ರಾಯಚೂರು: ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನಗರದ ವಿವಿಧ ಶಾಲೆಗಳಿಗೆ ಭೇಟಿ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ, ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಹಾಗೂ ವಿಧಾನ ಪರಿಷತ್ ಸದಸ್ಯ ಎ. ವಸಂತಕುಮಾರ ಅವರು ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಪರ ಮತಯಾಚನೆ ನಡೆಸಿದರು.

ಶಾಲೆಗಳ ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿದ ಅವರು, ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಸಂತಕುಮಾರ, ಶರಣಪ್ಪ ಮಟ್ಟೂರು ಅವರು ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವುದರ ಜೊತೆಗೆ ಅವರ ಹಕ್ಕುಗಳ ರಕ್ಷಣೆಗಾಗಿ ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅವರಿಗೆ ಸಮಗ್ರ ಅರಿವಿದ್ದು, ಆಯ್ಕೆಯಾದಲ್ಲಿ ಹಂತ ಹಂತವಾಗಿ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಲಿದ್ದಾರೆ ಎಂದು ಹೇಳಿದರು.

ರಾಜ್ಯ ಕಾಂಗ್ರೆಸ್ ಸರ್ಕಾರವು ಕಲ್ಯಾಣ ಕರ್ನಾಟಕ ಭಾಗದ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿ ಹಾಗೂ ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡುತ್ತಿದೆ. ಈ ಭಾಗದಲ್ಲಿ ಖಾಲಿ ಇರುವ ಸುಮಾರು 7 ಸಾವಿರ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಲ್ಲದೆ, ಸಂವಿಧಾನದ 371(ಜೆ) ವಿಧಿಯಡಿ ಕಲ್ಯಾಣ ಕರ್ನಾಟಕ ಭಾಗದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 32 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದರು.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಮೂಲಕ ಶಿಕ್ಷಣ ಕ್ಷೇತ್ರದ ಪ್ರಗತಿಗೆ ವಿಶೇಷ ಒತ್ತು ನೀಡಲಾಗುತ್ತಿದೆ. ‘ಅಕ್ಷರ ಆವಿಷ್ಕಾರ’ ಯೋಜನೆಯಡಿ ಈ ಭಾಗದ ಶೈಕ್ಷಣಿಕ ಅಭಿವೃದ್ಧಿಗಾಗಿ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದ್ದು, ಶಾಲೆಗಳ ಮೂಲಸೌಕರ್ಯ ಹಾಗೂ ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿವರಿಸಿದರು.

ಶಿಕ್ಷಕರ ಬೇಡಿಕೆಗಳಿಗೆ ಸ್ಪಂದಿಸುವ ಹಾಗೂ ಶಿಕ್ಷಣ ಕ್ಷೇತ್ರದ ಸಮಸ್ಯೆಗಳನ್ನು ವಿಧಾನ ಪರಿಷತ್ತಿನಲ್ಲಿ ಪ್ರಸ್ತಾಪಿಸುವ ಸಮರ್ಥ ಪ್ರತಿನಿಧಿಯ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಶರಣಪ್ಪ ಮಟ್ಟೂರು ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಬೆಂಬಲಿಸುವಂತೆ ಶಿಕ್ಷಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ವಕ್ತಾರ ಡಾ. ರಝಾಕ್ ಉಸ್ತಾದ್, ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅಬ್ದುಲ್ ಕರೀಂ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.