ಮಾನ್ವಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಬೌದ್ಧ ಧರ್ಮ ಸ್ವೀಕರಿಸಿದ ಐತಿಹಾಸಿಕ ದೀಕ್ಷಾಭೂಮಿಯ ಮಹತ್ವವನ್ನು ಜನಸಾಮಾನ್ಯರಿಗೆ ಪರಿಚಯಿಸುವುದರ ಜೊತೆಗೆ ಅವರ ಸಮಾನತೆ, ಸ್ವಾತಂತ್ರ್ಯ, ಸಹೋದರತೆ ಹಾಗೂ ಸಾಮಾಜಿಕ ನ್ಯಾಯದ ಆಶಯಗಳನ್ನು ಸಮಾಜದ ಪ್ರತಿಯೊಬ್ಬರಿಗೂ ತಲುಪಿಸುವ ಉದ್ದೇಶದಿಂದ ದೀಕ್ಷಾಭೂಮಿ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಸಹಾಯಕ ನಿರ್ದೇಶಕಿ ಸಾಹಿರಬಾನು ನದಾಫ್ ತಿಳಿಸಿದರು.

ಪಟ್ಟಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ದೀಕ್ಷಾಭೂಮಿ ಯಾತ್ರೆಯ ಬಸ್‌ಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಮಾಜದಲ್ಲಿನ ಅಸಮಾನತೆ, ಅಸ್ಪೃಶ್ಯತೆ ಹಾಗೂ ಜಾತಿ ತಾರತಮ್ಯದ ವಿರುದ್ಧ ಜೀವನಪೂರ್ತಿ ಹೋರಾಟ ನಡೆಸಿದರು. ಪ್ರತಿಯೊಬ್ಬ ವ್ಯಕ್ತಿಗೂ ಸಮಾನ ಹಕ್ಕು ಮತ್ತು ಗೌರವಯುತ ಬದುಕು ದೊರೆಯಬೇಕೆಂಬುದು ಅವರ ಆಶಯವಾಗಿತ್ತು. ಅವರ ಜೀವನ, ಹೋರಾಟ ಮತ್ತು ಸಾಮಾಜಿಕ ಪರಿವರ್ತನೆಯ ಸಂದೇಶವನ್ನು ಜನರಿಗೆ ತಲುಪಿಸುವಲ್ಲಿ ಇಂತಹ ಯಾತ್ರೆಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು.

ಪ್ರಗತಿಪರ ಸಂಘಟನೆಯ ಮುಖಂಡ ಕಾಶಿನಾಥ ಕುರ್ಡಿ ಮಾತನಾಡಿ, ಅಂಬೇಡ್ಕರ್ ಅವರ ವಿಚಾರಧಾರೆಗಳು ಹಾಗೂ ಸಂವಿಧಾನದ ಆಶಯಗಳ ಕುರಿತು ಜನರಲ್ಲಿ ಅರಿವು ಮೂಡಿಸುವ ಅಗತ್ಯವಿದೆ. ದೀಕ್ಷಾಭೂಮಿ ಕೇವಲ ಐತಿಹಾಸಿಕ ಸ್ಥಳವಲ್ಲ, ಸಾಮಾಜಿಕ ಸಮಾನತೆ ಮತ್ತು ಮಾನವೀಯ ಮೌಲ್ಯಗಳ ಸಂಕೇತವಾಗಿದೆ. ಅಂಬೇಡ್ಕರ್ ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಜಾತಿ, ಧರ್ಮ ಹಾಗೂ ವರ್ಗಭೇದವಿಲ್ಲದ ಸಮಾನತೆಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ರಾಮಲಿಂಗಪ್ಪ, ತಾಲೂಕಿನ ವಿವಿಧ ಸಂಘಟನೆಗಳ ಪದಾಧಿಕಾರಿಗಳಾದ ಅಂಬರೀಶ್ ನಂದಿಹಾಳ, ತಾಯಣ್ಣ ಕಪಗಲ್, ನರಸಿಂಲು ಸೀಕಲ್, ಹುಸೇನಪ್ಪ ನಂದಿಹಾಳ, ಬಸವರಾಜ್ ಬಾಗಲವಾಡ, ಲಿಂಗರಾಜ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.