ಬಿಚ್ಚಾಲಿ ಕ್ಯಾಂಪ್, ಅ.22: ಅಯೋಡಿನ್ ಕೊರತೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಪ್ರತಿಯೊಂದು ಕುಟುಂಬವೂ ದಿನನಿತ್ಯದ ಆಹಾರದಲ್ಲಿ ಅಯೋಡಿಯುಕ್ತ ಉಪ್ಪನ್ನು ಬಳಸಬೇಕು ಎಂದು ಮಟಮಾರಿ ಆರೋಗ್ಯ ಕೇಂದ್ರದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅರವಿಂದ ಕುಮಾರ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು ಹಾಗೂ ಗಿಲ್ಲೆಸೂಗೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಬಿಚ್ಚಾಲಿ ಕ್ಯಾಂಪ್ನ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಅಯೋಡಿನ್ ಕೊರತೆ ದಿನಾಚರಣೆ ಅಂಗವಾಗಿ ಗರ್ಭಿಣಿಯರು, ಬಾಣಂತಿಯರು ಹಾಗೂ ಸಾರ್ವಜನಿಕರಿಗೆ ಆಯೋಜಿಸಿದ್ದ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರತಿವರ್ಷ ಅಕ್ಟೋಬರ್ 21ರಂದು ವಿಶ್ವ ಅಯೋಡಿನ್ ಕೊರತೆ ದಿನವನ್ನು ಆಚರಿಸಲಾಗುತ್ತಿದ್ದು, ಅಯೋಡಿನ್ ಪೋಷಕಾಂಶದ ಮಹತ್ವ ಹಾಗೂ ಅದರ ಕೊರತೆಯಿಂದ ಉಂಟಾಗುವ ಸಮಸ್ಯೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಈ ದಿನಾಚರಣೆಯ ಪ್ರಮುಖ ಉದ್ದೇಶವಾಗಿದೆ ಎಂದರು.
ಮಾನವನ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯಲ್ಲಿ ಅಯೋಡಿನ್ ಪ್ರಮುಖ ಪಾತ್ರ ವಹಿಸುತ್ತದೆ. ಥೈರಾಯ್ಡ್ ಗ್ರಂಥಿಯು ಸರಿಯಾಗಿ ಕಾರ್ಯನಿರ್ವಹಿಸಲು ಅಯೋಡಿನ್ ಅತ್ಯಗತ್ಯವಾಗಿದ್ದು, ದೇಹದ ಚಯಾಪಚಯ ಕ್ರಿಯೆ, ಹೃದಯ ಬಡಿತ, ದೇಹದ ಉಷ್ಣತೆ ಹಾಗೂ ಸ್ನಾಯುಗಳ ಕಾರ್ಯನಿರ್ವಹಣೆಯನ್ನು ನಿಯಂತ್ರಿಸುವಲ್ಲಿ ಸಹಕಾರಿಯಾಗಿದೆ ಎಂದು ವಿವರಿಸಿದರು.
ವಿಶೇಷವಾಗಿ ಗರ್ಭಿಣಿಯರು, ಬಾಣಂತಿಯರು ಹಾಗೂ ಬೆಳೆಯುವ ಮಕ್ಕಳಿಗೆ ಅಯೋಡಿನ್ ಅತ್ಯಂತ ಅವಶ್ಯಕವಾಗಿದೆ. ಗರ್ಭಾವಸ್ಥೆಯಲ್ಲಿ ಅಯೋಡಿನ್ ಕೊರತೆ ಉಂಟಾದರೆ ಭ್ರೂಣದ ಬೆಳವಣಿಗೆಯ ಮೇಲೆ ದುಷ್ಪರಿಣಾಮ ಬೀರುವುದರ ಜೊತೆಗೆ ಗರ್ಭಪಾತ, ಮೃತಶಿಶು ಜನನದಂತಹ ಸಮಸ್ಯೆಗಳ ಅಪಾಯ ಹೆಚ್ಚಾಗಬಹುದು. ಮಕ್ಕಳಲ್ಲಿ ಅಯೋಡಿನ್ ಕೊರತೆಯಿಂದ ಬೌದ್ಧಿಕ ಬೆಳವಣಿಗೆ ಕುಂಠಿತಗೊಳ್ಳುವುದು, ಕಲಿಕಾ ಸಾಮರ್ಥ್ಯ ಕಡಿಮೆಯಾಗುವುದು ಹಾಗೂ ದೈಹಿಕ ಬೆಳವಣಿಗೆಯಲ್ಲಿ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ತಿಳಿಸಿದರು.
ಅಯೋಡಿನ್ ಕೊರತೆಯಿಂದ ಕಂಠಮಾಲೆ (ಗಾಯಿಟರ್) ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ಇವುಗಳನ್ನು ತಡೆಗಟ್ಟಲು ಸಾರ್ವಜನಿಕರು ಅಯೋಡಿಯುಕ್ತ ಉಪ್ಪಿನ ಬಳಕೆಗೆ ಆದ್ಯತೆ ನೀಡಬೇಕು. ಆರೋಗ್ಯಕರ ಜೀವನಕ್ಕೆ ಪೌಷ್ಟಿಕ ಆಹಾರದ ಜೊತೆಗೆ ಅಗತ್ಯ ಸೂಕ್ಷ್ಮ ಪೋಷಕಾಂಶಗಳ ಸೇವನೆಯೂ ಮುಖ್ಯವಾಗಿದೆ ಎಂದು ಸಲಹೆ ನೀಡಿದರು.
ನಂತರ ಮಾತನಾಡಿದ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಚೆನ್ನವೀರಮ್ಮ, ಅಯೋಡಿನ್ ಕೊರತೆ ನಿವಾರಣೆಯಲ್ಲಿ ಸಾರ್ವಜನಿಕರ ಸಹಭಾಗಿತ್ವ ಅತ್ಯಂತ ಅಗತ್ಯವಾಗಿದೆ. ಪ್ರತಿಯೊಂದು ಮನೆಯಲ್ಲಿಯೂ ಅಯೋಡಿಯುಕ್ತ ಉಪ್ಪು ಬಳಸುವ ಮೂಲಕ ಕುಟುಂಬದ ಸದಸ್ಯರ ಆರೋಗ್ಯ ಕಾಪಾಡಿಕೊಳ್ಳಬೇಕು. ವಿಶೇಷವಾಗಿ ತಾಯಂದಿರು ಮಕ್ಕಳ ಪೌಷ್ಟಿಕಾಂಶದ ಅಗತ್ಯಗಳ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಹೇಳಿದರು.
‘ಅಯೋಡಿಯುಕ್ತ ಉಪ್ಪು ಆರೋಗ್ಯದ ಗುಟ್ಟು’ ಎಂಬ ಸಂದೇಶದೊಂದಿಗೆ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಆರೋಗ್ಯ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆ ನಿರ್ಮಲ, ಅಂಗನವಾಡಿ ಸಹಾಯಕಿ ದುರ್ಗಮ್ಮ ಸೇರಿದಂತೆ ಗರ್ಭಿಣಿಯರು, ಬಾಣಂತಿಯರು ಹಾಗೂ ಸ್ಥಳೀಯ ಸಾರ್ವಜನಿಕರು ಉಪಸ್ಥಿತರಿದ್ದರು.



