ರಾಯಚೂರು, ಅ.23: ವಾಲ್ಮೀಕಿ ಸಮುದಾಯದ ಮೀಸಲಾತಿ ಹಕ್ಕುಗಳಿಗೆ ಕಾನೂನಾತ್ಮಕ ಭದ್ರತೆ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಕ್ಟೋಬರ್ 26ರಂದು ನಡೆಯಲಿರುವ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಅಖಿಲಾಂಡ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಮಿತಿಯ ಜಿಲ್ಲಾಧ್ಯಕ್ಷ ವೆಂಕಟೇಶ್ ನಾಯಕ್ ಆಸ್ಕಿಹಾಳ್ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪರಿಶಿಷ್ಟ ಪಂಗಡದ ಮೀಸಲಾತಿ ವಿಚಾರದಲ್ಲಿ ಸಮುದಾಯಕ್ಕೆ ಅನ್ಯಾಯವಾಗದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕು. ಮೀಸಲಾತಿಗೆ ಸಂಬಂಧಿಸಿದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ವಿಶೇಷ ಅನುಮತಿ ಅರ್ಜಿ (ಎಸ್ಎಲ್ಪಿ) ಸಲ್ಲಿಸಬೇಕು. ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಶೇ.56ರಷ್ಟು ಮೀಸಲಾತಿಗೆ ಶಾಶ್ವತ ಕಾನೂನು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಸಂವಿಧಾನದ ಒಂಬತ್ತನೇ ಅನುಸೂಚಿಗೆ ಸೇರಿಸಲು ಕ್ರಮವಹಿಸಬೇಕು ಎಂದು ಆಗ್ರಹಿಸಿದರು.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ವಾಲ್ಮೀಕಿ ಜಯಂತಿಯನ್ನು ಸರಳವಾಗಿ ಆಚರಿಸಲು ಮುಂದಾಗಿರುವ ನಿರ್ಧಾರವನ್ನು ಸಮಿತಿ ಸ್ವಾಗತಿಸುತ್ತದೆ. ಆದರೆ, ಸರಳ ಆಚರಣೆಯ ನೆಪದಲ್ಲಿ ಸಮುದಾಯದ ಸಮಸ್ಯೆಗಳು ಹಾಗೂ ಬಹುದಿನಗಳ ಬೇಡಿಕೆಗಳು ಕಡೆಗಣನೆಯಾಗಬಾರದು. ಹೀಗಾಗಿ ಜಯಂತಿ ಕಾರ್ಯಕ್ರಮದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಕಪ್ಪುಪಟ್ಟಿ ಧರಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.
ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳಕ್ಕೆ ಸೂಕ್ತ ಕಾನೂನು ರಕ್ಷಣೆ ನೀಡಬೇಕು. ನಕಲಿ ಜಾತಿ ಪ್ರಮಾಣಪತ್ರಗಳ ಮೂಲಕ ಮೀಸಲಾತಿ ಸೌಲಭ್ಯ ದುರುಪಯೋಗವಾಗುತ್ತಿರುವ ಆರೋಪಗಳ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮತ್ತು ಶೈಕ್ಷಣಿಕ ಶುಲ್ಕ ಮರುಪಾವತಿ ವಿಳಂಬವಾಗದಂತೆ ನೋಡಿಕೊಳ್ಳಬೇಕು. ಸಮುದಾಯದ ಅಭಿವೃದ್ಧಿಗೆ ಮೀಸಲಿಡುವ ಅನುದಾನವನ್ನು ಉದ್ದೇಶಿತ ಯೋಜನೆಗಳಿಗೆ ಸಮರ್ಪಕವಾಗಿ ವಿನಿಯೋಗಿಸಬೇಕು ಎಂದು ಒತ್ತಾಯಿಸಿದರು.
ವಾಲ್ಮೀಕಿ ಸಮುದಾಯದ ಯುವಕರು ಶಿಕ್ಷಣ ಪಡೆದರೂ ಉದ್ಯೋಗಾವಕಾಶಗಳ ಕೊರತೆಯಿಂದ ಸಂಕಷ್ಟ ಎದುರಿಸುತ್ತಿದ್ದಾರೆ. ಸರ್ಕಾರ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವುದರೊಂದಿಗೆ ಯುವಜನರಿಗೆ ಕೌಶಲ್ಯಾಭಿವೃದ್ಧಿ ತರಬೇತಿ, ಸ್ವಯಂ ಉದ್ಯೋಗಕ್ಕೆ ಆರ್ಥಿಕ ನೆರವು ಹಾಗೂ ವಿವಿಧ ಸರ್ಕಾರಿ ಯೋಜನೆಗಳ ಪ್ರಯೋಜನ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ವಾಲ್ಮೀಕಿ ಜಯಂತಿ ಕೇವಲ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಕಾರ್ಯಕ್ರಮವಾಗದೆ, ಸಮುದಾಯದ ಸ್ವಾಭಿಮಾನ, ಹಕ್ಕುಗಳ ರಕ್ಷಣೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಧ್ವನಿ ಎತ್ತುವ ಸಂದರ್ಭವಾಗಬೇಕು. ಸರ್ಕಾರ ಸಮುದಾಯದ ಬೇಡಿಕೆಗಳಿಗೆ ಸ್ಪಂದಿಸಿ ಸೂಕ್ತ ನಿರ್ಧಾರ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಸಂವಿಧಾನಬದ್ಧವಾಗಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ರಾಘವೇಂದ್ರ ನಾಯಕ್, ಯಂಕಣ್ಣ ನಾಯಕ್ ಮೇಸ್ತ್ರಿ, ಶಿವು ಗೋನಾಳ್, ನರೇಂದ್ರ ಉಂಡ್ರಳ ದೊಡ್ಡಿ, ನಾಗರಾಜ್ ವಡವಟ್ಟಿ ಸೇರಿದಂತೆ ಸಮಿತಿಯ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.



