ಮಾನ್ವಿ: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಪ್ರಜಾಪ್ರಭುತ್ವದ ರಕ್ಷಣೆಗೆ ಆಗ್ರಹಿಸಿ ತಾಲೂಕಿನ ವಿವಿಧ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪಟ್ಟಣದಲ್ಲಿ ಸಂವಿಧಾನ ನಡಿಗೆ ಜಾಗೃತಿ ಜಾಥಾ ನಡೆಸಲಾಯಿತು.
ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಸಿಐಟಿಯು ಮುಖಂಡ ಟಿ.ಎಚ್. ಶರ್ಫುದ್ದೀನ್ ಪೋತ್ನಾಳ, ಭಾರತದ ಸಂವಿಧಾನವು ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಮತದಾನದ ಹಕ್ಕನ್ನು ಕಲ್ಪಿಸಿದೆ. ಆದರೆ, ಕೇಂದ್ರ ಚುನಾವಣಾ ಆಯೋಗವು ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಯ ನೆಪದಲ್ಲಿ ಕೋಟ್ಯಂತರ ಅರ್ಹ ಮತದಾರರನ್ನು ಮತದಾನದ ಹಕ್ಕಿನಿಂದ ವಂಚಿಸುವ ಪ್ರಯತ್ನ ನಡೆಸುತ್ತಿದೆ ಎಂದು ಆರೋಪಿಸಿದರು.
ಮತದಾನದ ಹಕ್ಕು ಪ್ರಜಾಪ್ರಭುತ್ವದ ಮೂಲಾಧಾರವಾಗಿದ್ದು, ಯಾವುದೇ ಕಾರಣಕ್ಕೂ ಅರ್ಹ ಮತದಾರರು ತಮ್ಮ ಹಕ್ಕಿನಿಂದ ವಂಚಿತರಾಗಬಾರದು. ಮತದಾರರ ಪಟ್ಟಿಯ ಪರಿಷ್ಕರಣೆ ಹೆಸರಿನಲ್ಲಿ ಸಾಮಾನ್ಯ ಜನರ ಮತದಾನದ ಹಕ್ಕಿಗೆ ಧಕ್ಕೆಯಾಗುವಂತಹ ಕ್ರಮಗಳನ್ನು ಕೈಗೊಳ್ಳಬಾರದು. ಚುನಾವಣಾ ಆಯೋಗವು ಕೂಡಲೇ ಎಸ್ಐಆರ್ ಪ್ರಕ್ರಿಯೆಯನ್ನು ಕೈಬಿಟ್ಟು ಎಲ್ಲ ಅರ್ಹ ಮತದಾರರ ಹಕ್ಕುಗಳನ್ನು ರಕ್ಷಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಆಶಯಗಳನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಮತದಾನದ ಹಕ್ಕಿನ ರಕ್ಷಣೆಗಾಗಿ ಪ್ರಗತಿಪರ ಸಂಘಟನೆಗಳು ಹೋರಾಟ ಮುಂದುವರಿಸಲಿವೆ ಎಂದು ಎಚ್ಚರಿಸಿದರು.
ಬಳಿಕ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಬಸವ ವೃತ್ತದವರೆಗೆ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಸಂವಿಧಾನ ನಡಿಗೆ ಜಾಗೃತಿ ಜಾಥಾ ನಡೆಸಿ ಎಸ್ಐಆರ್ ಪ್ರಕ್ರಿಯೆಗೆ ವಿರೋಧ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಎಂ.ಆರ್. ಬೇರಿ, ಮಾರಪ್ಪ ಹರವಿ, ಶರಣಕುಮಾರ ಮುದ್ದಮಗುಡ್ಡಿ, ಅಮರೇಶಪ್ಪ ಗವಿಗಟ್ಟ, ತಿಪ್ಪಣ್ಣ ಬಾಗಲವಾಡ, ರವೀಂದ್ರ ಜಾನೇಕಲ್, ಹನುಮಂತ ಕೋಟೆ, ಹನುಮಂತ ಗುಂಜಳ್ಳಿ, ಜಿಶಾನ್ ಅಖಿಲ್ ಸಿದ್ದಿಖಿ, ಕರೀಂ ಸಾಬ್, ನಾಸಿರ್ ಅಲಿ, ವಿಜಯರಾಣಿ ಸಿರವಾರ, ಸಹಾರ ಬೇಗಂ, ಕೊಂಡಯ್ಯ, ಹುಚ್ಚಪ್ಪ ಕುರುಡಿ, ಯಲ್ಲಪ್ಪ ಬಾದರದಿನ್ನಿ, ನಾಗವೇಣಿ, ರುದ್ರಪ್ಪ ನಾಯಕ, ಆಂಜನೇಯ್ಯ ಕೋಟೆ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.



