ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ವರ್ಚಸ್ಸಿಗೆ ಧಕ್ಕೆ ತಂದು, ಅವರನ್ನು ಬ್ಲ್ಯಾಕ್‌ಮೇಲ್ ಮಾಡುವ ಉದ್ದೇಶದಿಂದ ಸ್ಟಿಂಗ್ ಆಪರೇಷನ್ ನಡೆಸಲಾಗಿದೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದವರೇ ಭಾಗಿಯಾಗಿರುವ ಶಂಕೆಯಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಕರ್ತ ಸೇರಿದಂತೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಪ್ರಕರಣದ ಕುರಿತು ಮುಖ್ಯಮಂತ್ರಿಗಳಿಗೂ ಮಾಹಿತಿ ನೀಡಲಾಗಿದ್ದು, ಇದರಲ್ಲಿ ಯಾರೇ ಭಾಗಿಯಾಗಿದ್ದರೂ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ ಎಂದು ತಿಳಿಸಿದರು.

ಸ್ಟಿಂಗ್ ವಿಡಿಯೋದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಮಹಿಳೆಯೊಬ್ಬರು ಕಾಣಿಸಿಕೊಂಡಿದ್ದಾರೆ. ಅಲ್ಲದೆ, ಮಾಧ್ಯಮ ಸಂಸ್ಥೆಯೊಂದರ ಮುಖ್ಯಸ್ಥರೂ ಇದರಲ್ಲಿ ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಆದರೆ, ಪಕ್ಷದ ಒಬ್ಬ ವ್ಯಕ್ತಿ ತಪ್ಪು ಮಾಡಿದ್ದರೆ ಅದಕ್ಕೆ ಇಡೀ ಕಾಂಗ್ರೆಸ್ ಪಕ್ಷವನ್ನು ಹೊಣೆಗಾರರನ್ನಾಗಿ ಮಾಡುವುದು ಸರಿಯಲ್ಲ ಎಂದು ಸ್ಪಷ್ಟಪಡಿಸಿದರು.

ವಿಡಿಯೋದಲ್ಲಿ ಕಾಣಿಸಿಕೊಂಡ ಮಹಿಳೆ ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು ಎಂಬ ಮಾಹಿತಿ ಇದೆ. ರಾಜಕೀಯ ಲಾಭ ಪಡೆಯಲು ಹಾಗೂ ಟಿಕೆಟ್ ವಿಚಾರದಲ್ಲಿ ಒತ್ತಡ ಹೇರುವ ಉದ್ದೇಶದಿಂದ ಈ ಕೃತ್ಯ ನಡೆದಿರಬಹುದು ಎಂಬ ಅನುಮಾನ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಅವರು ಕಳೆದ 40 ವರ್ಷಗಳಿಂದ ಕಳಂಕರಹಿತ ರಾಜಕೀಯ ಜೀವನ ನಡೆಸಿಕೊಂಡು ಬಂದಿದ್ದಾರೆ. ಅವರ ಘನತೆ ಮತ್ತು ರಾಜಕೀಯ ಸಾಧನೆಗಳಿಗೆ ಮಸಿ ಬಳಿಯುವ ಉದ್ದೇಶದಿಂದ ಇಂತಹ ಪ್ರಯತ್ನ ನಡೆಸಲಾಗಿದೆ. ಈ ಬೆಳವಣಿಗೆಯಿಂದ ತಂದೆಗೆ ನೋವಾಗಿದೆ ಎಂದು ಯತೀಂದ್ರ ಹೇಳಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ರಾಕೇಶ್ ಶೆಟ್ಟಿ ಅವರನ್ನು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಲಾಗಿದೆ ಎಂಬ ವಿಚಾರವೂ ಪ್ರಸ್ತಾಪವಾಗಿದೆ. ಸ್ಟಿಂಗ್ ಆಪರೇಷನ್ ಹಿಂದೆ ಯಾರಿದ್ದಾರೆ, ಕಾಂಗ್ರೆಸ್‌ನವರೇ ಇದನ್ನು ನಡೆಸಿದ್ದಾರೆಯೇ ಅಥವಾ ಬೇರೆ ವ್ಯಕ್ತಿಗಳ ಕೈವಾಡವಿದೆಯೇ ಎಂಬುದನ್ನು ಸಮಗ್ರ ತನಿಖೆಯಿಂದ ಪತ್ತೆಹಚ್ಚಬೇಕಿದೆ ಎಂದರು.

ರಾಜ್ಯ ಸರ್ಕಾರ ನಡೆಸುತ್ತಿರುವ ತನಿಖೆಯ ಮೇಲೆ ನಮಗೆ ವಿಶ್ವಾಸವಿದೆ. ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು. ಒಂದು ವೇಳೆ ತನಿಖೆಯಲ್ಲಿ ಲೋಪ ಕಂಡುಬಂದರೆ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಲಾಗುವುದು. ಪ್ರಕರಣದ ಹಿಂದಿರುವ ಸತ್ಯ ಶೀಘ್ರದಲ್ಲೇ ಬಹಿರಂಗವಾಗಲಿದೆ ಎಂದು ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.