ರಾಯಚೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಅನಗತ್ಯ ಹೇಳಿಕೆ ನೀಡುವುದನ್ನು ಬಿಟ್ಟು ತಮ್ಮ ಕ್ಷೇತ್ರದಲ್ಲಿನ ದಲಿತರ ಸಮಸ್ಯೆಗಳ ಪರಿಹಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಗಮನಹರಿಸಬೇಕು ಎಂದು ಜೆಡಿಎಸ್ ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ನರಸಪ್ಪ ಆಶಾಪುರ ಆಗ್ರಹಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಅವರು ಕುಮಾರಸ್ವಾಮಿ ಅವರ ವಿರುದ್ಧ ಪದೇ ಪದೇ ಟೀಕೆ ಮಾಡುವ ಬದಲು ತಾವು ಪ್ರತಿನಿಧಿಸುವ ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಅವರ ಕ್ಷೇತ್ರದಲ್ಲಿಯೇ ದಲಿತರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಮೊದಲು ಅವುಗಳನ್ನು ಪರಿಹರಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ರಾಯಚೂರು ಜಿಲ್ಲೆಯಲ್ಲಿ ದಲಿತರ ಹತ್ಯೆ ಪ್ರಕರಣಗಳು ನಡೆದಿದ್ದರೂ ಸಚಿವ ಪ್ರಿಯಾಂಕ್ ಖರ್ಗೆ ಅವರು ಜಿಲ್ಲೆಗೆ ಭೇಟಿ ನೀಡಿ ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳುವ ಕೆಲಸ ಮಾಡಿಲ್ಲ ಎಂದು ಆರೋಪಿಸಿದರು. ದಲಿತರ ಹಿತಾಸಕ್ತಿಯ ಬಗ್ಗೆ ಮಾತನಾಡುವವರು ಸಂಕಷ್ಟದಲ್ಲಿರುವ ಕುಟುಂಬಗಳ ನೆರವಿಗೆ ನಿಲ್ಲಬೇಕು ಎಂದರು.

ತಂದೆಯ ರಾಜಕೀಯ ಹಿನ್ನೆಲೆಯಿಂದ ಉನ್ನತ ಸ್ಥಾನ ಪಡೆದಿರುವ ಪ್ರಿಯಾಂಕ್ ಖರ್ಗೆ ಅವರು ತಮ್ಮ ಹುದ್ದೆಯ ಘನತೆ ಕಾಪಾಡಿಕೊಳ್ಳಬೇಕು. ಹಿರಿಯ ರಾಜಕೀಯ ನಾಯಕರ ಕುರಿತು ಮಾತನಾಡುವಾಗ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ರಾಜಕೀಯ ಭಿನ್ನಾಭಿಪ್ರಾಯಗಳಿದ್ದರೂ ವೈಯಕ್ತಿಕ ಟೀಕೆಗಳ ಬದಲು ಜನಪರ ಸಮಸ್ಯೆಗಳ ಕುರಿತು ಚರ್ಚಿಸಬೇಕು ಎಂದು ಸಲಹೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಎಚ್.ಕೆ. ರವಿ, ಎ. ರಾಮು, ಶರಣಪ್ಪ, ರಾಜು, ನರಸಿಂಹಲು ಕಟ್ಟಿಮನಿ ಹಾಗೂ ಪ್ರಕಾಶ್ ಉಪಸ್ಥಿತರಿದ್ದರು.