ರಾಯಚೂರು: ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಉಸ್ತುವಾರಿ, ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಎ. ವಸಂತಕುಮಾರ ಅವರು ನಗರದ ವಿವಿಧ ಪದವಿ ಕಾಲೇಜುಗಳ ಉಪನ್ಯಾಸಕರು ಹಾಗೂ ಪ್ರೌಢಶಾಲಾ ಶಿಕ್ಷಕರನ್ನು ಭೇಟಿಯಾಗಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಪರ ಪ್ರಥಮ ಪ್ರಾಶಸ್ತ್ಯದ ಮತ ನೀಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಉಪನ್ಯಾಸಕರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರವು ಕಲ್ಯಾಣ ಕರ್ನಾಟಕ ಭಾಗದ ಪದವಿ ಕಾಲೇಜುಗಳ ಉಪನ್ಯಾಸಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಅವುಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುತ್ತಿದೆ. ವಿಶೇಷವಾಗಿ ಅತಿಥಿ ಉಪನ್ಯಾಸಕರ ನೇಮಕಾತಿ, ಗೌರವಧನ ಬಿಡುಗಡೆ ಹಾಗೂ ಖಾಸಗಿ ಕಾಲೇಜುಗಳ ಅನುಮತಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಬಗೆಹರಿಸಲಾಗುತ್ತಿದೆ ಎಂದು ತಿಳಿಸಿದರು.

ರಾಜ್ಯದ ಪದವಿ ಮಹಾವಿದ್ಯಾಲಯಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳನ್ನು ಪಾರದರ್ಶಕ ನೇಮಕಾತಿ ಪ್ರಕ್ರಿಯೆಯ ಮೂಲಕ ಭರ್ತಿ ಮಾಡಲು ಸರ್ಕಾರ ಕ್ರಮ ವಹಿಸುತ್ತಿದೆ. ಸಂವಿಧಾನದ 371(ಜೆ) ವಿಧಿಯಡಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ನೇಮಕಾತಿಗೂ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಶಿಕ್ಷಕರ ಹಕ್ಕುಗಳ ರಕ್ಷಣೆ, ವೃತ್ತಿಪರ ಗೌರವ ಹಾಗೂ ಶೈಕ್ಷಣಿಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಶಿಕ್ಷಕರು ಮತ್ತು ಉಪನ್ಯಾಸಕರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ವಿವರಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರು ಈ ಹಿಂದೆ ಒಂದು ಅವಧಿಗೆ ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದು, ಶಿಕ್ಷಕರ ಸಮಸ್ಯೆಗಳನ್ನು ಸದನದಲ್ಲಿ ಪ್ರಸ್ತಾಪಿಸಿ ಪರಿಹಾರಕ್ಕೆ ಪ್ರಯತ್ನಿಸಿದ್ದಾರೆ. ಅವರ ಅನುಭವ ಮತ್ತು ಸೇವೆಯನ್ನು ಪರಿಗಣಿಸಿ ಚುನಾವಣೆಯಲ್ಲಿ ಬೆಂಬಲ ನೀಡುವಂತೆ ವಸಂತಕುಮಾರ ಮನವಿ ಮಾಡಿದರು.

ಈ ಸಂದರ್ಭದಲ್ಲಿ ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅಬ್ದುಲ್ ಕರೀಂ, ಮಹಾನಗರ ಪಾಲಿಕೆ ಮಾಜಿ ಸದಸ್ಯ ಬಸವರಾಜ ದರೂರು, ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ನಾಯಕ, ಕೆಪಿಸಿಸಿ ವಕ್ತಾರ ಡಾ. ರಝಾಕ್ ಉಸ್ತಾದ್, ಜೆ. ಸತ್ಯನಾಥ, ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ ಸದಸ್ಯ ರಮೇಶ ರೋಸ್ಲಿ, ಬೆಂಜಮಿನ್ ಥಾಮಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು.