ದೇವದುರ್ಗ: ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಜತೆಗೆ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಗಟ್ಟಲು ಪೊಲೀಸ್ ಇಲಾಖೆಯೊಂದಿಗೆ ಎಲ್ಲ ಸಮುದಾಯಗಳ ಮುಖಂಡರು ಸಹಕರಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ನೂತನ ಡಿವೈಎಸ್ಪಿ ಸುಲೇಮಾನ ಎಂ. ತಹಶೀಲ್ದಾರ್ ಹೇಳಿದರು.

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಭಾನುವಾರ ತಮ್ಮ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸಮುದಾಯದ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.

ತಾಲೂಕಿನಲ್ಲಿ ನಡೆಯುತ್ತಿರುವ ವಿವಿಧ ಸಮಸ್ಯೆಗಳು, ಅಕ್ರಮ ಚಟುವಟಿಕೆಗಳು ಹಾಗೂ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಸಮಾಜದಲ್ಲಿ ಶಾಂತಿಯುತ ವಾತಾವರಣ ನಿರ್ಮಾಣವಾಗಬೇಕಾದರೆ ಪೊಲೀಸ್ ಇಲಾಖೆ ಮಾತ್ರವಲ್ಲದೆ ಸಾರ್ವಜನಿಕರು ಹಾಗೂ ಸಮುದಾಯದ ಮುಖಂಡರು ಸಹ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ತಾಲೂಕಿನ ಯಾವುದೇ ಭಾಗದಲ್ಲಿ ಅಕ್ರಮ ಅಥವಾ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿರುವುದು ಗಮನಕ್ಕೆ ಬಂದರೆ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು. ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲು ಸಾರ್ವಜನಿಕರಿಂದ ದೊರೆಯುವ ಮಾಹಿತಿ ಅತ್ಯಂತ ಮಹತ್ವದ್ದಾಗಿದೆ. ಸಮಾಜದ ಮುಖಂಡರು ತಮ್ಮ ಸಮುದಾಯಗಳಲ್ಲಿ ಕಾನೂನು ಅರಿವು ಮೂಡಿಸುವ ಮೂಲಕ ಶಾಂತಿ ಮತ್ತು ಸೌಹಾರ್ದತೆ ಕಾಪಾಡಲು ಮುಂದಾಗಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಮಾತನಾಡಿದ ರವಿಪ್ರಕಾಶ್, ಸಮಾಜದಲ್ಲಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪೊಲೀಸ್ ಇಲಾಖೆ ಮತ್ತು ಸಮುದಾಯದ ಮುಖಂಡರ ನಡುವೆ ಉತ್ತಮ ಸಮನ್ವಯ ಅಗತ್ಯವಾಗಿದೆ. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಪರಸ್ಪರ ಸಹಕಾರ ಮುಖ್ಯ ಎಂದು ಅಭಿಪ್ರಾಯಪಟ್ಟರು.

ಮುಖಂಡ ಹನುಮಂತ ಮನ್ನಾಪುರಿ ಮಾತನಾಡಿ, ಕೆಲವು ಘಟನೆಗಳಲ್ಲಿ ಪೊಲೀಸ್ ಇಲಾಖೆ ನಿರ್ಲಕ್ಷ್ಯ ವಹಿಸುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇಂತಹ ಘಟನೆಗಳು ಮರುಕಳಿಸದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಸಾರ್ವಜನಿಕರಿಂದ ಬರುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸಭೆಯಲ್ಲಿ ಸಮುದಾಯದ ಮುಖಂಡರು ತಾಲೂಕಿನ ವಿವಿಧ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು. ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕರ ನಡುವೆ ಉತ್ತಮ ಬಾಂಧವ್ಯ ಬೆಳೆಸುವ ಅಗತ್ಯದ ಕುರಿತು ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಪಿಎಸ್ಐ ರಾಮನಾಥರೆಡ್ಡಿ, ಸಿಪಿಐ ಪುಂಡಲೀಕ ಪತ್ತಾರ, ಪೊಲೀಸ್ ಸಿಬ್ಬಂದಿ ಹಾಗೂ ಎಸ್ಸಿ, ಎಸ್ಟಿ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.