ರಾಯಚೂರು: ತಾಲೂಕಿನ ಮನ್ಸಲಾಪುರ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ದೇವಸ್ಥಾನದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ, ರಾಯಚೂರು ಹಾಗೂ ಜಿಲ್ಲಾ ವೀರಶೈವ ಲಿಂಗಾಯತ ಸಮಾಜದ ಸಹಯೋಗದಲ್ಲಿ ಆಯೋಜಿಸಿರುವ ರಾಷ್ಟ್ರೀಯ ಸೇವಾ ಯೋಜನೆಯ (ಎನ್‌ಎಸ್‌ಎಸ್) ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಶನಿವಾರ ಶರಣರ ಚಿಂತನೆಗಳು ಮತ್ತು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳ ಬೆಳವಣಿಗೆ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶ್ರೀ ಸಿದ್ದಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಸಿದ್ಧನಗೌಡ ಮಾತನಾಡಿ, ಹನ್ನೆರಡನೇ ಶತಮಾನದ ಶರಣರು ತಮ್ಮ ವಚನಗಳ ಮೂಲಕ ಸಮಾಜಕ್ಕೆ ಸಮಾನತೆ, ಕಾಯಕ, ದಾಸೋಹ ಹಾಗೂ ಮಾನವೀಯತೆಯ ಮಹತ್ವವನ್ನು ತಿಳಿಸಿಕೊಟ್ಟಿದ್ದಾರೆ. ಶರಣರ ಚಿಂತನೆಗಳು ಕೇವಲ ಧಾರ್ಮಿಕ ವಿಚಾರಗಳಿಗೆ ಸೀಮಿತವಾಗದೆ ಸಾಮಾಜಿಕ ಪರಿವರ್ತನೆಗೆ ದಾರಿದೀಪವಾಗಿವೆ. ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಶರಣರ ಜೀವನಾದರ್ಶಗಳನ್ನು ಮೈಗೂಡಿಸಿಕೊಂಡಾಗ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಜಿಲ್ಲಾ ವೀರಶೈವ ಲಿಂಗಾಯತ ಸಮಾಜದ ಸದಸ್ಯರಾದ ವಿಜಯ ಭಾಸ್ಕರ್ ರೆಡ್ಡಿ ಇಂದಪುರ ಹಾಗೂ ವಿಜಯಕುಮಾರ್ ಹಿರೇಮಠ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿಯೇ ಶಿಸ್ತು, ಸಮಯಪ್ರಜ್ಞೆ, ಜವಾಬ್ದಾರಿ ಹಾಗೂ ಸೇವಾ ಮನೋಭಾವ ಬೆಳೆಸಿಕೊಳ್ಳುವುದು ಅಗತ್ಯವಾಗಿದೆ. ನಾಯಕತ್ವ ಎಂದರೆ ಕೇವಲ ಇತರರನ್ನು ಮುನ್ನಡೆಸುವುದಲ್ಲ, ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವುದು ಹಾಗೂ ಎಲ್ಲರನ್ನೂ ಒಗ್ಗೂಡಿಸಿಕೊಂಡು ಕಾರ್ಯನಿರ್ವಹಿಸುವ ಸಾಮರ್ಥ್ಯ ಹೊಂದುವುದಾಗಿದೆ. ಯುವಜನತೆ ಇಂತಹ ಗುಣಗಳನ್ನು ಅಳವಡಿಸಿಕೊಂಡು ಸಮಾಜದ ಪ್ರಗತಿಯಲ್ಲಿ ಸಕ್ರಿಯ ಪಾತ್ರ ವಹಿಸಬೇಕು ಎಂದು ಸಲಹೆ ನೀಡಿದರು.

ಮಹಾವಿದ್ಯಾಲಯದ ಪ್ರಾಚಾರ್ಯ ಹಾಗೂ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ ಸದಸ್ಯ ಪರ್ವತರೆಡ್ಡಿ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರಗಳು ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕದ ಶಿಕ್ಷಣದ ಜೊತೆಗೆ ಸಮಾಜದ ವಾಸ್ತವಿಕ ಪರಿಸ್ಥಿತಿಯನ್ನು ಅರಿಯುವ ಅವಕಾಶ ಕಲ್ಪಿಸುತ್ತವೆ. ಗ್ರಾಮೀಣ ಜನರೊಂದಿಗೆ ಬೆರೆತು ಅವರ ಸಮಸ್ಯೆಗಳನ್ನು ತಿಳಿದುಕೊಳ್ಳುವುದು, ಸಾಮೂಹಿಕ ಕಾರ್ಯಗಳಲ್ಲಿ ಭಾಗವಹಿಸುವುದು ಹಾಗೂ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮತ್ತು ನಾಯಕತ್ವ ಸಾಮರ್ಥ್ಯ ವೃದ್ಧಿಯಾಗುತ್ತದೆ. ಇಂತಹ ಶಿಬಿರಗಳ ಸದುಪಯೋಗ ಪಡೆದುಕೊಂಡು ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್.ಎಸ್.ಎ. ಪದವಿ ಪೂರ್ವ ಕಾಲೇಜಿನ ಪ್ರಧಾನ ಕಾರ್ಯದರ್ಶಿ ಚನ್ನಬಸವ ಇಂಜಿನಿಯರ್ ಅವರು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ಶೈಕ್ಷಣಿಕ ಚಟುವಟಿಕೆಗಳೊಂದಿಗೆ ಸಾಮಾಜಿಕ ಸೇವೆಯೂ ಮಹತ್ವದ ಪಾತ್ರ ವಹಿಸುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಶರಣಬಸಪ್ಪ, ಸಹಾಯಕ ಶಿಬಿರಾಧಿಕಾರಿಗಳಾದ ಗಂಗಾಧರ ಮತ್ತು ಈರಪ್ಪ ಸರ್ಜಾಪುರ, ಉಪನ್ಯಾಸಕರಾದ ಪದ್ಮಾವತಿ, ಟೀಕ್ಕಪ್ಪ, ಅಜೇಯ ಕುಮಾರ ಸೇರಿದಂತೆ ಶಿಬಿರಾರ್ಥಿಗಳು, ವಿದ್ಯಾರ್ಥಿಗಳು ಹಾಗೂ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.