ಹಟ್ಟಿ ಚಿನ್ನದ ಗಣಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರ ಪರ ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಹಾಗೂ ಲಿಂಗಸುಗೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಡಿ.ಎಸ್. ಹೂಲಗೇರಿ ಅವರು ಶಿಕ್ಷಕರಲ್ಲಿ ಮತಯಾಚನೆ ನಡೆಸಿದರು.

ಲಿಂಗಸುಗೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಟ್ಟಿ ಪಟ್ಟಣದ ಶ್ರೀ ವಿನಾಯಕ ಕಾಲೇಜಿಗೆ ಭೇಟಿ ನೀಡಿದ ಅವರು, ಶಿಕ್ಷಕರು ಹಾಗೂ ಉಪನ್ಯಾಸಕರೊಂದಿಗೆ ಸಮಾಲೋಚನೆ ನಡೆಸಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿ.ಎಸ್. ಹೂಲಗೇರಿ, ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಹಾಗೂ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವ ಸಮರ್ಥ ಪ್ರತಿನಿಧಿಯನ್ನು ವಿಧಾನ ಪರಿಷತ್ತಿಗೆ ಆಯ್ಕೆ ಮಾಡುವುದು ಅಗತ್ಯವಾಗಿದೆ. ಶಿಕ್ಷಕರ ಹಕ್ಕುಗಳ ರಕ್ಷಣೆ, ಸೇವಾ ಭದ್ರತೆ ಹಾಗೂ ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಕಾಂಗ್ರೆಸ್ ಪಕ್ಷ ಬದ್ಧವಾಗಿದೆ ಎಂದು ಹೇಳಿದರು.

ಶಿಕ್ಷಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸುವುದು, ಅವರ ಸೇವಾ ಹಿತಾಸಕ್ತಿಗಳನ್ನು ಕಾಪಾಡುವುದು ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರುವುದು ಪ್ರಮುಖ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಶರಣಪ್ಪ ಮಟ್ಟೂರು ಅವರು ಶಿಕ್ಷಕರ ಧ್ವನಿಯಾಗಿ ವಿಧಾನ ಪರಿಷತ್ತಿನಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಅರಿವು ಹೊಂದಿರುವ ಶರಣಪ್ಪ ಮಟ್ಟೂರು ಅವರಿಗೆ ಶಿಕ್ಷಕರು ಬೆಂಬಲ ನೀಡಬೇಕು. ಶಿಕ್ಷಕರ ಹಿತಾಸಕ್ತಿಗಳನ್ನು ಪ್ರತಿನಿಧಿಸುವ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಮೂಲಕ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಮತಯಾಚನೆ ಸಂದರ್ಭದಲ್ಲಿ ಲಿಂಗಸುಗೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗೋವಿಂದ ನಾಯಕ, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮಹಮ್ಮದ್ ರಫಿ, ಹಟ್ಟಿ ನಗರ ಘಟಕದ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಹ್ಮದ್ ಬಾಬಾ, ವಕೀಲ ಮುದಕಪ್ಪ, ಅಮ್ಜದ್ ಶೇಠ್, ನಾಗರೆಡ್ಡೆಪ್ಪ ನಗನೂರು, ಮಹಾಲಿಂಗಪ್ಪ, ರಾಜಶೇಖರ ಪಲ್ಲೇದ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಶಾಲಾ-ಕಾಲೇಜುಗಳ ಶಿಕ್ಷಕರು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.