ರಾಯಚೂರು, ಅ.23: ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಹಾಗೂ ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಎ. ವಸಂತಕುಮಾರ ಅವರು ಶುಕ್ರವಾರ ನಗರದ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಚುನಾವಣಾ ಚಟುವಟಿಕೆಗಳನ್ನು ಪರಿಶೀಲಿಸಿದರು.
ಮತಗಟ್ಟೆಗಳ ಸಮೀಪ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಚರ್ಚಿಸಿದ ಅವರು, ಮತದಾನದ ಪ್ರಕ್ರಿಯೆ ಮತ್ತು ಮತದಾರರ ಸ್ಪಂದನೆ ಕುರಿತು ಮಾಹಿತಿ ಪಡೆದುಕೊಂಡರು. ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರಿಗೆ ಶಿಕ್ಷಕ ಮತದಾರರು ಪ್ರಥಮ ಪ್ರಾಶಸ್ತ್ಯದ ಮತ ನೀಡುವಂತೆ ಮನವಿ ಮಾಡಿದರು.
ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಹಾಗೂ ಅವರ ಹಿತಾಸಕ್ತಿಗಳ ಪರವಾಗಿ ಕೆಲಸ ಮಾಡುವ ಪ್ರತಿನಿಧಿಯನ್ನು ಆಯ್ಕೆ ಮಾಡುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮತದಾರರಲ್ಲಿ ಕೋರಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಬಸವರಾಜ ಪಾಟೀಲ್ ಇಟಗಿ, ಕೆಪಿಸಿಸಿ ವಕ್ತಾರ ಡಾ. ರಝಾಕ್ ಉಸ್ತಾದ್, ರಾಮಕೃಷ್ಣ ನಾಯಕ, ಬಸವರಾಜ ದರೂರು, ಜಿ. ಶಿವಮೂರ್ತಿ, ಮೊಹಮ್ಮದ್ ರಫಿ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.



