ರಾಯಚೂರು: ಧಾರ್ಮಿಕ ಕಾರ್ಯಕ್ರಮಗಳು ಜನರಲ್ಲಿ ಭಕ್ತಿಭಾವ ಮೂಡಿಸುವುದರ ಜೊತೆಗೆ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಪರಸ್ಪರ ಪ್ರೀತಿ, ವಿಶ್ವಾಸವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಅಭಿಪ್ರಾಯಪಟ್ಟರು.
ನಗರದಲ್ಲಿ ಶರನ್ನವರಾತ್ರಿ ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಮಾತಾ ಶ್ರೀದೇವಿ ಪುರಾಣ ಪ್ರವಚನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಧಾರ್ಮಿಕ ಆಚರಣೆಗಳು ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಪ್ರತೀಕವಾಗಿವೆ. ಇಂತಹ ಕಾರ್ಯಕ್ರಮಗಳು ಜನರನ್ನು ಒಗ್ಗೂಡಿಸುವುದರೊಂದಿಗೆ ಸಮಾಜದಲ್ಲಿ ಸಾಮರಸ್ಯ ಮತ್ತು ಸಹಬಾಳ್ವೆಯ ಸಂದೇಶವನ್ನು ಸಾರುತ್ತವೆ ಎಂದರು.
ಹಬ್ಬಗಳು ಕೇವಲ ಧಾರ್ಮಿಕ ಆಚರಣೆಗಳಿಗೆ ಸೀಮಿತವಾಗದೆ ಜನರಲ್ಲಿ ಮಾನವೀಯ ಮೌಲ್ಯಗಳು, ಸಹೋದರತ್ವ ಹಾಗೂ ಪರಸ್ಪರ ಗೌರವವನ್ನು ಬೆಳೆಸುವಂತಾಗಬೇಕು. ಹಿರಿಯರು ಉಳಿಸಿಕೊಂಡು ಬಂದಿರುವ ಸಾಂಸ್ಕೃತಿಕ ಮತ್ತು ಧಾರ್ಮಿಕ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಶ್ರೀ ಈಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಬೋಸರಾಜು ಅವರು ವಿಶೇಷ ಪೂಜೆ ಸಲ್ಲಿಸಿ, ನಾಡಿನ ಸಮಸ್ತ ಜನತೆಗೆ ಒಳಿತಾಗಲಿ, ಎಲ್ಲರ ಬದುಕಿನಲ್ಲಿ ಸುಖ, ಶಾಂತಿ ಹಾಗೂ ಸಮೃದ್ಧಿ ನೆಲೆಸಲಿ ಎಂದು ಪ್ರಾರ್ಥಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಶಾಂತಪ್ಪ, ಮುಖಂಡರಾದ ಚಂದ್ರಶೇಖರ್ ಮಿರ್ಜಾಪುರ, ರುದ್ರಪ್ಪ ಅಂಗಡಿ, ಜಯವಂತರಾವ್ ಪತಂಗೆ ಸೇರಿದಂತೆ ಅನೇಕ ಗಣ್ಯರು ಹಾಗೂ ಭಕ್ತರು ಉಪಸ್ಥಿತರಿದ್ದರು.



