ಸಿಂಧನೂರು: ಅಯೋಡಿನ್ ಕೊರತೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಪ್ರತಿಯೊಂದು ಕುಟುಂಬವೂ ಅಯೋಡಿನ್ಯುಕ್ತ ಉಪ್ಪಿನ ಬಳಕೆಗೆ ಆದ್ಯತೆ ನೀಡಬೇಕು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು, ಜವಳಗೇರಾ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಿಂಧನೂರಿನ ಸನ್ ರೈಸ್ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳ ಸಂಯುಕ್ತಾಶ್ರಯದಲ್ಲಿ ಜವಳಗೇರಾದ ಅಮೃತ ನಗರದ ಸಮುದಾಯ ಭವನದಲ್ಲಿ ಆಯೋಜಿಸಿದ್ದ ವಿಶ್ವ ಅಯೋಡಿನ್ ದಿನಾಚರಣೆ ಹಾಗೂ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅಯೋಡಿನ್ ಮಾನವನ ದೇಹದ ಬೆಳವಣಿಗೆಗೆ ಅತ್ಯಗತ್ಯವಾದ ಸೂಕ್ಷ್ಮ ಪೋಷಕಾಂಶವಾಗಿದೆ. ಥೈರಾಯ್ಡ್ ಗ್ರಂಥಿಯ ಸಮರ್ಪಕ ಕಾರ್ಯನಿರ್ವಹಣೆಗೆ ಅಯೋಡಿನ್ ಪ್ರಮುಖ ಪಾತ್ರ ವಹಿಸುತ್ತದೆ. ವಿಶೇಷವಾಗಿ ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಅಯೋಡಿನ್ ಅಗತ್ಯವಾಗಿದೆ ಎಂದು ವಿವರಿಸಿದರು.
ದೇಹದಲ್ಲಿ ಅಯೋಡಿನ್ ಕೊರತೆ ಉಂಟಾದರೆ ಕಂಠಮಾಲೆ (ಗಾಯಿಟರ್), ಮಕ್ಕಳ ದೈಹಿಕ ಬೆಳವಣಿಗೆಯಲ್ಲಿ ಕುಂಠಿತತೆ ಹಾಗೂ ಬೌದ್ಧಿಕ ಬೆಳವಣಿಗೆಯ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆಯಿದೆ. ಹೀಗಾಗಿ ಸಾರ್ವಜನಿಕರು ತಮ್ಮ ದೈನಂದಿನ ಆಹಾರದಲ್ಲಿ ಅಯೋಡಿನ್ಯುಕ್ತ ಉಪ್ಪನ್ನು ಬಳಸುವ ಮೂಲಕ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.
ಅಯೋಡಿನ್ಯುಕ್ತ ಉಪ್ಪನ್ನು ತೇವಾಂಶವಿಲ್ಲದ, ಮುಚ್ಚಿದ ಪಾತ್ರೆಯಲ್ಲಿ ಸಂಗ್ರಹಿಸಬೇಕು. ಅಡುಗೆಯಲ್ಲಿ ಉಪ್ಪನ್ನು ಸೂಕ್ತ ಸಮಯದಲ್ಲಿ ಬಳಸುವುದರಿಂದ ಅಯೋಡಿನ್ ನಷ್ಟವನ್ನು ಕಡಿಮೆ ಮಾಡಬಹುದು. ‘ಉಪ್ಪಿಗಿಂತ ರುಚಿಯಿಲ್ಲ, ತಾಯಿಗಿಂತ ಬಂಧುವಿಲ್ಲ’ ಎಂಬ ನಾಣ್ಣುಡಿಯನ್ನು ಉಲ್ಲೇಖಿಸಿದ ಅವರು, ಆಹಾರದಲ್ಲಿ ಉಪ್ಪಿನ ಮಹತ್ವದ ಜೊತೆಗೆ ಅಯೋಡಿನ್ನ ಅಗತ್ಯವನ್ನೂ ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದು ತಿಳಿಸಿದರು.
ಸನ್ ರೈಸ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಲಾಜರ್ ಸಿರಲ್ ಮಾತನಾಡಿ, ಅಯೋಡಿನ್ ಕೊರತೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ತಡೆಗಟ್ಟುವಿಕೆಯಲ್ಲಿ ಸಾರ್ವಜನಿಕರ ಸಹಕಾರ ಅತ್ಯಂತ ಮುಖ್ಯವಾಗಿದೆ. ಪ್ರತಿಯೊಂದು ಕುಟುಂಬವೂ ಅಯೋಡಿನ್ಯುಕ್ತ ಉಪ್ಪಿನ ಬಳಕೆಗೆ ಆದ್ಯತೆ ನೀಡಬೇಕು. ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಇಂತಹ ಕಾರ್ಯಕ್ರಮಗಳ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ‘ಅಯೋಡಿನ್ಯುಕ್ತ ಉಪ್ಪಿನ ಬಳಕೆ ಆರೋಗ್ಯಕರ ಜೀವನಕ್ಕೆ ಅಡಿಪಾಯ’ ಎಂಬ ಸಂದೇಶದೊಂದಿಗೆ ಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣ ನೀಡಲಾಯಿತು.
ಈ ಸಂದರ್ಭದಲ್ಲಿ ಸ್ಥಳೀಯ ಸಾರ್ವಜನಿಕರು, ತಾಯಂದಿರು ಹಾಗೂ ಸನ್ ರೈಸ್ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



