ರಾಯಚೂರು: ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಹಾಗೂ ವಿಧಾನ ಪರಿಷತ್ ಸದಸ್ಯ ಎ. ವಸಂತಕುಮಾರ ಅವರು ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಿ, ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಪರ ಮತಯಾಚನೆ ನಡೆಸಿದರು.
ಸಂಸ್ಥೆಯ ಶಿಕ್ಷಕ ಮತದಾರರನ್ನು ಭೇಟಿಯಾಗಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡುವಂತೆ ಮನವಿ ಮಾಡಿದರು.
ಶರಣಪ್ಪ ಮಟ್ಟೂರು ಅವರು ಶಿಕ್ಷಕರ ಸಮಸ್ಯೆಗಳ ಪರಿಹಾರ ಹಾಗೂ ಅವರ ಹಕ್ಕುಗಳ ರಕ್ಷಣೆಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಶಿಕ್ಷಕರು ಮತ್ತು ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಅವರಿಗೆ ಸಮಗ್ರ ಅರಿವಿದ್ದು, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಿದ್ದಾರೆ ಎಂದು ವಸಂತಕುಮಾರ ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರವು ಕಲ್ಯಾಣ ಕರ್ನಾಟಕ ಭಾಗದ ಶಿಕ್ಷಣ ಸಂಸ್ಥೆಗಳು ಹಾಗೂ ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡುತ್ತಿದೆ. ಈ ಭಾಗದಲ್ಲಿ ಖಾಲಿ ಇರುವ ಸುಮಾರು 7 ಸಾವಿರ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಲ್ಲದೆ, ಸಂವಿಧಾನದ 371(ಜೆ) ವಿಧಿಯಡಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 32 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಅವರು ತಿಳಿಸಿದರು.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯು ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗಾಗಿ 'ಅಕ್ಷರ ಆವಿಷ್ಕಾರ' ಯೋಜನೆಯಡಿ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಈ ಭಾಗದ ಶೈಕ್ಷಣಿಕ ಪ್ರಗತಿಗೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ವಕ್ತಾರ ಡಾ. ರಝಾಕ್ ಉಸ್ತಾದ್, ಮಹಾನಗರ ಪಾಲಿಕೆ ಮಾಜಿ ಸದಸ್ಯ ಬಸವರಾಜ ದರೂರು, ರಾಮಕೃಷ್ಣ ನಾಯಕ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆ. ಅಸ್ಲಂ ಪಾಶಾ, ಜೆ. ಸತ್ಯನಾಥ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.



