ರಾಯಚೂರು: ನಗರದ ಎನ್‌ಜಿಒ ಕಾಲೋನಿಯ ಶ್ರೀ ಜಮಲಮ್ಮ ದೇವಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ದೇವಸ್ಥಾನದ ಸೇವಾ ಸಮಿತಿ ವತಿಯಿಂದ ಜಾತ್ರಾ ಮಹೋತ್ಸವ ಹಾಗೂ ನೂತನ ರಥೋತ್ಸವವನ್ನು ಭಕ್ತಿ, ಶ್ರದ್ಧೆಯಿಂದ ವಿಜೃಂಭಣೆಯಿಂದ ಆಚರಿಸಲಾಯಿತು.

ದೇವಸ್ಥಾನದಲ್ಲಿ ನೂತನವಾಗಿ ನಿರ್ಮಿಸಲಾದ ರಥೋತ್ಸವಕ್ಕೆ ರಾಯಚೂರು ನಗರ ಶಾಸಕ ಡಾ. ಎಸ್. ಶಿವರಾಜ ಪಾಟೀಲ್ ಅವರು ಕಾಯಿ, ಕರ್ಪೂರ ಸಮರ್ಪಿಸಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಮಲಮ್ಮ ದೇವಿಯ ದರ್ಶನ ಪಡೆದು ಆಶೀರ್ವಾದ ಪಡೆದರು.

ರಥೋತ್ಸವದ ವಿಶೇಷ ಆಕರ್ಷಣೆಯಾಗಿ ನೂರಾರು ಮಹಿಳೆಯರು ಶ್ರದ್ಧಾಭಕ್ತಿಯಿಂದ ಜಮಲಮ್ಮ ದೇವಿಯ ರಥವನ್ನು ಎಳೆಯುವ ಮೂಲಕ ತಮ್ಮ ಭಕ್ತಿಸೇವೆ ಸಲ್ಲಿಸಿದರು. ದೇವಿಯ ಜಯಘೋಷಗಳ ನಡುವೆ ನಡೆದ ರಥೋತ್ಸವವು ಬಡಾವಣೆಯಲ್ಲಿ ಹಬ್ಬದ ವಾತಾವರಣ ನಿರ್ಮಿಸಿತು.

ಶರನ್ನವರಾತ್ರಿಯ ಅಂಗವಾಗಿ ಆಯೋಜಿಸಿದ್ದ ಜಾತ್ರಾ ಮಹೋತ್ಸವದಲ್ಲಿ ಬಡಾವಣೆಯ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವಿಗೆ ಪೂಜೆ ಸಲ್ಲಿಸಿದರು. ಮಹಿಳೆಯರು, ಮಕ್ಕಳು ಹಾಗೂ ಹಿರಿಯರು ಉತ್ಸಾಹದಿಂದ ಭಾಗವಹಿಸಿ ಧಾರ್ಮಿಕ ಕಾರ್ಯಕ್ರಮಕ್ಕೆ ಮೆರುಗು ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ನಾಗರಾಜ, ಶಶಿರಾಜ, ಕಡಗೋಲ ಆಂಜನೇಯ್ಯ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರು, ದೇವಸ್ಥಾನ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ, ಖಜಾಂಚಿ, ಸೇವಾ ಸಮಿತಿಯ ಪದಾಧಿಕಾರಿಗಳು ಹಾಗೂ ಬಡಾವಣೆಯ ನೂರಾರು ಭಕ್ತರು ಉಪಸ್ಥಿತರಿದ್ದರು.