ಶಹಾಪುರ: 2026-27ನೇ ಸಾಲಿನ ಕಲಬುರಗಿ ವಿಭಾಗಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ಪಟ್ಟಣದ ಪಿಎಂಶ್ರೀ ಸರ್ಕಾರಿ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ, ಮೂರು ತಂಡಗಳು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನಲ್ಲಿ ನಡೆದ ವಿಭಾಗಮಟ್ಟದ ಕ್ರೀಡಾಕೂಟದಲ್ಲಿ ಏಳು ಜಿಲ್ಲೆಗಳ ತಂಡಗಳು ಭಾಗವಹಿಸಿದ್ದವು. ತೀವ್ರ ಪೈಪೋಟಿಯ ನಡುವೆ ಶಹಾಪುರ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳು ತಮ್ಮ ಕ್ರೀಡಾ ಕೌಶಲ್ಯ ಪ್ರದರ್ಶಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ.

17 ವರ್ಷದೊಳಗಿನ ಬಾಲಕರ ವಿಭಾಗದ ಅಂತಿಮ ಪಂದ್ಯದಲ್ಲಿ ವಿಜಯನಗರ ಜಿಲ್ಲೆಯ ತಂಡವನ್ನು ಮಣಿಸಿದ ಶಹಾಪುರ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದುಕೊಂಡರು. ಇದರೊಂದಿಗೆ ಸತತ ಮೂರನೇ ಬಾರಿಗೆ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗುವ ಮೂಲಕ ತಮ್ಮ ಸಾಧನೆಯ ಪರಂಪರೆಯನ್ನು ಮುಂದುವರಿಸಿದ್ದಾರೆ.

ಅದೇ ರೀತಿ 14 ವರ್ಷದೊಳಗಿನ ಬಾಲಕರ ವಿಭಾಗದ ಅಂತಿಮ ಪಂದ್ಯದಲ್ಲಿ ಬಳ್ಳಾರಿ ಜಿಲ್ಲೆಯ ತಂಡವನ್ನು ಸೋಲಿಸಿ ಪ್ರಥಮ ಸ್ಥಾನ ಗಳಿಸಿದ್ದಾರೆ. 14 ವರ್ಷದೊಳಗಿನ ಬಾಲಕಿಯರ ತಂಡವು ಉತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಈ ಮೂಲಕ ಶಾಲೆಯ ಒಟ್ಟು ಮೂರು ತಂಡಗಳು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಅರ್ಹತೆ ಪಡೆದಿರುವುದು ವಿಶೇಷವಾಗಿದೆ.

ವಿದ್ಯಾರ್ಥಿಗಳ ಈ ಸಾಧನೆಯು ಶಾಲೆಯಲ್ಲಿ ಕ್ರೀಡಾ ಚಟುವಟಿಕೆಗಳಿಗೆ ನೀಡುತ್ತಿರುವ ಪ್ರೋತ್ಸಾಹ ಹಾಗೂ ವಿದ್ಯಾರ್ಥಿಗಳ ನಿರಂತರ ಪರಿಶ್ರಮಕ್ಕೆ ಸಾಕ್ಷಿಯಾಗಿದೆ. ವಿಭಾಗಮಟ್ಟದ ಸ್ಪರ್ಧೆಯಲ್ಲಿ ವಿವಿಧ ಜಿಲ್ಲೆಗಳ ತಂಡಗಳನ್ನು ಎದುರಿಸಿ ಉತ್ತಮ ಫಲಿತಾಂಶ ದಾಖಲಿಸಿರುವುದು ಶಾಲೆಯ ಕ್ರೀಡಾ ಕ್ಷೇತ್ರದ ಮತ್ತೊಂದು ಹೆಮ್ಮೆಯ ಸಾಧನೆಯಾಗಿದೆ.

ವಿದ್ಯಾರ್ಥಿಗಳ ಸಾಧನೆಗೆ ಯಾದಗಿರಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಎಸ್. ಮುಧೋಳ, ಶಾಲೆಯ ಮುಖ್ಯಗುರು ಎಚ್.ಎಸ್. ಸೋಮಪುರ, ಶಿಕ್ಷಕ ವೃಂದ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

ರಾಜ್ಯಮಟ್ಟದ ಕ್ರೀಡಾಕೂಟದಲ್ಲಿಯೂ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿ ಶಾಲೆ ಹಾಗೂ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಲಿ ಎಂದು ಶುಭ ಹಾರೈಸಿದ್ದಾರೆ.