ರಾಯಚೂರು, ಅ.17: ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಶಾಂತಪ್ಪ ಅವರು ಶುಕ್ರವಾರ ರಾಯಚೂರು ಕೃಷಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ, ಅಲ್ಲಿನ ಉಪನ್ಯಾಸಕರು ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರನ್ನು ಭೇಟಿಯಾಗಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡುವಂತೆ ಮನವಿ ಮಾಡಿದರು.

ಅಕ್ಟೋಬರ್ 23ರಂದು ನಡೆಯಲಿರುವ ಚುನಾವಣೆಯಲ್ಲಿ ಶರಣಪ್ಪ ಮಟ್ಟೂರು ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವಂತೆ ಕೋರಿದ ಅವರು, ಶಿಕ್ಷಕರ ಹಿತಾಸಕ್ತಿ ಕಾಪಾಡುವಲ್ಲಿ ಹಾಗೂ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವಲ್ಲಿ ಕಾಂಗ್ರೆಸ್ ಪಕ್ಷ ಸದಾ ಬದ್ಧವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಉಪನ್ಯಾಸಕರನ್ನು ಉದ್ದೇಶಿಸಿ ಮಾತನಾಡಿದ ಕೆ. ಶಾಂತಪ್ಪ, ಶರಣಪ್ಪ ಮಟ್ಟೂರು ಅವರು ಈ ಹಿಂದೆ ಒಂದು ಅವಧಿಗೆ ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದು, ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಶಿಕ್ಷಕರ ಹಕ್ಕುಗಳ ರಕ್ಷಣೆ, ವೃತ್ತಿಪರ ಗೌರವ ಹಾಗೂ ಸೇವಾ ಸೌಲಭ್ಯಗಳ ಸುಧಾರಣೆಗಾಗಿ ನಿರಂತರ ಪ್ರಯತ್ನ ನಡೆಸಿದ್ದಾರೆ. ಅವರ ಅನುಭವ ಮತ್ತು ಕಾರ್ಯದಕ್ಷತೆಯನ್ನು ಪರಿಗಣಿಸಿ ಮತ್ತೊಮ್ಮೆ ವಿಧಾನ ಪರಿಷತ್‌ಗೆ ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.

ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಶಿಕ್ಷಣ ಕ್ಷೇತ್ರದಲ್ಲಿ ಗುಣಮಟ್ಟ ಹೆಚ್ಚಿಸುವುದರ ಜೊತೆಗೆ ಶಿಕ್ಷಕರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವುದು ಪಕ್ಷದ ಆದ್ಯತೆಯಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರ ಧ್ವನಿಯಾಗಿ ಕಾರ್ಯನಿರ್ವಹಿಸುವ ಶರಣಪ್ಪ ಮಟ್ಟೂರು ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡುವ ಮೂಲಕ ಬೆಂಬಲಿಸಬೇಕು ಎಂದು ಕೋರಿದರು.

ಮಹಾನಗರ ಪಾಲಿಕೆಯ ಹಿರಿಯ ಸದಸ್ಯ ಜಯಣ್ಣ ಮಾತನಾಡಿ, ಶರಣಪ್ಪ ಮಟ್ಟೂರು ಅವರು ತಮ್ಮ ಹಿಂದಿನ ಅವಧಿಯಲ್ಲಿ ವಿಧಾನ ಪರಿಷತ್‌ನಲ್ಲಿ ಶಿಕ್ಷಕರಿಗೆ ಸಂಬಂಧಿಸಿದ ಹಲವು ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸಿ, ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಿದ್ದಾರೆ. ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂವಿಧಾನದ 371(ಜೆ) ವಿಧಿಯಡಿ ದೊರೆಯಬೇಕಾದ ಶೈಕ್ಷಣಿಕ ಸೌಲಭ್ಯಗಳು ಹಾಗೂ ಹಕ್ಕುಗಳನ್ನು ಸಮರ್ಪಕವಾಗಿ ಒದಗಿಸುವ ನಿಟ್ಟಿನಲ್ಲಿ ನಿರಂತರ ಪ್ರಯತ್ನ ನಡೆಸಿದ್ದಾರೆ ಎಂದು ಹೇಳಿದರು.

ಶಿಕ್ಷಕರ ಸಮಸ್ಯೆಗಳ ಬಗ್ಗೆ ಸ್ಪಷ್ಟ ಅರಿವು ಹೊಂದಿರುವ ಶರಣಪ್ಪ ಮಟ್ಟೂರು ಅವರು ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುವ ಸಾಮರ್ಥ್ಯ ಹೊಂದಿದ್ದಾರೆ. ಆದ್ದರಿಂದ ಶಿಕ್ಷಕ ಮತದಾರರು ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಮತ್ತೊಮ್ಮೆ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಜಯವಂತರಾವ್ ಪತಂಗೆ, ಜಿ. ಶಿವಮೂರ್ತಿ, ರುದ್ರಪ್ಪ ಅಂಗಡಿ, ಹರಿಬಾಬು, ತಿಮ್ಮಪ್ಪ, ಕೃಷಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ಮಲ್ಲೇಶ ಕೊಲಮಿ, ಕೆ.ಇ. ಕುಮಾರ, ಹನುಮಂತು, ಹಫಿಜುಲ್ಲಾ ಸೇರಿದಂತೆ ಕಾಲೇಜಿನ ಶಿಕ್ಷಕರ ಕ್ಷೇತ್ರದ ಮತದಾರರು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.