ಲಿಂಗಸುಗೂರು: ದ್ವೈತ ಸಿದ್ಧಾಂತದ ಪ್ರತಿಪಾದಕರಾದ ಜಗದ್ಗುರು ಶ್ರೀ ಮಧ್ವಾಚಾರ್ಯರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲು ಅನುಮೋದನೆ ನೀಡಿರುವುದಕ್ಕೆ ಲಿಂಗಸುಗೂರು ತಾಲೂಕು ಬ್ರಾಹ್ಮಣ ಸಮಾಜ ಹರ್ಷ ವ್ಯಕ್ತಪಡಿಸಿದ್ದು, ಅಕ್ಟೋಬರ್ 21ರಂದು ಬೆಳಿಗ್ಗೆ 10 ಗಂಟೆಗೆ ತಹಶೀಲ್ದಾರ್ ಕಚೇರಿಯಲ್ಲಿ ನಡೆಯಲಿರುವ ಜಯಂತಿ ಕಾರ್ಯಕ್ರಮದಲ್ಲಿ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ತಾಲೂಕು ಬ್ರಾಹ್ಮಣ ಸಮಾಜದ ಅಧ್ಯಕ್ಷ ಅಶೋಕ ದಿಗ್ಗಾವಿ ಮನವಿ ಮಾಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಭಾರತೀಯ ತತ್ತ್ವಜ್ಞಾನ ಹಾಗೂ ಆಧ್ಯಾತ್ಮಿಕ ಪರಂಪರೆಗೆ ಶ್ರೀ ಮಧ್ವಾಚಾರ್ಯರು ಅಪಾರ ಕೊಡುಗೆ ನೀಡಿದ್ದಾರೆ. ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸುವ ಮೂಲಕ ಭಕ್ತಿ, ಜ್ಞಾನ ಮತ್ತು ತತ್ತ್ವಚಿಂತನೆಯ ಮಹತ್ವವನ್ನು ಸಾರಿದ್ದಾರೆ. ಸರ್ವಮೂಲ ಗ್ರಂಥಗಳು ಸೇರಿದಂತೆ ಅನೇಕ ಕೃತಿಗಳನ್ನು ರಚಿಸಿ ಭಾರತೀಯ ಆಧ್ಯಾತ್ಮಿಕ ಚಿಂತನೆಗೆ ಹೊಸ ಆಯಾಮ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಉಡುಪಿಯಲ್ಲಿ ಶ್ರೀಕೃಷ್ಣನನ್ನು ಪ್ರತಿಷ್ಠಾಪಿಸುವ ಮೂಲಕ ಧಾರ್ಮಿಕ ಪರಂಪರೆಯಲ್ಲಿ ಮಹತ್ವದ ಸ್ಥಾನ ಪಡೆದಿರುವ ಮಧ್ವಾಚಾರ್ಯರು ನಾಡಿನ ಹೆಮ್ಮೆಯಾಗಿದ್ದಾರೆ. ಹನುಮಂತ, ಭೀಮಸೇನ ಹಾಗೂ ಮಧ್ವಾಚಾರ್ಯರನ್ನು ವಾಯುದೇವರ ಮೂರು ಅವತಾರಗಳೆಂದು ಮಧ್ವ ಸಂಪ್ರದಾಯದಲ್ಲಿ ನಂಬಲಾಗುತ್ತದೆ ಎಂದು ವಿವರಿಸಿದ್ದಾರೆ.

ಶ್ರೀ ಮಧ್ವಾಚಾರ್ಯರ ಜಯಂತಿಯನ್ನು ಸರ್ಕಾರಿ ಮಟ್ಟದಲ್ಲಿ ಆಚರಿಸಲು ಅನುಮೋದನೆ ನೀಡಿರುವುದು ಅವರ ತತ್ತ್ವಾದರ್ಶಗಳಿಗೆ ಸಂದ ಗೌರವವಾಗಿದೆ. ಇದರಿಂದ ಮುಂದಿನ ಪೀಳಿಗೆಗೆ ಅವರ ಜೀವನ, ಸಾಧನೆ ಹಾಗೂ ದ್ವೈತ ಸಿದ್ಧಾಂತದ ಮಹತ್ವವನ್ನು ಪರಿಚಯಿಸಲು ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸರ್ಕಾರದ ಈ ನಿರ್ಧಾರ ಸ್ವಾಗತಾರ್ಹವಾಗಿದೆ. ಶ್ರೀ ಮಧ್ವಾಚಾರ್ಯರ ಜಯಂತಿ ಆಚರಣೆಗೆ ಅನುಮೋದನೆ ನೀಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ತಾಲೂಕು ಬ್ರಾಹ್ಮಣ ಸಮಾಜದ ವತಿಯಿಂದ ಅಭಿನಂದನೆ ಸಲ್ಲಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲ್ಲದೆ, ಸರ್ಕಾರದ ಆದೇಶದಂತೆ ಎಲ್ಲ ಸರ್ಕಾರಿ ಇಲಾಖೆಗಳಲ್ಲಿಯೂ ಶ್ರೀ ಜಗದ್ಗುರು ಮಧ್ವಾಚಾರ್ಯರ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಬ್ರಾಹ್ಮಣ ಸಮಾಜದ ಅಧ್ಯಕ್ಷ ಅಶೋಕ ದಿಗ್ಗಾವಿ ಒತ್ತಾಯಿಸಿದ್ದಾರೆ.