ಮಾನ್ವಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರ ಪರ ಮಾಜಿ ಸಚಿವ ಎನ್.ಎಸ್. ಬೋಸರಾಜು ಪಟ್ಟಣದ ವಿವಿಧ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಶಿಕ್ಷಕ ಮತದಾರರಲ್ಲಿ ಬೆಂಬಲ ಕೋರಿದರು.
ಪಟ್ಟಣದ ಸರ್ಕಾರಿ ಪದವಿ ಕಾಲೇಜು, ಲೋಯೋಲಾ ಕಾಲೇಜು, ಕಾಕತೀಯ ಶಿಕ್ಷಣ ಸಂಸ್ಥೆ ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ತೆರಳಿದ ಅವರು, ಶಿಕ್ಷಕರು ಹಾಗೂ ಉಪನ್ಯಾಸಕರನ್ನು ಭೇಟಿಯಾಗಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರಿಗೆ ಮತ ನೀಡುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಶಿಕ್ಷಕರೊಂದಿಗೆ ಸಮಾಲೋಚನೆ ನಡೆಸಿದ ಬೋಸರಾಜು, ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಹಾಗೂ ಅವರ ಹಿತಾಸಕ್ತಿಗಳನ್ನು ಪ್ರತಿನಿಧಿಸುವ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಕೋರಿದರು.
ಮತಯಾಚನೆ ಸಂದರ್ಭದಲ್ಲಿ ಶಾಸಕ ಹಂಪಯ್ಯ ನಾಯಕ, ನಯೋಪ್ರ ಅಧ್ಯಕ್ಷ ಅಬ್ದುಲ್ ಗಫೂರ್ ಸಾಬ್, ಬಿ.ಕೆ. ಅಮರೇಶಪ್ಪ, ಖಾಲಿದ್ ಗುರು ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.



