ರಾಯಚೂರು: ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ವಸೂಲಾತಿಯನ್ನು ಹೆಚ್ಚಿಸುವುದರ ಜೊತೆಗೆ ವಿಬಿ-ಜಿ ರಾಮ್ ಜಿ ಯೋಜನೆಯಡಿ ಅರ್ಹ ಕೂಲಿಕಾರ್ಮಿಕರಿಗೆ ಉದ್ಯೋಗ ಕಲ್ಪಿಸಿ ಹೆಚ್ಚಿನ ಮಾನವ ದಿನಗಳನ್ನು ಸೃಜಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕುಮಾರ್ ಕಾಂದೂ ಸೂಚಿಸಿದರು.
ಅಕ್ಟೋಬರ್ 17ರಂದು ದೇವದುರ್ಗ ಹಾಗೂ ಅರಕೇರಾ ತಾಲೂಕಿನ ಜಾಗೀರ್ ಜಾಡಲದಿನ್ನಿ, ಕ್ಯಾದಿಗೇರಾ, ಭೂಮನಗುಡ್ಡ ಮತ್ತು ಅರಕೇರಾ ಸೇರಿದಂತೆ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿದ ಅವರು, ಗ್ರಾಮೀಣಾಭಿವೃದ್ಧಿ ಯೋಜನೆಗಳ ಅನುಷ್ಠಾನ, ಮೂಲಸೌಕರ್ಯ ಕಾಮಗಾರಿಗಳು ಹಾಗೂ ಪಂಚಾಯಿತಿಗಳ ಆಡಳಿತಾತ್ಮಕ ಕಾರ್ಯಗಳ ಪ್ರಗತಿಯನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಿದರು.
ಜಾಗೀರ್ ಜಾಡಲದಿನ್ನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಾಗಟಗಲ್ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಮೇಲ್ಮಟ್ಟದ ನೀರಿನ ಸಂಗ್ರಹ ಟ್ಯಾಂಕ್ ಕಾಮಗಾರಿಯನ್ನು ವೀಕ್ಷಿಸಿದ ಅವರು, ಕಾಮಗಾರಿಯ ವಿಳಂಬದಿಂದ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ಗುಣಮಟ್ಟ ಕಾಯ್ದುಕೊಂಡು ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಸಂಬಂಧಿಸಿದ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಸೂಚಿಸಿದರು.
ಬಳಿಕ ಕ್ಯಾದಿಗೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿ, ಎರಡು ತಿಂಗಳೊಳಗೆ ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ನಿರ್ದೇಶಿಸಿದರು. ಅದೇ ರೀತಿ ಶೌಚಾಲಯ ನಿರ್ಮಾಣ ಕಾಮಗಾರಿಯನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸಿ ಬಳಕೆಗೆ ಅನುಕೂಲ ಮಾಡಿಕೊಡಬೇಕು ಎಂದು ತಿಳಿಸಿದರು.
ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕಾರ್ಯಕರ್ತೆ ಗೈರುಹಾಜರಾಗಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಸಂಬಂಧಿಸಿದ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ಅಂಗನವಾಡಿ ಸಿಬ್ಬಂದಿ ಕರ್ತವ್ಯದಲ್ಲಿ ಸಮಯಪಾಲನೆ ಮಾಡುವುದು ಕಡ್ಡಾಯವಾಗಿದ್ದು, ಮಕ್ಕಳಿಗೆ ನಿಗದಿತ ಸಮಯದಲ್ಲಿ ಪೌಷ್ಟಿಕ ಆಹಾರ ವಿತರಿಸಬೇಕು. ಮಕ್ಕಳ ಆರೋಗ್ಯ, ಸ್ವಚ್ಛತೆ ಹಾಗೂ ಆರೈಕೆಯಲ್ಲಿ ಯಾವುದೇ ನಿರ್ಲಕ್ಷ್ಯ ತೋರಬಾರದು ಎಂದು ಎಚ್ಚರಿಸಿದರು.
ಕ್ಯಾದಿಗೇರಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಆಡಳಿತಾತ್ಮಕ ದಾಖಲೆಗಳು ಹಾಗೂ ತೆರಿಗೆ ವಸೂಲಾತಿ ಪ್ರಗತಿಯನ್ನು ಪರಿಶೀಲಿಸಿದ ಅವರು, ತೆರಿಗೆ ಸಂಗ್ರಹ ನಿರೀಕ್ಷಿತ ಮಟ್ಟದಲ್ಲಿಲ್ಲದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಪಂಚಾಯಿತಿಯ ಆದಾಯ ಹೆಚ್ಚಿಸಲು ಬಾಕಿ ತೆರಿಗೆ ವಸೂಲಾತಿಗೆ ಆದ್ಯತೆ ನೀಡಬೇಕು. ಕಚೇರಿಯ ಕಡತಗಳು ಮತ್ತು ದಾಖಲೆಗಳನ್ನು ವ್ಯವಸ್ಥಿತವಾಗಿ ನಿರ್ವಹಿಸುವುದರೊಂದಿಗೆ ಸಾರ್ವಜನಿಕರಿಗೆ ಅಗತ್ಯ ಸೇವೆಗಳು ಸಕಾಲದಲ್ಲಿ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ ಪ್ರದೇಶದ ಅರ್ಹ ಕೂಲಿಕಾರ್ಮಿಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಮೂಲಕ ಮಾನವ ದಿನಗಳ ಸೃಜನೆಗೆ ಹೆಚ್ಚಿನ ಒತ್ತು ನೀಡಬೇಕು. ಉದ್ಯೋಗಕ್ಕಾಗಿ ಬೇಡಿಕೆ ಸಲ್ಲಿಸುವ ಕಾರ್ಮಿಕರಿಗೆ ಕೆಲಸ ಒದಗಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.
ಭೂಮನಗುಡ್ಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೂಲಿಕಾರ್ಮಿಕರೊಂದಿಗೆ ಸಂವಾದ ನಡೆಸಿದ ಅವರು, ಯೋಜನೆಯಡಿ ದೊರೆಯುವ ಉದ್ಯೋಗ ಮತ್ತು ಕೂಲಿ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ನಿಗದಿತ ಅಳತೆಗೆ ಅನುಗುಣವಾಗಿ ಕೆಲಸ ನಿರ್ವಹಿಸಿದರೆ ಪುರುಷ ಹಾಗೂ ಮಹಿಳಾ ಕಾರ್ಮಿಕರಿಗೆ ಸಮಾನವಾಗಿ ದಿನಕ್ಕೆ 382 ರೂಪಾಯಿ ಕೂಲಿ ದೊರೆಯುತ್ತದೆ. ಯೋಜನೆಯಡಿ ಲಭ್ಯವಿರುವ 125 ದಿನಗಳ ಉದ್ಯೋಗಾವಕಾಶವನ್ನು ಅರ್ಹ ಕಾರ್ಮಿಕರು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ನಂತರ ಅರಕೇರಾ ಗ್ರಾಮದಲ್ಲಿರುವ ಕಿಶೋರಿ ಕೇಂದ್ರಕ್ಕೆ ಭೇಟಿ ನೀಡಿ, ಕೇಂದ್ರದ ಕಾರ್ಯನಿರ್ವಹಣೆ, ಮೂಲಸೌಕರ್ಯ ಹಾಗೂ ಫಲಾನುಭವಿಗಳಿಗೆ ಒದಗಿಸಲಾಗುತ್ತಿರುವ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು. ಕೇಂದ್ರದ ಚಟುವಟಿಕೆಗಳು ಪರಿಣಾಮಕಾರಿಯಾಗಿ ನಡೆಯುವಂತೆ ಸಂಬಂಧಿಸಿದ ಸಿಬ್ಬಂದಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ. ವಾಲ್ಮೀಕಿ, ಸಹಾಯಕ ನಿರ್ದೇಶಕ ಅಣ್ಣರಾವ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಜಿಲ್ಲಾ ಎಂಐಎಸ್ ಸಂಯೋಜಕ, ತಾಂತ್ರಿಕ ಸಂಯೋಜಕ, ಟಿಎಂಐಎಸ್ ಸಂಯೋಜಕ ಹಾಗೂ ವಿವಿಧ ಗ್ರಾಮ ಪಂಚಾಯಿತಿಗಳ ಸಿಬ್ಬಂದಿ ಉಪಸ್ಥಿತರಿದ್ದರು.



