ರಾಯಚೂರು: ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ ಅವರ ಗೆಲುವು ನಿಶ್ಚಿತವಾಗಿದ್ದು, ಈ ಬಾರಿ ಬಿಜೆಪಿ ಅಭ್ಯರ್ಥಿಗೆ ಸೋಲು ಖಚಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರು, ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಹಾಗೂ ವಿಧಾನ ಪರಿಷತ್ ಸದಸ್ಯ ಎ. ವಸಂತಕುಮಾರ ವಿಶ್ವಾಸ ವ್ಯಕ್ತಪಡಿಸಿದರು.
ಗುರುವಾರ ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಶಾನ್ಯ ಶಿಕ್ಷಕರ ಕ್ಷೇತ್ರದ ಏಳು ಜಿಲ್ಲೆಗಳ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ವ್ಯಾಪಕ ಪ್ರಚಾರ ನಡೆಸಿದ್ದಾರೆ. ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಶಿಕ್ಷಕರು ಹಾಗೂ ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸುವುದರ ಜೊತೆಗೆ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡುವಂತೆ ಮನವಿ ಮಾಡಲಾಗಿದೆ ಎಂದರು.
ಕಳೆದ ಚುನಾವಣೆಯಲ್ಲಿ ಸೋಲು ಅನುಭವಿಸಿದರೂ ಶರಣಪ್ಪ ಮಟ್ಟೂರ ಅವರು ಶಿಕ್ಷಕರ ಸಂಪರ್ಕವನ್ನು ಕಳೆದುಕೊಂಡಿಲ್ಲ. ಕಳೆದ ಐದು ವರ್ಷಗಳಲ್ಲಿ ಸುಮಾರು 4,500 ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಶಿಕ್ಷಕರು ಹಾಗೂ ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿದ್ದಾರೆ. ಅವರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಶಿಕ್ಷಕರ ವಿಶ್ವಾಸ ಗಳಿಸಿದ್ದಾರೆ. ಹೀಗಾಗಿ ಈ ಬಾರಿ ಮತದಾರರು ಅವರನ್ನು ಬೆಂಬಲಿಸಲಿದ್ದಾರೆ ಎಂದು ಹೇಳಿದರು.
ಶಿಕ್ಷಕರ ಬಹುದಿನಗಳ ಬೇಡಿಕೆಯಾಗಿರುವ ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್ಪಿಎಸ್) ಬದಲಿಗೆ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೊಳಿಸುವ ವಿಷಯದಲ್ಲಿ ರಾಜ್ಯ ಸರ್ಕಾರ ಸಕಾರಾತ್ಮಕ ನಿಲುವು ಹೊಂದಿದೆ. ಮುಖ್ಯಮಂತ್ರಿ ಅವರು ಈ ಕುರಿತು ಈಗಾಗಲೇ ಭರವಸೆ ನೀಡಿದ್ದು, ಸೂಕ್ತ ಸಮಿತಿ ಮೂಲಕ ಪರಿಶೀಲಿಸಿ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು. ಶಿಕ್ಷಕರ ಬಡ್ತಿ, ವೇತನ ಹೆಚ್ಚಳ ಹಾಗೂ ಇತರೆ ಸೇವಾ ಸೌಲಭ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕೂ ಸರ್ಕಾರ ಆದ್ಯತೆ ನೀಡಲಿದೆ ಎಂದು ತಿಳಿಸಿದರು.
ಬಿಜೆಪಿ ನಾಯಕರು ಈ ಚುನಾವಣೆಯಲ್ಲಿಯೂ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಶಿಕ್ಷಕರ ಒಲವು ಕಾಂಗ್ರೆಸ್ ಪರವಾಗಿದ್ದು, ಈ ಬಾರಿ ಬಿಜೆಪಿಯ ಲೆಕ್ಕಾಚಾರಗಳು ಫಲಿಸುವುದಿಲ್ಲ. ಶಿಕ್ಷಕರ ಹಿತಾಸಕ್ತಿಗಿಂತ ಜಾತಿ ಮತ್ತು ಧರ್ಮದ ಆಧಾರದಲ್ಲಿ ಮತದಾರರನ್ನು ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಟೀಕಿಸಿದರು.
ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಈ ಹಿಂದೆ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಮತಗಳನ್ನು ಸೆಳೆಯಲಾಗಿದೆ. ನಂತರ ವಿದ್ಯುನ್ಮಾನ ಮತಯಂತ್ರಗಳ ದುರ್ಬಳಕೆ ಹಾಗೂ ಮತಗಳ್ಳತನದ ಮೂಲಕ ಚುನಾವಣೆಗಳಲ್ಲಿ ಗೆಲುವು ಸಾಧಿಸಲಾಗಿದೆ ಎಂದು ಆರೋಪಿಸಿದರು. ಇದೀಗ ಮತ್ತೆ ಅದೇ ತಂತ್ರಗಳನ್ನು ಬಳಸಲು ಬಿಜೆಪಿ ಮತ್ತು ಆರ್ಎಸ್ಎಸ್ ಪ್ರಯತ್ನಿಸುತ್ತಿವೆ. ಚುನಾವಣಾ ವ್ಯವಸ್ಥೆಯ ಕುರಿತು ಜನರಲ್ಲಿ ಅನುಮಾನಗಳು ಮೂಡುತ್ತಿದ್ದು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು.
ಮತಗಳ್ಳತನದಂತಹ ಕೃತ್ಯಗಳ ಹಿಂದೆ ಆರ್ಎಸ್ಎಸ್ನ ತಂತ್ರಗಾರಿಕೆ ಇದೆ ಎಂದು ಆರೋಪಿಸಿದ ಅವರು, ದೇಶದಲ್ಲಿ ಯುವಜನತೆ, ವಿಶೇಷವಾಗಿ ಜೆನ್ಝಡ್ ಪೀಳಿಗೆಯವರು ರಾಜಕೀಯ ವ್ಯವಸ್ಥೆಯ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಇಂತಹ ಬೆಳವಣಿಗೆಗಳು ಬಿಜೆಪಿ ಮತ್ತು ಆರ್ಎಸ್ಎಸ್ ವಿರುದ್ಧ ಜನರಲ್ಲಿ ಅಸಮಾಧಾನ ಹೆಚ್ಚುತ್ತಿರುವುದನ್ನು ಸೂಚಿಸುತ್ತವೆ ಎಂದು ಅಭಿಪ್ರಾಯಪಟ್ಟರು.
ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರು ಈ ಬಾರಿ ಜಾಗೃತ ನಿರ್ಧಾರ ಕೈಗೊಳ್ಳಲಿದ್ದು, ಶಿಕ್ಷಕರ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸಿರುವ ಶರಣಪ್ಪ ಮಟ್ಟೂರ ಅವರನ್ನು ಗೆಲ್ಲಿಸಲಿದ್ದಾರೆ. ಕಾಂಗ್ರೆಸ್ ಪಕ್ಷವು ಶಿಕ್ಷಕರ ಹಕ್ಕುಗಳು ಹಾಗೂ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಶಾಂತಪ್ಪ, ಮಹಮ್ಮದ್ ಸಲಾಂ, ಶ್ರೀನಿವಾಸ ರೆಡ್ಡಿ, ಆಂಜನೇಯ, ಬಸವರಾಜ ಪಾಟೀಲ್ ಇಟಗಿ, ಅಮರೇಗೌಡ, ಅಬ್ದುಲ್ ಕರೀಂ, ಬಸವರಾಜ ದರೂರು, ಡಿ.ಕೆ. ಮುರಳಿ, ಡಾ. ರಝಾಕ್ ಉಸ್ತಾದ್ ಸೇರಿದಂತೆ ಪಕ್ಷದ ಹಲವು ಮುಖಂಡರು ಉಪಸ್ಥಿತರಿದ್ದರು.



