ಅರಕೇರಾ, ಅ.18: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸಿಗೆ ಧಕ್ಕೆ ತರುವ ಉದ್ದೇಶದಿಂದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸ್ಟಿಂಗ್ ಆಪರೇಷನ್ ವಿವಾದವನ್ನು ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಅಖಿಲ ಭಾರತ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯದರ್ಶಿ ಶ್ರೀದೇವಿ ರಾಜಶೇಖರ ನಾಯಕ ಆರೋಪಿಸಿದರು.
ಸಿದ್ದರಾಮಯ್ಯ ಅವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳಿಗೆ ಪ್ರತಿಕ್ರಿಯಿಸಿದ ಅವರು, ದಶಕಗಳಿಂದ ಸಾರ್ವಜನಿಕ ಜೀವನದಲ್ಲಿರುವ ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯ ಹಾಗೂ ಜನಪರ ಆಡಳಿತಕ್ಕೆ ಆದ್ಯತೆ ನೀಡುತ್ತಾ ಬಂದಿದ್ದಾರೆ. ಇಂತಹ ನಾಯಕರ ವಿರುದ್ಧ ಸತ್ಯಾಸತ್ಯತೆ ದೃಢಪಡದ ಆರೋಪಗಳನ್ನು ಮುಂದಿಟ್ಟು ರಾಜಕೀಯ ಲಾಭ ಪಡೆಯಲು ಯತ್ನಿಸುವುದು ಸರಿಯಲ್ಲ ಎಂದು ಹೇಳಿದರು.
ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದೆ ಎನ್ನಲಾದ ವಿಡಿಯೊದ ನೈಜತೆ ಇನ್ನೂ ಸ್ಪಷ್ಟವಾಗಿಲ್ಲ. ವಿಡಿಯೊದ ಮೂಲ, ಅದರ ಸತ್ಯಾಸತ್ಯತೆ ಹಾಗೂ ಪ್ರಸಾರದ ಹಿಂದಿರುವ ಉದ್ದೇಶದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಯಬೇಕು. ತನಿಖೆ ಪೂರ್ಣಗೊಳ್ಳುವ ಮುನ್ನವೇ ಆರೋಪಗಳನ್ನು ಸತ್ಯವೆಂಬಂತೆ ಬಿಂಬಿಸುವುದು ಸಮಂಜಸವಲ್ಲ. ಆರೋಪ ಮಾಡುವವರು ತಮ್ಮ ಹೇಳಿಕೆಗಳಿಗೆ ಪೂರಕವಾದ ಸಾಕ್ಷ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯದ ಜನತೆ ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಬೇಕಾದ ವಿರೋಧ ಪಕ್ಷಗಳು ಅನಗತ್ಯ ವಿವಾದಗಳಿಗೆ ಹೆಚ್ಚಿನ ಮಹತ್ವ ನೀಡುತ್ತಿವೆ. ರಾಜಕೀಯ ಭಿನ್ನಾಭಿಪ್ರಾಯಗಳ ನೆಪದಲ್ಲಿ ಹಿರಿಯ ನಾಯಕರ ಗೌರವಕ್ಕೆ ಧಕ್ಕೆ ತರುವ ಪ್ರಯತ್ನಗಳು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿವೆ ಎಂದು ಟೀಕಿಸಿದರು.
ಸಿದ್ದರಾಮಯ್ಯ ಅವರ ರಾಜಕೀಯ ಜೀವನ ಮತ್ತು ಸಾರ್ವಜನಿಕ ಸೇವೆಯನ್ನು ರಾಜ್ಯದ ಜನತೆ ಗಮನಿಸಿದ್ದಾರೆ. ಯಾವುದೇ ಆರೋಪ ಕೇಳಿಬಂದ ತಕ್ಷಣ ಅದನ್ನು ಸತ್ಯವೆಂದು ಪರಿಗಣಿಸಲು ಸಾಧ್ಯವಿಲ್ಲ. ಸತ್ಯಾಂಶ ಹೊರಬರುವವರೆಗೆ ಎಲ್ಲರೂ ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದರು.
ಕಾಂಗ್ರೆಸ್ ಪಕ್ಷದಲ್ಲಿ ಗೊಂದಲ ಸೃಷ್ಟಿಸುವ ಹಾಗೂ ನಾಯಕರ ನಡುವೆ ಭಿನ್ನಾಭಿಪ್ರಾಯವಿದೆ ಎಂಬ ಭಾವನೆ ಮೂಡಿಸುವ ರಾಜಕೀಯ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ. ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಒಗ್ಗಟ್ಟಿನಿಂದಿದ್ದು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಲು ಬದ್ಧರಾಗಿದ್ದಾರೆ ಎಂದು ಶ್ರೀದೇವಿ ರಾಜಶೇಖರ ನಾಯಕ ತಿಳಿಸಿದರು.



