಭ್ಯಗಳು ಪರಿಣಾಮಕಾರಿಯಾಗಿ ತಲುಪಲು ಸಾಧ್ಯವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಮೀಸಲಾತಿ ವಿಚಾರದಲ್ಲಿ ಉಂಟಾಗಿರುವ ಕಾನೂನು ಗೊಂದಲಗಳಿಂದ ಅರ್ಹ ಅಭ್ಯರ್ಥಿಗಳ ಉದ್ಯೋಗಾವಕಾಶಗಳಿಗೆ ತೊಂದರೆಯಾಗಬಾರದು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸ್ಪಷ್ಟ ನಿಲುವು ತಾಳುವ ಮೂಲಕ ಹಿಂದುಳಿದ ವರ್ಗಗಳ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರಿಸಲು ಕ್ರಮವಹಿಸಬೇಕು ಎಂದು ಮಹೇಂದ್ರ ಕುಮಾರ್ ಮಿತ್ರ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಹುಸೇನ್ ಭಾಷಾ ಪಾಲಕನಮರಡಿ ಉಪಸ್ಥಿತರಿದ್ದರು.