ರಾಯಚೂರು: ನಗರದ ಮಂತ್ರಾಲಯ ರಸ್ತೆಯ ಐಬಿ (ಪರಿವೀಕ್ಷಣಾ ಮಂದಿರ) ಸಮೀಪದಲ್ಲಿರುವ ಶಿಥಿಲಾವಸ್ಥೆಯ ಸರ್ಕಾರಿ ನೌಕರರ ವಸತಿಗೃಹಗಳನ್ನು ತೆರವುಗೊಳಿಸಿ, ಅದೇ ಸ್ಥಳದಲ್ಲಿ ಆಧುನಿಕ ಸೌಲಭ್ಯಗಳನ್ನೊಳಗೊಂಡ ಬಹುಮಹಡಿ ವಸತಿಗೃಹಗಳನ್ನು ನಿರ್ಮಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಮಂತ್ರಾಲಯ ರಸ್ತೆಯಲ್ಲಿರುವ ಸರ್ಕಾರಿ ನೌಕರರ ವಸತಿಗೃಹಗಳು ಸುಮಾರು 40ರಿಂದ 50 ವರ್ಷಗಳ ಹಿಂದೆ ನಿರ್ಮಾಣಗೊಂಡಿದ್ದು, ಪ್ರಸ್ತುತ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿವೆ. ಕಟ್ಟಡಗಳ ಗೋಡೆಗಳಲ್ಲಿ ದೊಡ್ಡ ಬಿರುಕುಗಳು ಕಾಣಿಸಿಕೊಂಡಿದ್ದು, ಮೇಲ್ಛಾವಣಿಯಿಂದ ನೀರು ಸೋರುವುದು ಹಾಗೂ ವಿದ್ಯುತ್ ಸಂಪರ್ಕದ ಸಮಸ್ಯೆಗಳಿಂದಾಗಿ ಅಲ್ಲಿ ವಾಸಿಸುತ್ತಿರುವ ನೌಕರರು ಮತ್ತು ಅವರ ಕುಟುಂಬದ ಸದಸ್ಯರ ಸುರಕ್ಷತೆಗೆ ಅಪಾಯ ಎದುರಾಗಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.
ಜಿಲ್ಲಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ನೂರಾರು ಸರ್ಕಾರಿ ನೌಕರರಿಗೆ ಸಮರ್ಪಕ ವಸತಿ ಸೌಲಭ್ಯಗಳಿಲ್ಲದ ಕಾರಣ ದುಬಾರಿ ಬಾಡಿಗೆ ಪಾವತಿಸಿ ಖಾಸಗಿ ಮನೆಗಳಲ್ಲಿ ವಾಸಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಲಿ ವಸತಿಗೃಹಗಳಿರುವ ಪ್ರದೇಶ ವಿಶಾಲವಾಗಿದ್ದು, ಹಳೆಯ ಕಟ್ಟಡಗಳನ್ನು ತೆರವುಗೊಳಿಸಿ ಕಡಿಮೆ ಜಾಗದಲ್ಲಿ ಹೆಚ್ಚಿನ ಕುಟುಂಬಗಳಿಗೆ ಅನುಕೂಲವಾಗುವಂತೆ ಜಿ+4 ಅಥವಾ ಜಿ+5 ಮಾದರಿಯ ಬಹುಮಹಡಿ ವಸತಿ ಸಮುಚ್ಚಯಗಳನ್ನು ನಿರ್ಮಿಸಲು ಅವಕಾಶವಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದರು.
ರಾಜ್ಯದ ಇತರೆ ಜಿಲ್ಲೆಗಳಲ್ಲಿ ಸರ್ಕಾರಿ ನೌಕರರಿಗಾಗಿ ಆಧುನಿಕ ವಸತಿ ಸಮುಚ್ಚಯಗಳನ್ನು ನಿರ್ಮಿಸುತ್ತಿರುವ ಮಾದರಿಯಲ್ಲಿಯೇ ರಾಯಚೂರಿನಲ್ಲಿಯೂ ನಿರ್ಮಾಣಕ್ಕೆ ಮುಂದಾಗಬೇಕು. ಈ ಸಂಬಂಧ ಸ್ಥಳ ಪರಿಶೀಲನೆ ನಡೆಸಿ, ಶಿಥಿಲಗೊಂಡ ಕಟ್ಟಡಗಳನ್ನು ತೆರವುಗೊಳಿಸಲು ಹಾಗೂ ಹೊಸ ವಸತಿಗೃಹಗಳ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅಗತ್ಯ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಯಿತು.
ಮನವಿಯನ್ನು ಸ್ವೀಕರಿಸಿದ ಜಿಲ್ಲಾಧಿಕಾರಿಗಳು ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೃಷ್ಣ ಶಾವಂತಗೇರಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಿವಮಾನಪ್ಪ, ಭೀಮೇಶ ನಾಯಕ, ರಾಮು ಗಾಣಧಾಳ, ಗುರುರಾಜ ಸೇರಿದಂತೆ ಇತರರು ಉಪಸ್ಥಿತರಿದ್ದರು.



