ದೇವದುರ್ಗ: ಮೂರನೇ ಶನಿವಾರದ ಅಂಗವಾಗಿ ತಾಲೂಕು ಪಂಚಾಯತ್ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ರಾಜೇಂದ್ರ ಕುಮಾರ್ ಅವರ ನೇತೃತ್ವದಲ್ಲಿ ಶುಕ್ರವಾರ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಯಿತು.
ಅಭಿಯಾನದಲ್ಲಿ ತಾಲೂಕು ಪಂಚಾಯತ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಕ್ರಿಯವಾಗಿ ಪಾಲ್ಗೊಂಡು ಕಚೇರಿ ಆವರಣ ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಿದರು. ಆವರಣದಲ್ಲಿ ಸಂಗ್ರಹವಾಗಿದ್ದ ಕಸ ಹಾಗೂ ಅನಗತ್ಯ ವಸ್ತುಗಳನ್ನು ತೆರವುಗೊಳಿಸಿ, ಕಚೇರಿ ಪರಿಸರವನ್ನು ಸ್ವಚ್ಛವಾಗಿಡಲು ಕ್ರಮ ಕೈಗೊಂಡರು.
ಸರ್ಕಾರಿ ಕಚೇರಿಗಳಲ್ಲಿ ಸ್ವಚ್ಛತೆ ಕಾಪಾಡುವುದರ ಜೊತೆಗೆ ಸಾರ್ವಜನಿಕರಲ್ಲಿ ಸ್ವಚ್ಛ ಪರಿಸರದ ಮಹತ್ವದ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಈ ಅಭಿಯಾನ ಆಯೋಜಿಸಲಾಗಿತ್ತು. ಅಧಿಕಾರಿಗಳು ಹಾಗೂ ಸಿಬ್ಬಂದಿ ಒಗ್ಗೂಡಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಮೂಲಕ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಿದರು.
ಸ್ವಚ್ಛತೆ ಕೇವಲ ಒಂದು ದಿನದ ಕಾರ್ಯಕ್ರಮಕ್ಕೆ ಸೀಮಿತವಾಗದೆ ನಿತ್ಯದ ಅಭ್ಯಾಸವಾಗಬೇಕು. ಕಚೇರಿ ಆವರಣ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡುವುದರಿಂದ ಆರೋಗ್ಯಕರ ವಾತಾವರಣ ನಿರ್ಮಾಣ ಸಾಧ್ಯ. ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಜವಾಬ್ದಾರಿ ಹೊಂದಬೇಕು ಎಂಬ ಸಂದೇಶವನ್ನು ಅಭಿಯಾನದ ಮೂಲಕ ನೀಡಲಾಯಿತು.
ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಜೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ನಡೆದ ಸ್ವಚ್ಛತಾ ಕಾರ್ಯದಲ್ಲಿ ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.



