ಲಿಂಗಸುಗೂರು: ತಾಲೂಕಿನ ಈಚನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಸರಟ್ಟಿ ಗ್ರಾಮದ ಡಿಜಿಟಲ್ ಗ್ರಾಮ ಗ್ರಂಥಾಲಯದ ಮೇಲ್ವಿಚಾರಕರ ಆಯ್ಕೆ ಪ್ರಕ್ರಿಯೆಯಲ್ಲಿ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ, ಆಯ್ಕೆಯನ್ನು ರದ್ದುಗೊಳಿಸಿ ಮರು ಆಯ್ಕೆ ನಡೆಸುವಂತೆ ಜಾಂಭವ ಯುವ ಸೇನೆಯ ತಾಲೂಕು ಅಧ್ಯಕ್ಷ ಶಶಿಕುಮಾರ ಕೆಸರಹಟ್ಟಿ ನೇತೃತ್ವದಲ್ಲಿ ಕಾರ್ಯಕರ್ತರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಡಿಜಿಟಲ್ ಗ್ರಾಮ ಗ್ರಂಥಾಲಯದ ಮೇಲ್ವಿಚಾರಕರ ಹುದ್ದೆಗೆ ಆಯಾ ಗ್ರಾಮದ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ (ಜಿಪಿಎಲ್ಎಫ್) ಅರ್ಹ ಮಹಿಳಾ ಸದಸ್ಯರನ್ನು ಆಯ್ಕೆ ಮಾಡಬೇಕಾಗಿದೆ. ಆದರೆ ಕೆಸರಟ್ಟಿ ಗ್ರಾಮದಲ್ಲಿ ಸ್ಥಳೀಯ ಗ್ರಾಮಸ್ಥರು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸಂಜೀವಿನಿ ಒಕ್ಕೂಟದ ಸದಸ್ಯರಿಗೆ ಮಾಹಿತಿ ನೀಡದೆ ಬೇರೆ ಗ್ರಾಮದ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗಿದೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.
ಗ್ರಂಥಾಲಯ ಮೇಲ್ವಿಚಾರಕರ ಆಯ್ಕೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳದೆ, ಸ್ಥಳೀಯ ಅರ್ಹ ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ನಿರಾಕರಿಸಲಾಗಿದೆ. ಇದರಿಂದ ಗ್ರಾಮದ ಅರ್ಹ ಅಭ್ಯರ್ಥಿಗಳಿಗೆ ಅನ್ಯಾಯವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಆಯ್ಕೆ ಪ್ರಕ್ರಿಯೆಯ ದಾಖಲೆಗಳನ್ನು ಪರಿಶೀಲಿಸಿ ನಿಯಮ ಉಲ್ಲಂಘನೆಯಾಗಿದೆಯೇ ಎಂಬುದನ್ನು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಸ್ಥಳೀಯ ಅರ್ಹ ಮಹಿಳಾ ಅಭ್ಯರ್ಥಿಗಳಿಗೆ ಆದ್ಯತೆ ನೀಡಬೇಕು. ನಿಯಮಬಾಹಿರ ಆಯ್ಕೆ ನಡೆದಿರುವುದು ದೃಢಪಟ್ಟಲ್ಲಿ ಅದನ್ನು ರದ್ದುಗೊಳಿಸಿ, ಎಲ್ಲ ಅರ್ಹ ಅಭ್ಯರ್ಥಿಗಳಿಗೆ ಸಮಾನ ಅವಕಾಶ ಕಲ್ಪಿಸುವ ರೀತಿಯಲ್ಲಿ ಪಾರದರ್ಶಕವಾಗಿ ಮರು ಆಯ್ಕೆ ಪ್ರಕ್ರಿಯೆ ನಡೆಸಬೇಕು ಎಂದು ಆಗ್ರಹಿಸಿದರು.
ಮನವಿಗೆ ಸಂಬಂಧಿಸಿದಂತೆ ಅಧಿಕಾರಿಗಳು ತಕ್ಷಣ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ತಾಲೂಕು ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಜಾಂಭವ ಯುವ ಸೇನೆಯ ಪದಾಧಿಕಾರಿಗಳು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಸುರೇಶ ಕೆಸರಹಟ್ಟಿ, ಹನುಮಂತ ಕಾಳಾಪುರ, ಹನುಮಪ್ಪ, ನಾಗಪ್ಪ ಸೇರಿದಂತೆ ಸಂಘಟನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.



