ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹೊನ್ನಹಳ್ಳಿ ಗ್ರಾಮದ ಸಮೀಪ ಮಹೀಂದ್ರಾ ಥಾರ್ ಹಾಗೂ ಎಕ್ಸ್‌ಯುವಿ ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಲಿಂಗಸುಗೂರು ವಿಧಾನಸಭಾ ಕ್ಷೇತ್ರದ ಶಾಸಕ ಮಾನಪ್ಪ ವಜ್ಜಲ್ ಅವರ ಕುಟುಂಬಕ್ಕೆ ಸೇರಿದ ಕಾರು ಅಪಘಾತಕ್ಕೀಡಾಗಿದ್ದು, ಶಾಸಕರ ಸಹೋದರನ ಪುತ್ರ ಮಲ್ಲೇಶ ಎಂಬುವವರು ತೀವ್ರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಹೊನ್ನಹಳ್ಳಿ ಗ್ರಾಮದ ಸಮೀಪ ಎರಡು ವಾಹನಗಳು ಎದುರುಬದುರಾಗಿ ಡಿಕ್ಕಿ ಹೊಡೆದ ಪರಿಣಾಮ ಕಾರುಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಡಿಕ್ಕಿಯ ರಭಸಕ್ಕೆ ವಾಹನಗಳಲ್ಲಿದ್ದ ಹಲವರು ಗಾಯಗೊಂಡಿದ್ದು, ಅಪಘಾತದ ಸುದ್ದಿ ತಿಳಿದ ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡವರನ್ನು ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಅಪಘಾತದಲ್ಲಿ ಯಾದಗಿರಿ ಮೂಲದ ಇಬ್ಬರಿಗೂ ತೀವ್ರ ಗಾಯಗಳಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಲಿಂಗಸುಗೂರು ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಾಹನಗಳ ಮುಖಾಮುಖಿ ಡಿಕ್ಕಿಗೆ ಕಾರಣವಾದ ಅಂಶಗಳ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.