ರಾಯಚೂರು: ಕರ್ನಾಟಕ ವಿಧಾನ ಪರಿಷತ್ನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ಅಕ್ಟೋಬರ್ 23ರಂದು ನಡೆಯಲಿರುವ ಮತದಾನದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಪೂವಿತಾ ಎಸ್. ಅವರು ಗುರುವಾರ ಜಿಲ್ಲೆಯ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಚುನಾವಣಾ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು.
ಜಿಲ್ಲೆಯ ಗಬ್ಬೂರು, ಜಾಲಹಳ್ಳಿ ಹಾಗೂ ದೇವದುರ್ಗ ಸೇರಿದಂತೆ ವಿವಿಧ ಮತದಾನ ಕೇಂದ್ರಗಳಿಗೆ ಭೇಟಿ ನೀಡಿದ ಅವರು, ಮತದಾನಕ್ಕೆ ಕೈಗೊಂಡಿರುವ ವ್ಯವಸ್ಥೆಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿಯಿಂದ ಮಾಹಿತಿ ಪಡೆದರು.
ಮತದಾನ ಪ್ರಕ್ರಿಯೆ ಸುಸೂತ್ರವಾಗಿ ನಡೆಯಲು ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಮುಂಚಿತವಾಗಿಯೇ ಪೂರ್ಣಗೊಳಿಸಬೇಕು. ಮತದಾನದ ದಿನ ಯಾವುದೇ ರೀತಿಯ ತಾಂತ್ರಿಕ ಅಥವಾ ಆಡಳಿತಾತ್ಮಕ ಸಮಸ್ಯೆಗಳು ಎದುರಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಮತಗಟ್ಟೆಗಳಲ್ಲಿ ಮತದಾರರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವುದರ ಜೊತೆಗೆ ಚುನಾವಣಾ ಕರ್ತವ್ಯಕ್ಕೆ ನಿಯೋಜಿತ ಸಿಬ್ಬಂದಿ ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಮತದಾನ ಪ್ರಕ್ರಿಯೆಯಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ನೀಡದೆ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದರು.
ಜಿಲ್ಲೆಯ ಎಲ್ಲ ಮತದಾನ ಕೇಂದ್ರಗಳಲ್ಲಿ ಅಗತ್ಯ ವ್ಯವಸ್ಥೆಗಳನ್ನು ಖಚಿತಪಡಿಸಿಕೊಂಡು, ಅಕ್ಟೋಬರ್ 23ರಂದು ನಡೆಯಲಿರುವ ಮತದಾನವು ಶಾಂತಿಯುತವಾಗಿ ಹಾಗೂ ಸುಸೂತ್ರವಾಗಿ ಪೂರ್ಣಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್. ನಿರ್ದೇಶನ ನೀಡಿದರು.



