ದೇವದುರ್ಗ, ಅ. 23: ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಶಶಿಲ್ ಜಿ. ನಮೋಶಿ ಅವರು ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ದೇವದುರ್ಗ ಶಾಸಕಿ ಕರೆಮ್ಮ ಜಿ. ನಾಯಕ್ ಹೇಳಿದರು.

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿರುವ ಮತಗಟ್ಟೆ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿರುವ ಶಶಿಲ್ ಜಿ. ನಮೋಶಿ ಅವರಿಗೆ ಶಿಕ್ಷಕರ ಸಮಸ್ಯೆಗಳ ಬಗ್ಗೆ ಉತ್ತಮ ಅರಿವಿದೆ. ಈ ಹಿಂದೆ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿರುವ ಅವರು, ಶಿಕ್ಷಕರ ಹಕ್ಕುಗಳು ಹಾಗೂ ಬೇಡಿಕೆಗಳ ಈಡೇರಿಕೆಗೆ ಶ್ರಮಿಸುವ ಸಾಮರ್ಥ್ಯ ಹೊಂದಿದ್ದಾರೆ ಎಂದು ತಿಳಿಸಿದರು.

ಕಲ್ಯಾಣ ಕರ್ನಾಟಕ ಭಾಗದ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸುವ ಹಾಗೂ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಧ್ವನಿಯಾಗುವ ಅನುಭವಿ ಪ್ರತಿನಿಧಿಯ ಅಗತ್ಯವಿದೆ. ಈ ನಿಟ್ಟಿನಲ್ಲಿ ನಮೋಶಿ ಅವರು ಸೂಕ್ತ ಅಭ್ಯರ್ಥಿಯಾಗಿದ್ದು, ಶಿಕ್ಷಕ ಮತದಾರರು ಅವರ ಪರವಾಗಿ ಬೆಂಬಲ ವ್ಯಕ್ತಪಡಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚುನಾವಣೆ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ತಮ್ಮ ಅಭ್ಯರ್ಥಿಗಳ ಪರ ಮತಯಾಚನೆಯಲ್ಲಿ ತೊಡಗಿದ್ದು, ದೇವದುರ್ಗ ಪಟ್ಟಣದ ಮತಗಟ್ಟೆಯಲ್ಲಿ ಶಿಕ್ಷಕ ಮತದಾರರು ಉತ್ಸಾಹದಿಂದ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದರು.