ರಾಯಚೂರು, ಅ.21: ದೇಶದ ಆಂತರಿಕ ಭದ್ರತೆ, ಸಾರ್ವಜನಿಕರ ರಕ್ಷಣೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಂದರ್ಭದಲ್ಲಿ ಪ್ರಾಣತ್ಯಾಗ ಮಾಡಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ತ್ಯಾಗ, ಬಲಿದಾನವನ್ನು ಸ್ಮರಿಸುವ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಬುಧವಾರ ನಗರದ ಜಿಲ್ಲಾ ಪೊಲೀಸ್ ಆವರಣದಲ್ಲಿರುವ ಹುತಾತ್ಮರ ಸ್ಮಾರಕದ ಬಳಿ ಶ್ರದ್ಧಾ ಗೌರವಗಳೊಂದಿಗೆ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪೂವಿತಾ ಎಸ್. ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಅವರು ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛವಿರಿಸಿ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಹುತಾತ್ಮರ ಸ್ಮರಣೆಯಲ್ಲಿ ಮೌನಾಚರಣೆ ನಡೆಸಿದರು.

ಜಿಲ್ಲಾ ಪೊಲೀಸ್ ಬ್ಯಾಂಡ್ ತಂಡದಿಂದ ಶೋಕಗೀತೆ ನುಡಿಸಲಾಯಿತು. ಬಳಿಕ ಸಶಸ್ತ್ರ ಪೊಲೀಸ್ ಪಡೆಯಿಂದ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಹುತಾತ್ಮರಿಗೆ ಗೌರವ ಸಲ್ಲಿಸಲಾಯಿತು. ಪೊಲೀಸ್ ಧ್ವಜವನ್ನು ಅರ್ಧಮಟ್ಟಕ್ಕೆ ಇಳಿಸಿ, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಅಧಿಕಾರಿಗಳು ಹಾಗೂ ಸಿಬ್ಬಂದಿ ಎರಡು ನಿಮಿಷ ಮೌನಾಚರಣೆ ನಡೆಸಿ ಅಗಲಿದ ವೀರಯೋಧರ ಆತ್ಮಕ್ಕೆ ಶಾಂತಿ ಕೋರಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಅವರು, ಪೊಲೀಸ್ ಹುತಾತ್ಮರ ದಿನಾಚರಣೆಯ ಐತಿಹಾಸಿಕ ಹಿನ್ನೆಲೆ ಹಾಗೂ ಅದರ ಮಹತ್ವವನ್ನು ವಿವರಿಸಿದರು.

1959ರ ಅಕ್ಟೋಬರ್ 21ರಂದು ಲಡಾಖ್‌ನ ಹಾಟ್ ಸ್ಪ್ರಿಂಗ್ಸ್ ಪ್ರದೇಶದಲ್ಲಿ ಭಾರತದ ಗಡಿಭದ್ರತಾ ಕರ್ತವ್ಯದಲ್ಲಿ ತೊಡಗಿದ್ದ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಹಾಗೂ ಪೊಲೀಸ್ ಸಿಬ್ಬಂದಿಯ ಸಣ್ಣ ತಂಡದ ಮೇಲೆ ಚೀನಾ ಸೇನೆ ದಾಳಿ ನಡೆಸಿತ್ತು. ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಚೀನಾ ಸೈನಿಕರ ವಿರುದ್ಧ ಸೀಮಿತ ಶಸ್ತ್ರಾಸ್ತ್ರಗಳೊಂದಿಗೆ ಭಾರತೀಯ ಸಿಬ್ಬಂದಿ ಧೈರ್ಯದಿಂದ ಹೋರಾಡಿದ್ದರು. ಈ ಘಟನೆಯಲ್ಲಿ 10 ಮಂದಿ ವೀರಮರಣವನ್ನಪ್ಪಿದ್ದು, ಏಳು ಮಂದಿಯನ್ನು ಚೀನಾ ಸೇನೆ ಬಂಧಿಸಿತ್ತು. ಅವರ ತ್ಯಾಗದ ಸ್ಮರಣಾರ್ಥ ಪ್ರತಿವರ್ಷ ಅಕ್ಟೋಬರ್ 21ರಂದು ದೇಶಾದ್ಯಂತ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ದೇಶದ ವಿವಿಧ ರಾಜ್ಯಗಳು ಹಾಗೂ ಕೇಂದ್ರ ಪೊಲೀಸ್ ಪಡೆಗಳಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ಕರ್ತವ್ಯ ನಿರ್ವಹಿಸುವಾಗ ಒಟ್ಟು 154 ಮಂದಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಪ್ರಾಣತ್ಯಾಗ ಮಾಡಿದ್ದಾರೆ. ಅವರ ಸೇವೆ ಹಾಗೂ ಬಲಿದಾನವನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ದೇಶದ ವಿವಿಧ ಭಾಗಗಳಲ್ಲಿ ಕರ್ತವ್ಯದ ವೇಳೆ ಹುತಾತ್ಮರಾದ 154 ಮಂದಿ ಪೊಲೀಸ್ ಸಿಬ್ಬಂದಿಯ ಹೆಸರುಗಳನ್ನು ಓದಿ ಗೌರವ ಸಲ್ಲಿಸಲಾಯಿತು. ದೇಶದ ಸ್ವಾತಂತ್ರ್ಯಾನಂತರ ಇದುವರೆಗೆ 36,852 ಮಂದಿ ಪೊಲೀಸ್ ಸಿಬ್ಬಂದಿ ಕರ್ತವ್ಯದ ವೇಳೆ ಪ್ರಾಣತ್ಯಾಗ ಮಾಡಿದ್ದಾರೆ ಎಂಬ ಮಾಹಿತಿ ರಾಷ್ಟ್ರೀಯ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿಯೂ ಪ್ರಕಟವಾಗಿದೆ.

ನಂತರ ಮಾತನಾಡಿದ ಜಿಲ್ಲಾಧಿಕಾರಿ ಪೂವಿತಾ ಎಸ್. ಅವರು, ದೇಶದ ಆಂತರಿಕ ಭದ್ರತೆ ಮತ್ತು ಸಾರ್ವಜನಿಕರ ಸುರಕ್ಷತೆ ಕಾಪಾಡುವಲ್ಲಿ ಪೊಲೀಸ್ ಇಲಾಖೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಸಮಾಜದಲ್ಲಿ ಶಾಂತಿ, ನೆಮ್ಮದಿ ಹಾಗೂ ಕಾನೂನು ಸುವ್ಯವಸ್ಥೆ ನೆಲೆಸಲು ಪೊಲೀಸರು ನಿರಂತರವಾಗಿ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.

ಸಾಮಾನ್ಯ ಜನರು ಹಬ್ಬ, ಹರಿದಿನ ಹಾಗೂ ವಿಶೇಷ ಸಂದರ್ಭಗಳಲ್ಲಿ ತಮ್ಮ ಕುಟುಂಬದೊಂದಿಗೆ ಸಂತೋಷದಿಂದ ಕಾಲ ಕಳೆಯುತ್ತಿದ್ದರೆ, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಸಾರ್ವಜನಿಕರ ಸುರಕ್ಷತೆಗಾಗಿ ತಮ್ಮ ವೈಯಕ್ತಿಕ ಬದುಕಿನ ಅನೇಕ ಸಂತೋಷಗಳನ್ನು ತ್ಯಾಗ ಮಾಡಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹಬ್ಬದ ದಿನಗಳಲ್ಲಿಯೂ ರಜೆ ಪಡೆಯದೆ ಜನರ ರಕ್ಷಣೆಗಾಗಿ ಹಗಲಿರುಳು ದುಡಿಯುವ ಪೊಲೀಸರ ಸೇವೆಯನ್ನು ಸಮಾಜ ಸದಾ ಗೌರವದಿಂದ ಸ್ಮರಿಸಬೇಕು ಎಂದು ತಿಳಿಸಿದರು.

ಪೊಲೀಸರು ಕೇವಲ ಕಾನೂನು ಜಾರಿಗೊಳಿಸುವ ಸಿಬ್ಬಂದಿಯಲ್ಲ, ಸಂಕಷ್ಟದ ಸಂದರ್ಭಗಳಲ್ಲಿ ಸಾರ್ವಜನಿಕರ ನೆರವಿಗೆ ಧಾವಿಸುವ ರಕ್ಷಕರು. ಅಪರಾಧ ತಡೆಗಟ್ಟುವುದು, ಶಾಂತಿ ಸುವ್ಯವಸ್ಥೆ ಕಾಪಾಡುವುದು, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭದ್ರತೆ ಒದಗಿಸುವುದು ಹಾಗೂ ತುರ್ತು ಪರಿಸ್ಥಿತಿಗಳಲ್ಲಿ ಜನರ ಜೀವ ರಕ್ಷಿಸುವುದು ಸೇರಿದಂತೆ ಅನೇಕ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದಾರೆ. ಇಂತಹ ಸೇವೆಯ ಸಂದರ್ಭದಲ್ಲಿ ಪ್ರಾಣತ್ಯಾಗ ಮಾಡಿದವರ ಬಲಿದಾನ ಎಂದಿಗೂ ಮರೆಯಲಾಗದು ಎಂದು ಹೇಳಿದರು.

1959ರಲ್ಲಿ ಚೀನಾ ಸೈನಿಕರ ವಿರುದ್ಧ ಹೋರಾಡಿ ಹುತಾತ್ಮರಾದ ಸಿಆರ್‌ಪಿಎಫ್ ಸಿಬ್ಬಂದಿಯ ಶೌರ್ಯ ಮತ್ತು ದೇಶಪ್ರೇಮ ಇಂದಿನ ಪೊಲೀಸ್ ಸಿಬ್ಬಂದಿಗೆ ಮಾದರಿಯಾಗಿದೆ. ದೇಶದ ಗಡಿರಕ್ಷಣೆಯಿಂದ ಹಿಡಿದು ಆಂತರಿಕ ಭದ್ರತೆಯವರೆಗೆ ಪೊಲೀಸ್ ಪಡೆಗಳು ನೀಡಿರುವ ಕೊಡುಗೆ ಅಪಾರವಾಗಿದೆ ಎಂದು ಸ್ಮರಿಸಿದರು.

ರಾಯಚೂರು ಜಿಲ್ಲೆಯಲ್ಲಿ ಕರ್ತವ್ಯದ ವೇಳೆ ಪ್ರಾಣತ್ಯಾಗ ಮಾಡಿದ ಪೊಲೀಸ್ ಸಿಬ್ಬಂದಿ ಇಸ್ಮಾಯಿಲ್ ಹಾಗೂ ರೇಣುಕಾ ಅವರ ಸೇವೆ ಮತ್ತು ಬಲಿದಾನವನ್ನೂ ಜಿಲ್ಲಾಧಿಕಾರಿ ಸ್ಮರಿಸಿದರು. ಸಾರ್ವಜನಿಕರ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ಇಂತಹ ಸಿಬ್ಬಂದಿಯ ತ್ಯಾಗವು ಪೊಲೀಸ್ ಇಲಾಖೆಯ ಕರ್ತವ್ಯನಿಷ್ಠೆಗೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಹುತಾತ್ಮ ಪೊಲೀಸ್ ಸಿಬ್ಬಂದಿ ಇಸ್ಮಾಯಿಲ್ ಹಾಗೂ ರೇಣುಕಾ ಅವರ ಕುಟುಂಬದ ಸದಸ್ಯರೊಂದಿಗೆ ಜಿಲ್ಲಾಧಿಕಾರಿ ಪೂವಿತಾ ಎಸ್. ಅವರು ಮಾತನಾಡಿ, ಅವರ ಕುಟುಂಬದ ಪರಿಸ್ಥಿತಿ ಹಾಗೂ ಯೋಗಕ್ಷೇಮ ವಿಚಾರಿಸಿದರು. ಹುತಾತ್ಮರ ಕುಟುಂಬಗಳಿಗೆ ಗೌರವ ಸಲ್ಲಿಸುವ ಮೂಲಕ ಅವರ ತ್ಯಾಗವನ್ನು ಸ್ಮರಿಸಿದರು.

ಪೊಲೀಸ್ ಹುತಾತ್ಮರ ಸ್ಮರಣೆ ಕೇವಲ ಒಂದು ದಿನದ ಕಾರ್ಯಕ್ರಮಕ್ಕೆ ಸೀಮಿತವಾಗಬಾರದು. ಸಮಾಜದ ಶಾಂತಿ ಮತ್ತು ಸುರಕ್ಷತೆಗಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟ ಪೊಲೀಸ್ ಸಿಬ್ಬಂದಿಯ ಸೇವೆಯನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂಬ ಸಂದೇಶದೊಂದಿಗೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯ ವಿವಿಧ ವಿಭಾಗಗಳ ಅಧಿಕಾರಿಗಳು, ಸಿಬ್ಬಂದಿ, ಹುತಾತ್ಮ ಪೊಲೀಸ್ ಸಿಬ್ಬಂದಿಯ ಕುಟುಂಬದ ಸದಸ್ಯರು ಹಾಗೂ ಗಣ್ಯರು ಉಪಸ್ಥಿತರಿದ್ದು, ವೀರಯೋಧರಿಗೆ ಗೌರವ ನಮನ ಸಲ್ಲಿಸಿದರು.